ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ ಸಾಹಿತ್ಯ ಭವನ ನಿರ್ಮಾಣಕ್ಕೆ ಶೀಘ್ರದಲ್ಲಿ ಭೂಮಿ ಪೂಜೆ ನೆರವೇರಿಸಲಾಗುತ್ತದೆ ಎಂದು ಸಂಸದ ಬಿ.ವೈ. ರಾಘವೇಂದ್ರ MP Raghavendra ಭರವಸೆ ನೀಡಿದರು.
ಪಟ್ಟಣದ ಕನ್ನಡ ಸಾಹಿತ್ಯ ಪರಿಷತ್ ನೂತನ ಕನ್ನಡ ಸಾಹಿತ್ಯ ಭವನ ನಿರ್ಮಾಣಕ್ಕೆ ನಿಗಧಿಯಾಗಿರುವ ಸ್ಥಳಕ್ಕೆ ಮಂಗಳವಾರ ಭೇಟಿ ನೀಡಿ ವೀಕ್ಷಣೆ ನಡೆಸಿ ಅವರು ಮಾತನಾಡಿದರು.
ಕನ್ನಡ ನಾಡು ನುಡಿ ಉಳಿಸಿ ಬೆಳೆಸಲು ಕನ್ನಡ ಸಾಹಿತ್ಯ ಪರಿಷತ್ ಶ್ರಮಿಸುತ್ತಿದೆ. ತಾಲ್ಲೂಕು ಅಧ್ಯಕ್ಷ ರಘು ನೇತೃತ್ವದಲ್ಲಿ ತಾಲ್ಲೂಕಿನಲ್ಲಿ ಕನ್ನಡ ಪರ ಚಟುವಟಿಕೆ ನಡೆಯುತ್ತಿದೆ. ಅಧ್ಯಕ್ಷ ರಘು ಹಾಗೂ ಸದಸ್ಯರ ಮನವಿಯಂತೆ ಈ ಸ್ಥಳದಲ್ಲಿಯೇ ನೂತನ ಕನ್ನಡ ಸಾಹಿತ್ಯ ಭವನ ನಿರ್ಮಾಣವಾಗಲಿದೆ. ಭವನ ನಿರ್ಮಾಣಕ್ಕೆ ರಾಜ್ಯ ಸರ್ಕಾರ 50ಲಕ್ಷ ಅನುದಾನ ನೀಡುತ್ತಿದೆ. ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಶೀಘ್ರದಲ್ಲಿ ಪೂರ್ಣಗೊಳ್ಳಲಿದ್ದು, ಶೀಘ್ರದಲ್ಲಿ ಸಾಹಿತ್ಯ ಭವನ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆಗೆ ನೆರವೇರಿಸೋಣ ಎಂದರು.
ಶಿಥೀಲ ವ್ಯವಸ್ಥೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ ಕಚೇರಿ ಕಟ್ಟಡವನ್ನು ತೆರವುಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸ್ಥಳದಲ್ಲಿದ್ದ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಚ್.ಎಸ್. ರಘು ಅವರಿಗೆ ಸೂಚಿಸಿದ ಸಂಸದ ರಾಘವೇಂದ್ರ ಅವರು, ಮುಂದಿನ ವರ್ಷ ಕನ್ನಡ ರಾಜ್ಯೋತ್ಸವಕ್ಕೆ ಸಾಹಿತ್ಯ ಭವನ ನಿರ್ಮಾಣ ಕಾಮಗಾರಿ ಪೂರ್ಣಗೊಂಡು ಸಾಹಿತ್ಯ ಭವನ ಲೋಕಾರ್ಪಣೆ ಮಾಡೋಣ ಎಂದರು.
ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಚ್.ಎಸ್. ರಘು ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ ಚಟುವಟಿಕೆ ನಡೆಸಲು ಅಗತ್ಯವಾದ ಕನ್ನಡ ಸಾಹಿತ್ಯ ಭವನ ನಿರ್ಮಾಣಕ್ಕೆ ಸರ್ಕಾರ 50ಲಕ್ಷ ಅನುದಾನ ನೀಡಲು ಕಾರಣರಾದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ, ಸಂಸದ ಬಿ.ವೈ. ರಾಘವೇಂದ್ರ ಹಾಗೂ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಕೆ.ಎಸ್. ಗುರುಮೂರ್ತಿ ಅವರಿಗೆ ಧನ್ಯವಾದ ಅರ್ಪಿಸುತ್ತೇನೆ. ಈ ಭೂಮಿಯನ್ನು ಸಾಹಿತ್ಯ ಭವನ ನಿರ್ಮಿಸಲು ಕನ್ನಡ ಸಾಹಿತ್ಯ ಪರಿಷತ್ತಿಗೆ ನೀಡಲು ನಿರ್ಣಯ ಕೈಗೊಂಡ ಪುರಸಭೆ ಅಧ್ಯಕ್ಷರು,ಸದಸ್ಯರಿಗೆ ಹಾಗೂ ಅಧಿಕಾರಿಗಳಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದರು.
ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿರ್ದೇಶಕ ಭದ್ರಾಪುರ ಹಾಲಪ್ಪ, ಪುರಸಭೆ ಸದಸ್ಯರಾದ ಟಿ.ಎಸ್. ಮೋಹನ್, ರೇಣುಕ ಸ್ವಾಮಿ, ಪುರಸಭೆ ಮುಖ್ಯಾಧಿಕಾರಿ ಭರತ್, ಆರ್ ಒ ಪರಶುರಾಮ್, ಎಂಜಿನಿಯರ್ ಲೋಕೇಶ್, ಮುಖಂಡರಾದ ಕೆ.ಜಿ. ಶಿವಪ್ಪಯ್ಯ, ಕಸಾಪ ಸದಸ್ಯರಾದ ಬಿ.ಎಲ್. ರಾಜು, ಮೋಹನ್ ರಾಜ್, ವಿಠ್ಠಲ್ ಮಹೇಂದ್ರಕರ್ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post