ಬೆಂಗಳೂರು: ಅನಾರೋಗ್ಯದ ಹಿನ್ನೆಲೆಯಲ್ಲಿ ನಿನ್ನೆ ಇಹಲೋಕ ತ್ಯಜಿಸಿದ ಬಿಜೆಪಿ ಹಿರಿಯ ಮುಖಂಡ ಹಾಗೂ ಕೇಂದ್ರ ಸಚಿವ ಅನಂತ ಕುಮಾರ್ ಅವರ ಅಂತ್ಯಸಂಸ್ಕಾರ ಇಂದು ಮಧ್ಯಾಹ್ನ ನಡೆಯಲಿದೆ.
ಇಂದ ಮಧ್ಯಾಹ್ನ 1.30ರ ನಂತರ ಚಾಮರಾಜಪೇಟೆಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ಸ್ಮಾರ್ಥ ಬ್ರಾಹ್ಮಣ ಸಂಪ್ರದಾಯದಂತೆ ಅಂತಿಮ ವಿಧಿವಿಧಾನಗಳು ನಡೆಯಲಿದೆ.
ಇಂದು ಬೆಳಗ್ಗೆ 8 ಗಂಟೆಗೆ ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಪಾರ್ಥಿವ ಶರೀರವನ್ನು ತಂದು ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಅಂತಿಮ ಗೌರವ ಸಲ್ಲಿಸಲಿದ್ದಾರೆ.
ಅನಂತಕುಮಾರ್ ಅವರ ಆತ್ಮಕ್ಕೆ ಸದ್ಗತಿ ದೊರೆತು, ಮೋಕ್ಷ ದೊರೆಯಲಿ ಎಂಬ ಉದ್ದೇಶದಿಂದ ಹತ್ತಾರು ವೈದಿಕರು ಧಾರ್ಮಿಕ ಕಾರ್ಯಗಳನ್ನು ನಡೆಸುತ್ತಿದ್ದಾರೆ. ವಿಷ್ಣು ಸಹಸ್ರನಾಮ, ಭಗವದ್ಗೀತೆ ಪಠಣ ಸೇರಿದಂತೆ ಹಲವು ಶಾಂತಿ ಮಂತ್ರಗಳ ನಿರಂತರ ಪಠಣ ನಡೆಯುತ್ತಿದೆ.
ಬಸವನಗುಡಿಯಲ್ಲಿರುವ ಅನಂತ ಕುಮಾರ್ ನಿವಾಸದಿಂದ ಮಲ್ಲೇಶ್ವರಂ ನಲ್ಲಿರುವ ಬಿಜೆಪಿ ಕಚೇರಿಯವರೆಗೂ ಮೆರವಣಿಗೆಯಲ್ಲಿ ಪಾರ್ಥಿವ ಶರೀರವನ್ನು ಕೊಂಡೊಯ್ಯಲಾಗುತ್ತಿದೆ. ಅಲಂಕೃತ ಸೇನಾ ವಾಹನ ಸೇರಿದಂತೆ ಒಟ್ಟು 14 ವಾಹನಗಳ ಮೆರವಣಿಗೆಯಲ್ಲಿ ಕೊಂಡೊಯ್ಯುತ್ತಿದ್ದು, ಸೇನೆ ಹಾಗೂ ಎನ್‌ಎಸ್‌ಜಿ ಭದ್ರತಾ ವ್ಯವಸ್ಥೆ ಕೈಗೊಂಡಿದೆ. ಇದರೊಂದಿಗೆ ಬಸವನಗುಡಿ, ಮಲ್ಲೇಶ್ವರಂ ಹಾಗೂ ಮೆರವಣಿಗೆ ಸಾಗುವ ಮಾರ್ಗದುದ್ದಕ್ಕೂ ಸುಮಾರು 2 ಸಾವಿರ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, ಗೃಹಸಚಿವ ರಾಜನಾಥ್ ಸಿಂಗ್, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸೇರಿದಂತೆ ದೇಶದ ಗಣ್ಯಾತಿಗಣ್ಯರು ಅನಂತಕುಮಾರ್ ಅವರ ಅಂತಿಮ ದರ್ಶನಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನಗರದ ಹಲವು ಭಾಗಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಆನಂತರ 10 ಗಂಟೆ ವೇಳೆಗೆ ಬಸವನಗುಡಿಯಲ್ಲಿರುವ ನ್ಯಾಶನಲ್ ಕಾಲೇಜು ಮೈದಾನದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. 1.30ರ ನಂತರ ಸಚಿವರ ಅಂತ್ಯಸಂಸ್ಕಾರ ನಡೆಯಲಿದೆ.
Discussion about this post