ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ರಾಜ್ಯದ 30ನೆಯ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಬಿಜೆಪಿ ಹೈಕಮಾಂಡ್‌ನ ಸೂಚನೆ ಮೇರೆಗೆ ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಆಗಿರುವ ಬೊಮ್ಮಾಯಿ ಅವರು ಇಂದು ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಮಾಡಿದರು.
ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್, ಬಸವರಾಜ ಬೊಮ್ಮಾಯಿ ಅವರಿಗೆ ಪ್ರಮಾಣ ವಚನ ಭೋದಿಸಿದರು. ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರು ಕಾರ್ಯಕ್ರಮ ನಡೆಸಿಕೊಟ್ಟರು.
ಬಳಿಕ ನೂತನ ಮುಖ್ಯಮಂತ್ರಿ ಕಡತಕ್ಕೆ ಸಹಿ ಹಾಕಿದರು. ನಂತರ ರಾಜ್ಯಪಾಲ ಗೆಹ್ಲೋಟ್, ಸಿಎಂ ಬೊಮ್ಮಾಯಿ ಅವರಿಗೆ ಹೂಗುಚ್ಚ ನೀಡಿ ಅಭಿನಂದಿಸಿದರು. ಮೂವತ್ತನೆ ಮುಖ್ಯಮಂತ್ರಿ ಯಾಗಿ ಬಸವರಾಜ ಬೊಮ್ಮಾಯಿ ಅಧಿಕಾರ ಸ್ವೀಕರಿಸಿದರು.
ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವುದಕ್ಕೂ ಮುನ್ನ ಬೊಮ್ಮಾಯಿ ಅವರು ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿ, ರಾಜಕೀಯ ಗುರು ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಆಶಿರ್ವಾದ ಪಡೆದರು. ಕುಮಾರಕೃಪ ಅತಿಥಿ ಗೃಹದಲ್ಲಿ ಕೇಂದ್ರ ವೀಕ್ಷಕರಾದ ಧರ್ಮೇಂದ್ರ ಪ್ರಧಾನ್ ಸೇರಿ ಹಲವು ನಾಯಕರ ಜತೆ ಚರ್ಚೆ ನಡೆಸಿದರು.
ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು. ಈ ಬಗ್ಗೆ ಇಂದು ಚರ್ಚೆ ನಡೆಯಲಿದೆ. ಪ್ರಮಾಣವಚನ ಸಮಾರಂಭದ ಬಳಿಕ ಸಚಿವ ಸಂಪುಟ ಸಭೆ ಕರೆಯಲಾಗಿದೆ. ಆ ಬಳಿಕ ಅಧಿಕಾರಿಗಳ ಸಭೆ ನಡೆಸಿ, ರಾಜ್ಯದಲ್ಲಿ ಕೋವಿಡ್ ಹಾಗೂ ಪ್ರವಾಹ ಪರಿಸ್ಥಿತಿಯ ಅವಲೋಕನ ನಡೆಸಲಾಗುವುದು. ಜತೆಗೆ ಪ್ರವಾಹಪೀಡಿತ ಪ್ರದೇಶಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲಿಸುತ್ತೇನೆ ಎಂದರು.
ಬಿ.ವೈ. ವಿಜಯೇಂದ್ರ ಪ್ರತಿಕ್ರಿಯೆ:
ಅನುಭವಿ ನಾಯಕ ಬಸವರಾಜ್ ಬೊಮ್ಮಾಯಿ ಮುಖ್ಯಮಂತ್ರಿಯಾಗಿರುವುದು ಸಂತಸದ ವಿಷಯ. ಅವರು ಸಿಎಂ ಆಗಿರುವುದರಿಂದ ಸೂಪರ್ ಸಿಎಂ ಎಂಬ ಟ್ಯಾಗ್ ಲೈನ್ ನಿಂದ ನಾನು ಹೊರ ಬಂದಿದ್ದೇನೆ ಎಂದು ಬಿಜೆಪಿ ನಾಯಕ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
ಬೊಮ್ಮಾಯಿ ನೇತೃತ್ವದ ಸರ್ಕಾರದಲ್ಲಿ ಯುವಕರಿಗೆ ಹೆಚ್ಚಿನ ಅವಕಾಶ ಸಿಗುವ ನಿರೀಕ್ಷೆ ಇದೆ. ರಾಜ್ಯದಲ್ಲಿ ಮತ್ತಷ್ಟು ಅಭಿವೃದ್ಧಿ ಕಾರ್ಯಗಳು ಹೊಸ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಚುರುಕು ಪಡೆಯಲಿವೆ ಎಂದು ಆಶಯ ವ್ಯಕ್ತಪಡಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post