ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಕೊಪ್ಪಳ: ಜೀವನಾಶ್ಯಕ ವಸ್ತುಗಳನ್ನು ನಿಗದಿತ ಬೆಲೆಗಿಂತ ಹೆಚ್ಚಿಗೆ ಮಾರುವವರ ಮೇಲೆ ಕಾನೂನು ರೀತ್ಯಾ ಕ್ರಮ ತೆಗೆದುಕೊಳ್ಳಬೇಕೆಂದು ಕೃಷಿ ಸಚಿವ, ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಬಿ.ಸಿ. ಪಾಟೀಲ್ ಎಚ್ಚರಿಕೆ ನೀಡಿದರು.
ಕೊಪ್ಪಳ ಜಿಲ್ಲಾ ಜನಪ್ರತಿನಿಧಿಗಳು-ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಕೊರೋನಾ ನಿಯಂತ್ರಣಕ್ಕೆ ಸಂಬಂಧಪಟ್ಟಂತೆ ತೆಗೆದುಕೊಂಡಿರುವ ಕ್ರಮಗಳನ್ನು ಪರಿಶೀಲನೆ ಮಾಡಿ ಮಾಹಿತಿ ಪಡೆದರು.
ಜೀವನಾವಶ್ಯಕ ಸಾಮಗ್ರಿಗಳ ಪೂರೈಕೆಗೆ-ಸಾಗಣೆಗೆ ಸರ್ಕಾರ ನಿರ್ಬಂಧ ವಿಧಿಸಿಲ್ಲ. ಆದ್ದರಿಂದ ಕೊರತೆಯ ಪ್ರಶ್ನೆ ಉದ್ಬವಿಸುವುದಿಲ್ಲ. ಲಾಕ್ ಡೌನ್ ನೆಪವಾಗಿಟ್ಟುಕೊಂಡು ಜೀವನಾವಶ್ಯಕ ವಸ್ತುಗಳನ್ನು ಹೆಚ್ಚಿನ ಬೆಲೆಗೆ ಮಾರಿದರೆ ಕ್ರಮ ತೆಗೆದುಕೊಂಡು ಮೊಕದ್ದಮೆ ದಾಖಲಿಸುವಂತೆ ಅವರು ಸ್ಥಳದಲ್ಲಿಯೇ ಜಿಲ್ಲಾಧಿಕಾರಿಗೆ ಆದೇಶ ನೀಡಿದರು. ವಸ್ತುಗಳ ಬೆಲೆಗಳ ನಿಗದಿತ ದರಗಳನ್ನು ಅಂಗಡಿಗಳ ಮುಂದೆ ಪ್ರದರ್ಶಿಸಬೇಕೆಂದು ಸೂಚನೆ ನೀಡಿದರು.
ಔಷಧ – ಮನೆಗೆ ಬೇಕಾದ ದಿನಸಿ – ತರಕಾರಿ – ಖರೀದಿ ಬಿಟ್ಟು ಉಳಿದಂತೆ ಅನವಶ್ಯಕವಾಗಿ ಓಡಾಡುವವರ ಮೇಲೆ ಕ್ರಮ ಜರುಗಿಸಬೇಕಾಗುತ್ತದೆ ಎಂದು ಎಚ್ಚರಿಸಿದ ಅವರು ಕೃಷಿ ಚಟುವಟಿಕೆಗಳಿಗೆ ಯಾವುದೇ ನಿರ್ಬಂಧವೂ ಇಲ್ಲ ಎಂದು ಪುನರುಚ್ಚರಿಸಿದರು.
ಸ್ಥಳೀಯರಲ್ಲದ ವ್ಯಕ್ತಿಗಳು – ಜಿಲ್ಲೆಯವರಲ್ಲದ ವ್ಯಕ್ತಿಗಳ ಓಡಾಟಕ್ಕೆ ಸಂಬಂಧಿಸಿದಂತೆ ನಿಗಾ ವಹಿಸಬೇಕು. ಧಾರ್ಮಿಕ ಪ್ರವಚನಗಳಿಗೆ ಹೊರ ರಾಜ್ಯಗಳಿಂದ ಬಂದವರಿದ್ದರೆ ಮಾಹಿತಿ ಸಂಗ್ರಹಿಸಬೇಕು. ಅವರುಗಳ ಆರೋಗ್ಯ ಪರಿಶೀಲನೆ ನಡೆಸಬೇಕು ಎಂದು ಸೂಚಿಸಿದರು.
ಮರಣ ಅಥವಾ ಇನ್ನಿತರ ತೀರಾ ತುರ್ತು ಪರಿಸ್ಥಿತಿಗಳಲ್ಲಿ ಮಾತ್ರ ಸಂಬಂಧಿಕರನ್ನು ಜಿಲ್ಲೆಗೆ ಪ್ರವೇಶಿಸಲು ಅನುಮತಿಸಲಾಗುತ್ತದೆ ಎಂದು ಅವರು ಸ್ಪಷ್ಟಪಡಿಸಿದರು.
ಕೊಪ್ಪಳ ಜಿಲ್ಲಾ ಪಂಚಾಯತ್ ಅಧ್ಯಕ್ಷ ಹೆಚ್. ವಿಶ್ವನಾಥ ರೆಡ್ಡಿ, ಸಂಸದ ಕರಡಿ ಸಂಗಣ್ಣ, ಶಾಸಕರಾದ ಅಮರೆಗೌಡ ಪಾಟೀಲ ಬಯ್ಯಾಪುರ, ವೆಂಕರಾವ್ ನಾಡಗೌಡ, ಕೆ.ರಾಘವೇಂದ್ರ ಹಿಟ್ನಾಳ, ಪರಣ್ಣ ಮುನವಳ್ಳಿ, ಹಾಲಪ್ಪ ಆಚಾರ್ ಹಾಗೂ ಬಸವರಾಜ ದಢೆಸೂಗೂರು, ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಘುನಂದನ್ ಮೂರ್ತಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಸಂಗೀತಾ, ಅಪರ ಜಿಲ್ಲಾಧಿಕಾರಿ ಎಂ.ಪಿ ಮಾರುತಿ, ಉಪವಿಭಾಗಾಧಿಕಾರಿ ಸಿ.ಡಿ. ಗೀತಾ, ಜಂಟಿ ಕೃಷಿ ನಿರ್ದೇಶಕಿ ಶಬಾನ ಎಂ. ಶೇಖ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಕೃಷ್ಣ ಉಕ್ಕುಂದ, ಡಿವೈಎಸ್‌ಪಿ ವೆಂಕಟಪ್ಪ ನಾಯಕ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಾಂತೇಶ ಪಾಟೀಲ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ರೈತ ಮುಖಂಡರು ಉಪಸ್ಥಿತರಿದ್ದರು.
Get in Touch With Us info@kalpa.news Whatsapp: 9481252093
Discussion about this post