ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಆಯುಷ್ಮಾನ್ ಭಾರತ ಆರೋಗ್ಯ ಕಾರ್ಡ್‌ನ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮೇಯರ್ ಸುವರ್ಣ ಶಂಕರ್ ಹೇಳಿದರು.
ನಗರದ ಗಾಂಧಿಬಜಾರ್ ತುಳಜಾಭವಾನಿ ದೇವಸ್ಥಾನ ಸಭಾಂಗಣದಲ್ಲಿ ಇಂದು ಭಾವಸಾರ ಕ್ಷತ್ರಿಯ ಮಹಾಜನ ಸಮಾಜದ ವತಿಯಿಂದ ಆಯೋಜಿಸಿದ್ದ ಆಯುಷ್ಮಾನ್ ಭಾರತ ಆರೋಗ್ಯ ಕಾರ್ಡ್ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕೇಂದ್ರದಲ್ಲಿನ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಸಾಕಷ್ಟು ಜನಪರ ಯೋಜನೆಗಳನ್ನು ಜಾರಿಗೊಳಿಸಿದೆ. ಅದರಲ್ಲೂ ಮುಖ್ಯವಾಗಿ ದೇಶವಾಸಿಗಳ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಆಯುಷ್ಮಾನ್ ಭಾರತ ಆರೋಗ್ಯ ಕಾರ್ಡ್ ಯೋಜನೆ ಜನರಿಗೆ ಅನುಕೂಲವಾಗಿದೆ ಎಂದರು.
ಆರೋಗ್ಯ ಕಾರ್ಡ್‌ನಿಂದ ಬಡವರು, ಮಧ್ಯಮ ವರ್ಗದವರು, ಕಾರ್ಮಿಕರು ಸೇರಿದಂತೆ ಹಲವು ವರ್ಗದ ಜನರಿಗೆ ಅನುಕೂಲವಾಗಿದೆ. ಕಾರ್ಡ್ ಹೊಂದಿದವರಿಗೆ ವಿವಿಧ ಆಸ್ಪತ್ರೆಗಳಲ್ಲಿ ಅನೇಕ ಕಾಯಿಲೆಗಳಿಗೆ ಸಂಪೂರ್ಣ ಉಚಿತವಾಗಿ ಚಿಕಿತ್ಸೆ ದೊರಕಲಿದೆ. ಹೀಗಾಗಿ ಪ್ರತಿಯೊಬ್ಬರು ಆರೋಗ್ಯ ಕಾರ್ಡ್ ಮಾಡಿಸಿಕೊಳ್ಳಿ ಎಂದು ಕರೆ ನೀಡಿದರು.
ಇದೇ ರೀತಿ ಕೇಂದ್ರ ಸರ್ಕಾರ ಮುದ್ರ ಯೋಜನೆಯನ್ನು ಜಾರಿಗೊಳಿಸಿದೆ. ಯೋಜನೆ ಮೂಲಕ ಸ್ವಉದ್ಯೋಗಕ್ಕೆ ಸಾಲ ದೊರಕಲಿದೆ. ಸ್ವ ಉದ್ಯೋಗ ನಡೆಸಲು ಬಯಸುವವರು ಮುದ್ರ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು. ಸ್ವ ಉದ್ಯೋಗ ಕೈಗೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂದು ಕರೆ ನೀಡಿದರು.
ಭಾವಸಾರ ಕ್ಷತ್ರಿಯ ಮಹಾಜನ ಸಮಾಜ ಆಯೋಜಿಸಿರುವ ಕಾರ್ಯಕ್ರಮ ಶ್ಲಾಘನೀಯವಾದದ್ದು, ಇಂತಹ ಕಾರ್ಯಕ್ರಮ ಹೆಚ್ಚು ಹೆಚ್ಚಾಗಿ ನಡೆಯಬೇಕು. ಸರ್ಕಾರದ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಬೇಕು. ಈಗಾಗಲೇ, ಕೋರೋನ ವೈರಸ್ ಸಾಕಷ್ಟು ಆತಂಕ ಸೃಷ್ಟಿ ಮಾಡಿದೆ. ಇಂತಹ ಸಂದರ್ಭದಲ್ಲಿ ಕಡುಬಡವರಿಗೆ, ಮಧ್ಯಮವರ್ಗದವರಿಗೆ ಆರೋಗ್ಯ ಕಾರ್ಡು ಉಪಯೋಗಕ್ಕೆ ಬರಲಿದೆ ಎಂದರು.
ಉಪಮೇಯರ್ ಸುರೇಖಾ ಮುರಳೀಧರ್ ಮಾತನಾಡಿ, ಭಾವಸಾರ ಕ್ಷತ್ರಿಯ ಸಮಾಜ ಆರ್ಥಿಕವಾಗಿ ಇನ್ನಷ್ಟು ಸಬಲತೆ ಹೊಂದಬೇಕು. ಮುಖ್ಯವಾಹಿನಿಗೆ
ಬರುವಂತಾಗಬೇಕು. ಈ ನಿಟ್ಟಿನಲ್ಲಿ ಪ್ರಯತ್ನ ನಡೆಸಬೇಕು ಎಂದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರ ಜನರ ಕಲ್ಯಾಣಕ್ಕಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸಿದೆ. ಇವುಗಳ ಸದುಪಯೋಗ ಪಡೆದುಕೊಂಡು ಆರ್ಥಿಕವಾಗಿ ಸಮಾಜ ಇನ್ನಷ್ಟು ಸದೃಢವಾಗಬೇಕು ಎಂದು ಕರೆ ನೀಡಿದರು.
ಭಾವಸಾರ ಕ್ಷತ್ರಿಯ ಮಹಾಜನ ಸಮಾಜದ ಅಧ್ಯಕ್ಷ ಓಂಪ್ರಕಾಶ್ ತೇಲ್ಕರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಹಾಜನ ಸಮಾಜದ ಮಾಜಿ ಅಧ್ಯಕ್ಷ ಪುರುಷೋತ್ತಮ್, ಪಾಲಿಕೆ ಸದಸ್ಯೆ ಕಲ್ಪನಾ ರಮೇಶ್, ವಿಧಾನ ಪರಿಷತ್ ಮಾಜಿ ಸದಸ್ಯ ಆರ್.ಕೆ. ಸಿದ್ದರಾಮಣ್ಣ, ಸಮಾಜದ ಪ್ರಮುಖರಾದ ಸಂತೋಷ್ ಸಾಕ್ರೆ, ಗಿರೀಶ್ ನಾಜ್ರೆ, ನವೀನ್ ಸಾಕ್ರೆ, ಗೋ.ವ. ಮೋಹನಕೃಷ್ಣ, ಗಜೇಂದ್ರನಾಥ್ ಮಾಳೋದೆ, ಭಾವಸಾರ ವಿಜನ್ ಇಂಡಿಯಾ ವೈಭವ ಅಧ್ಯಕ್ಷ ಕೆ.ಟಿ. ಶ್ರೀನಿವಾಸ್, ಮತ್ತಿತರರು ಉಪಸ್ಥಿತರಿದ್ದರು.
Get In Touch With Us info@kalpa.news Whatsapp: 9481252093
Discussion about this post