ಬೆಂಗಳೂರು: ಕೋಟ್ಯಂತರ ಅಭಿಮಾನಿಗಳನ್ನು ಅಗಲಿ ಬಾರದ ಲೋಕಕ್ಕೆ ತೆರಳಿರುವ ನಟ ಅಂಬರೀಶ್ ಅವರ ಅಂತ್ಯಸಂಸ್ಕಾರವನ್ನು ಸೋಮವಾರ(ನ.26) ನಡೆಸಲು ನಿರ್ಧರಿಸಲಾಗಿದೆ.
ಈ ಕುರಿತಂತೆ ಕುಟುಂಬಸ್ತರೊಂದಿಗೆ ಚರ್ಚಿಸಿ ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ ಎಂದು ಡಿಸಿಪಿ ಅಣ್ಣಾಮಲೈ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಅಂಬರೀಶ್ ಅವರ ಪಾರ್ಥಿವ ಶರೀರವನ್ನು ನಸುಕಿನ 4 ಗಂಟೆ ವೇಳೆಗೆ ಅವರ ಜೆಪಿ ನಗರ ನಿವಾಸಕ್ಕೆ ರವಾನೆ ಮಾಡಲಿದ್ದು, ಅಲ್ಲಿ ಸಂಪ್ರದಾಯದ ಪ್ರಕಾರ ಪೂಜೆ ನಡೆಯಲಿದೆ. ಈ ವೇಳೆ ಕುಟುಂಬಸ್ತರಿಗೆ ಮಾತ್ರ ಅವಕಾಶ ಕಲ್ಪಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ನಿವಾಸದ ಬಳಿ ಬಿಗಿ ಭದ್ರತೆ ವ್ಯವಸ್ಥೆ ಮಾಡಲಾಗಿದೆ.
ನಾಳೆ ಅಂದರೆ ಭಾನುವಾರ ಮುಂಜಾನೆ 8 ಗಂಟೆಯಿಂದ ಕಂಠೀರವ ಸ್ಟೇಡಿಯಂನಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಸ್ಟೇಡಿಯಂನಲ್ಲಿ ಈಗಾಗಲೇ ಸಿದ್ದತೆಗಳನ್ನು ಮಾಡಲಾಗಿದ್ದು, ಗಣ್ಯರು ಹಾಗೂ ಸಾರ್ವಜನಿಕರಿಗೆ ಪ್ರತ್ಯೇಕ ಗೇಟ್‌ಗಳ ವ್ಯವಸ್ಥೆ ಮಾಡಲಾಗಿದೆ. ನಾಳೆ ದಿನ ಪೂರ್ತಿ ಅಂತಿಮ ದರ್ಶನಕ್ಕೆ ಅವಕಾಶವಿದ್ದು, ಇದಕ್ಕೆ ಅಗತ್ಯವಿರುವ ಎಲ್ಲ ಸಿದ್ದತೆಗಳನ್ನು ಮಾಡಲಾಗುತ್ತಿದೆ.
ಅಂತಿಮ ದರ್ಶನಕ್ಕೆ ಲಕ್ಷಾಂತರ ಮಂದಿ ಆಗಮಿಸುವ ಸಾಧ್ಯತೆಯಿದ್ದು, ಸಾವಿರಾರು ಸಂಖ್ಯೆಯಲ್ಲಿ ಪೊಲೀಸ್ ಸಿಬ್ಬಂದಿಗಳನ್ನು ಭದ್ರತೆಗಾಗಿ ನಿಯೋಜನೆ ಮಾಡಲಾಗಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳು ಉಸ್ತುವಾರಿ ವಹಿಸಿಕೊಂಡಿದ್ದಾರೆ.
ಇನ್ನು, ಅಂಬಿ ಕುಟುಂಬಸ್ತರ ಇಚ್ಚೆಯಂತೆ ಬೆಂಗಳೂರಿನಲ್ಲಿಯೇ ಅಂತಿಮ ಸಂಸ್ಕಾರ ನೆರವೇರಿಸಲು ನಿರ್ಧರಿಸಲಾಗಿದೆ. ಕಂಠೀರವ ಸ್ಟುಡಿಯೋದಲ್ಲಿರುವ ಡಾ.ರಾಜ್‌ಕುಮಾರ್ ಅವರ ಸ್ಮಾರಕದ ಬಳಿಯಲ್ಲಿಯೇ ಅಂಬರೀಶ್ ಅವರ ಸ್ಮಾರಕವನ್ನೂ ಸಹ ನಿರ್ಮಿಸಲು ನಿರ್ಧರಿಸಲಾಗಿದ್ದು, ಇದಕ್ಕಾಗಿ, ಇಲ್ಲಿಯೇ ಅಂತ್ಯಕ್ರಿಯೆ ನಡೆಸಲಾಗುತ್ತದೆ ಎಂದು ವರದಿಯಾಗಿದೆ.
ಇನ್ನು, ಅಂಬರೀಷ್ ಅವರು ನಿಧನ ಹೊಂದಿದ ವಿಕ್ರಂ ಆಸ್ಪತ್ರೆಯ ಮೇಲೆ ಅಭಿಮಾನಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಆಸ್ಪತ್ರೆಯ ಮುಂಭಾಗದಲ್ಲಿ ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದ ಅಭಿಮಾನಿಗಳು ಕಲ್ಲು ತೂರಾಟ ನಡೆಸಿ, ಆಸ್ಪತ್ರೆಯ ಒಳಗೆ ನುಗ್ಗಲು ಯತ್ನಿಸಿದರು. ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು.
Discussion about this post