ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮ್ಯಾಂಡಸ್ ಚಂಡಮಾರುತದ ಪರಿಣಾಮ ಬೆಂಗಳೂರು, ಚಾಮರಾಜನಗರ, ಕೊಡಗು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿ.16ರವರೆಗೂ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಭಾರತೀಯ ಹವಾಮಾನ ಇಲಾಖೆ ಈ ಕುರಿತಂತೆ ಇಂದು ಮಧ್ಯಾಹ್ನ ಮಾಹಿತಿ ಬಿಡುಗಡೆ ಮಾಡಿದ್ದು, ಇದರಂತೆ ಚಂಡಮಾರುತದ ಪರಿಣಾಮ ಚಾಮರಾಜನಗರ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಅತಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೊ ಅಲರ್ಟ್ ಘೋಷಿಸಿದೆ. ಸ್ಥಳೀಯ ಅಧಿಕಾರಿಗಳು ಈಬಗ್ಗೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದೆ. ಇನ್ನು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಹಾವೇರಿ, ಗದಗ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಿದೆ.
ಇದೇವೇಳೆ ಅಕಾಲಿಕ ಸೈಕ್ಲೋನ್ ಮಳೆಯಿಂದಾಗಿ ಬೆಳೆ ಹಾನಿಯಾಗುವ ಅಪಾಯ ಎದುರಾಗಿದ್ದು, ರೈತರು ಕಂಗಾಲಾಗಿದ್ದಾರೆ. ಒಂದೆಡೆ ಸೈಕ್ಲೋನ್ ಪರಿಣಾಮ ಅಕಾಲದಲ್ಲಿ ಮಳೆಯಾಗುತ್ತಿದ್ದರೆ, ಇನ್ನೊಂದೆಡೆ ಶಿವಮೊಗ್ಗ ಸೇರಿ ಹಲವು ಜಿಲ್ಲೆಗಳಲ್ಲಿ ಶೀತ ಗಾಳಿ ಬಾಧಿಸುತ್ತಿದೆ. ಶಿವಮೊಗ್ಗ ಜಿಲ್ಲೆಯಾದ್ಯಂತ ಅಕಾಲಿಕ ಮಳೆ ಹಾಗೂ ಚಳಿ ವಾತಾವರಣದಿಂದಾಗಿ ಜನರು ತತ್ತರಿಸುತ್ತಿದ್ದು, ಆರೋಗ್ಯದಲ್ಲಿ ವ್ಯತ್ಯಾಸವಾಗುತ್ತಿದೆ ಎಂದು ವರದಿಯಾಗಿದೆ.
ಡಿ.14ರ ಬುಧವಾರದ ನಂತರ ಚಳಿ ಮತ್ತಷ್ಟು ಹೆಚ್ಚಾಗಲಿದೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post