ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಮ್ಮ ರಾಜೀನಾಮೆ ಕೇಳುವ ಮೊದಲು ಇಂತಹದ್ದೇ ಅವಘಡಗಳು ನಡೆದಿದ್ದ ಸಂದರ್ಭದಲ್ಲಿ ರಾಜೀನಾಮೆ ನೀಡಿದ್ದ ಬಿಜೆಪಿ ನಾಯಕರ ಪಟ್ಟಿಯನ್ನು ಬಿಡುಗಡೆ ಮಾಡುವಂತೆ ರಾಜ್ಯದ ಬಿಜೆಪಿ ನಾಯಕರಿಗೆ ಮನವಿ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ #CM Siddaramaiah ಹೇಳಿದ್ದಾರೆ.
ಚಿನ್ನಸ್ವಾಮಿ ಸ್ಟೇಡಿಯಂ #Chinnaswamy Stadium ಬಳಿ ನಡೆದಿರುವುದು ಒಂದು ಅಪಘಾತ. ಒಂದು ಜವಾಬ್ದಾರಿಯುತ ಸರ್ಕಾರವಾಗಿ ಆ ಘಟನೆಯ ಹೊಣೆಯನ್ನು ನಾವು ಹೊತ್ತಿದ್ದೇವೆ. ಬೆಂಗಳೂರು ನಗರ ಪೊಲೀಸ್ ಕಮಿಷನರ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿದ್ದೇವೆ, ರಾಜ್ಯ ಗುಪ್ತಚರ ಇಲಾಖೆಯ ಮುಖ್ಯಸ್ಥರನ್ನು ವರ್ಗಾವಣೆ ಮಾಡಿದ್ದೇವೆ. ನನ್ನ ರಾಜಕೀಯ ಕಾರ್ಯದರ್ಶಿಯನ್ನು ಸೇವೆಯಿಂದ ಬಿಡುಗಡೆಗೊಳಿಸಿದ್ದೇನೆ. ಈ ಪ್ರಕರಣದ ಸಮಗ್ರ ತನಿಖೆಗೆ ನಿವೃತ್ತ ನ್ಯಾಯಾಧೀಶರಾದ ಜಾನ್ ಮೈಕೆಲ್ ಕುನ್ಹಾ ಅವರ ನೇತೃತ್ವದಲ್ಲಿ ಏಕಸದಸ್ಯ ಆಯೋಗವನ್ನೂ ರಚಿಸಿದ್ದೇವೆ ಎಂದಿದ್ದಾರೆ.

ಪ್ರತಿಯೊಂದು ಅಪಘಾತದ ಹಿಂದೆ ಸಾವು-ನೋವಿಗೆ ಈಡಾದವರ ಕುಟುಂಬದ ದು:ಖ ಮತ್ತು ಸಂಕಟ ಇರುವುದನ್ನು ನಾವು ಅರ್ಥಮಾಡಿಕೊಂಡಿದ್ದೇವೆ. ಇದೇ ಕಾರಣಕ್ಕಾಗಿ ನಾವು ಇಂತಹ ಪ್ರಕರಣಗಳನ್ನು ರಾಜಕೀಯಕ್ಕೆ ಬಳಸುವುದಿಲ್ಲ. ಹೀಗಿದ್ದರೂ ರಾಜ್ಯದ ಬಿಜೆಪಿ ನಾಯಕರು ಮತ್ತೆ ಮತ್ತೆ ಇಂತಹ ಪ್ರಕರಣಗಳನ್ನು ಕೆದಕಿ ಕೆದಕಿ ಜನರನ್ನು ಪ್ರಚೋದಿಸುತ್ತಿರುವ ಹಿನ್ನೆಲೆಯಲ್ಲಿ ಇವರ ಆತ್ಮವಂಚಕ ನಡವಳಿಕೆಯನ್ನು ಬಯಲು ಮಾಡುವ ಉದ್ದೇಶದಿಂದ ಬಿಜೆಪಿ ಆಡಳಿತದಲ್ಲಿನ ಕೆಲವು ಪ್ರಕರಣಗಳನ್ನು ರಾಜ್ಯದ ಜನತೆಯ ಗಮನಕ್ಕೆ ತರಲು ಇಷ್ಟಪಡುತ್ತೇನೆ.

