ಬೆಂಗಳೂರು: ಭಾರೀ ಕುತೂಹಲ ಕೆರಳಿಸಿದ್ದ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ಮುಹೂರ್ತ ನಿಗದಿ ಮಾಡಿದ್ದು, ಆಗಸ್ಟ್ 29ರಂದು ಚುನಾವಣೆ ನಡೆಯಲಿದ್ದು, ಸೆಪ್ಟೆಂಬರ್ 1ರಂದು ಫಲಿತಾಂಶ ಪ್ರಕಟವಾಗಲಿದೆ.
ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಶ್ರೀನಿವಾಸಾಚಾರಿ, ಆಗಸ್ಟ್ 10 ರಂದು ಅಧಿಸೂಚನೆ ಹೊರಡಿಸಲಿದ್ದು, ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಮಾಡಬಹುದಾಗಿದೆ, ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಇವಿಎಂ ಬಳಸಲು ಆಯೋಗ ನಿರ್ಧರಿಸಿದೆ. ಚುನಾವಣೆಗೆ ಪೊಲೀಸರು ಸೇರಿದಂತೆ ಸುಮಾರು 40 ಸಾವಿರ ಸಿಬ್ಬಂದಿ ನಿಯೋಜಿಸಲಾಗುವುದು ಎಂದು ತಿಳಿಸಿದ್ದಾರೆ.
108 ಸ್ಥಳೀಯ ಸಂಸ್ಥೆಗಳ ಅವಧಿ ಮುಗಿದ ಹಿನ್ನೆಲೆಯಲ್ಲಿ ಚುನಾವಣಾ ದಿನ ಘೋಷಿಸಿದೆ, 29 ನಗರಸಭೆ, 53 ಪುರಸಭೆ ಹಾಗೂ 23 ಪಟ್ಟಣ ಪಂಚಾಯತಿಗಳಿಗೆ ಚುನಾವಣೆ ನಡೆಯಲಿದೆ.
ಶಿವಮೊಗ್ಗ, ಮೈಸೂರು ಮತ್ತು ತುಮಕೂರು ಪಾಲಿಕೆಗಳ ಚುನಾವಣೆಗೆ ತಡೆಕೋರಿ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ, ಹೈಕೋರ್ಟ್ ಆದೇಶದ ಬಳಿಕ ಆ ಪಾಲಿಕೆಗಳ ಚುನಾವಣೆಗೆ ದಿನಾಂಕ ಪ್ರಕಟಿಸಲಾಗುವುದು ಎಂದಿದ್ದಾರೆ.
Discussion about this post