ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಕೊರೋನಾ ದೃಢಪಟ್ಟಿದ್ದು, ಚಿಕಿತ್ಸೆ ಪಡೆಯಲು ನಗರದ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಸೇರ ಬಯಸಿದ ಅವರಿಗೆ ಬೆಡ್ ಸಿಕ್ಕಿಲ್ಲ ಎನ್ನಲಾಗಿದೆ.
ಕುಮಾರಸ್ವಾಮಿಯಂತಹ ಪ್ರಭಾವಿ ನಾಯಕರಿಗೇ ಈ ರೀತಿ ಆಗಿರುವಾಗ, ಸೋಂಕು ತಗಲಿರುವ ಸಾಮಾನ್ಯ ಜನ ಚಿಕಿತ್ಸೆಗಾಗಿ ಬೆಡ್ ಪಡೆಯಲು ಏನು ಮಾಡಬೇಕು ಎಂಬ ಮಾತು ಕೇಳಿ ಬರತೊಡಗಿದೆ.
ಬಸವಕಲ್ಯಾಣ ಕ್ಷೇತ್ರದ ಉಪಚುನಾವಣೆಯ ಪ್ರಚಾರಕ್ಕೆ ತೆರಳಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಶುಕ್ರವಾರ ಸಂಜೆಯೇ ದಣಿವು ಕಾಣಿಸಿಕೊಂಡಿದೆ. ಹೀಗಾಗಿಯೇ ಬೆಂಗಳೂರಿಗೆ ಮರಳಿದವರು ಮನೆಗೆ ಹೋಗದೆ ಹೋಟೆಲ್ ಒಂದರಲ್ಲಿ ಉಳಿದುಕೊಂಡಿದ್ದಾರೆ. ಇಂದು ಬೆಳಿಗ್ಗೆ ವೈದ್ಯರನ್ನು ಸಂಪರ್ಕಿಸಿ ತಪಾಸಣೆಗೊಳಗಾದ ಅವರಿಗೆ ಕೋವಿಡ್ ಪಾಸಿಟಿವ್ ಇರುವುದು ಧೃಢಪಟ್ಟಿದೆ ಎಂದು ಹೇಳಲಾಗಿದೆ.
ವೈದ್ಯರ ಬಳಿ ಚರ್ಚಿಸಿ ತಮ್ಮ ತೋಟದ ಮನೆಯಲ್ಲಿ ವಿಶ್ರಾಂತಿ ಪಡೆದು ಚಿಕಿತ್ಸೆ ಪಡೆಯುವುದಾಗಿ ಅವರು ಹೇಳಿದ್ದಾರಾದರೂ ವೈದ್ಯರು ಒಪ್ಪಿಗೆ ನೀಡಿಲ್ಲ. ಈ ವಿಷಯದಲ್ಲಿ ರಿಸ್ಕ್ ಬೇಡ. ತಕ್ಷಣವೇ ಆಸ್ಪತ್ರೆಗೆ ದಾಖಲಾಗಿ ಎಂದು ಸಲಹೆ ನೀಡಿದ್ದರಿಂದ ನಗರದ ನಗರದ ಪ್ರತಿಷ್ಠಿತ ಆಸ್ಪತ್ರೆ ಸೇರಲು ನಿರ್ಧರಿಸಿ, ಸಂಬಂಧಿಸಿದವರನ್ನು ಸಂಪರ್ಕಿಸಿದಾಗ ಬೆಡ್ ಇಲ್ಲ ಎಂಬ ಉತ್ತರ ಸಿಕ್ಕಿದೆ. ವಿಷಯ ತಿಳಿದ ಕೂಡಲೇ ಆರೋಗ್ಯ ಸಚಿವ ಸುಧಾಕರ್ ಅವರು ಕುಮಾರಸ್ವಾಮಿ ಅವರಿಗೆ ಮಣಿಪಾಲ್ ಆಸ್ಪತ್ರೆಯಲ್ಲಿ ಬೆಡ್ ದೊರಕಿಸಿಕೊಡಲು ಯತ್ನಿಸಿದ್ದಾರಾದರೂ ಅದು ಫಲ ಕೊಟ್ಟಿಲ್ಲ ಎನ್ನಲಾಗಿದೆ.
ಕುಮಾರಸ್ವಾಮಿ ಅವರು ಮತ್ತೊಂದು ಖಾಸಗಿ ಆಸ್ಪತ್ರೆಗೆ ಫೋನು ಮಾಡಿದ ನಂತರ ಬೆಡ್ ಸಿಕ್ಕಿತಾದರೂ, ಅವರು ತಕ್ಷಣ ದಾಖಲಾಗಲು ಆಗಿಲ್ಲ. ಬದಲಿಗೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಮುಂದೆ ಇಂದು ಅವರು ಹಾಜರಾಗಲೇ ಬೇಕಿದೆ. ಆದರೆ ಕೊರೋನಾ ಸೋಂಕು ತಗಲಿರುವ ಹಿನ್ನೆಲೆಯಲ್ಲಿ ಅವರು ನ್ಯಾಯಾಲಯಕ್ಕೆ ಖುದ್ದು ಹಾಜರಾಗುವುದು ಅಪಾಯವಾದ್ದರಿಂದ ವಿಡಿಯೋ ಕಾನ್ ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಲು ನಿರ್ಧರಿಸಿ, ನ್ಯಾಯಾಲಯದ ವಿಚಾರಣೆ ಮುಗಿದ ನಂತರ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯಲಿದ್ದಾರೆ ಎಂದು ಮಾಹಿತಿ ನೀಡಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post