ಕಳೆದ ಏಪ್ರಿಲ್ ತಿಂಗಳಲ್ಲಿ ಪಹಲ್ಗಾಮ್‌ನಲ್ಲಿ ಪಾಕ್ ಉಗ್ರಗಾಮಿಗಳು ನಡೆಸಿದ್ದ ಹತ್ಯಾಕಾಂಡದಲ್ಲಿ 26 ಭಾರತೀಯರು ಪ್ರಾಣ ಕಳೆದುಕೊಂಡರು. ಈ ಘಟನೆಯ ಹೊಣೆ ಹೊತ್ತು ಪ್ರಧಾನಿ ರಾಜೀನಾಮೆ ನೀಡಬೇಕೆಂದು ನಮ್ಮ ಪಕ್ಷ ಒತ್ತಾಯಿಸಿಲ್ಲ. ಈ ಘಟನೆಯ ಚರ್ಚೆಗೆ ಕನಿಷ್ಠ ಸಂಸತ್ ನ ವಿಶೇಷ ಅಧಿವೇಶನ ಕರೆಯಬೇಕೆಂಬ ನಮ್ಮ ಪಕ್ಷದ ಬೇಡಿಕೆಯನ್ನೂ ಪ್ರಧಾನಿಯವರು ಒಪ್ಪಿಕೊಂಡಿಲ್ಲ. ದೇಶಕ್ಕೆಲ್ಲ ಸಿಂಧೂರ ಹಂಚಲು ಹೊರಟಿರುವ ಪ್ರಧಾನಿಯವರಿಗೆ ಇಲ್ಲಿಯ ವರೆಗೆ 26 ಅಮಾಯಕರ ಸಾವಿಗೆ ಕಾರಣರಾದ ನಾಲ್ಕು ಮಂದಿ ದುರುಳರು ಯಾರು ಎನ್ನುವುದನ್ನು ಪತ್ತೆ ಹಚ್ಚಲಾಗಿಲ್ಲ. ಇದು ಕೇಂದ್ರ ಸರ್ಕಾರದ ವೈಫಲ್ಯ ಅಲ್ಲವೇ? ಈ ವೈಫಲ್ಯದ ಹೊಣೆಯನ್ನು ಯಾರು ಹೊರಬೇಕು? ಪಂಡಿತ ಜವಾಹರಲಾಲ್ ನೆಹರೂ ಅವರಾ? ರಾಹುಲ್ ಗಾಂಧಿಯವರಾ? ಇಲ್ಲವೇ ಪ್ರಧಾನಿ ನರೇಂದ್ರ ಮೋದಿಯವರೇ?

ಗುಜರಾತ್ ನ ಮೋರ್ಬಿ ಸೇತುವೆ ಕುಸಿದು ಬಿದ್ದು 140 ಮಂದಿ ಮೃತಪಟ್ಟಿದ್ದರು. ಈ ವರ್ಷದ ಜನವರಿ ತಿಂಗಳಲ್ಲಿ ಮಹಾಕುಂಭಮೇಳದದಲ್ಲಿ 30 ಯಾತ್ರಿಕರು ಪ್ರಾಣ ಕಳೆದುಕೊಂಡರು. ಆ ರಾಜ್ಯಗಳಲ್ಲಿ ಮುಖ್ಯಮಂತ್ರಿಯಾಗಿರುವವರು ಬಿಜೆಪಿಗೆ ಸೇರಿದವರಲ್ಲವೇ? ಇವರು ರಾಜೀನಾಮೆ ನೀಡುವುದು ಬಿಡಿ, ಆ ಘಟನೆಗಳ ಬಗ್ಗೆ ಇಲ್ಲಿಯ ವರೆಗೆ ಸರಿಯಾದ ತನಿಖೆಯನ್ನೇ ಅಲ್ಲಿನ ಸರ್ಕಾರ ನಡೆಸಿಲ್ಲ. ಹೀಗಿರುವಾಗ ನಮ್ಮ ರಾಜೀನಾಮೆ ಕೇಳಲು ರಾಜ್ಯದ ಬಿಜೆಪಿ ನಾಯಕರಿಗೆ ಯಾವ ನೈತಿಕತೆ ಇದೆ?

ರಾಜ್ಯ ಬಿಜೆಪಿ ನಾಯಕರು ಇನ್ನಾದರೂ ಪ್ರತಿಭಟನೆಯಂತಹ ಬೀದಿ ಪ್ರಹಸನವನ್ನು ಕೈಬಿಟ್ಟು ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳಲಿ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post