ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ರಾಜ್ಯದಲ್ಲಿ ಪ್ರತಿಭಾವಂತ ಕ್ರೀಡಾಪಟುಗಳಿದ್ದು, ಇಂತಹವರಿಗೆ ಸರಿಯಾದ ತರಬೇತಿ, ಆರೋಗ್ಯದ ಬಗ್ಗೆ ಮಾರ್ಗದರ್ಶನ ನೀಡಲು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ತಜ್ಞರ ಸಲಹೆ ಪಡೆಯುವ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧೀನದ ರಾಜ್ಯದ 34 ಕ್ರೀಡಾ ವಸತಿನಿಲಯದ ಕ್ರೀಡಾಪಟುಗಳಿಗೆ ವೈದ್ಯಕೀಯ ಸೌಲಭ್ಯ ಒದಗಿಸುವ ಯೋಜನೆಯನ್ನು ಸರ್ಕಾರ ರೂಪಿಸಿದೆ. ವಿಕಾಸಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವ ಡಾ.ಕೆ.ಸುಧಾಕರ್ ಅವರ ಉಪಸ್ಥಿತಿಯಲ್ಲಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಬೆಂಗಳೂರು ಮತ್ತು ಕ್ರೀಡಾ ವಿಜ್ಞಾನ ಕೇಂದ್ರಗಳ ನಡುವೆ ಒಪ್ಪಂದಕ್ಕೆ ಸಹಿ ಹಾಕಲಾಯಿತು.



ರಾಜ್ಯದ 30 ಜಿಲ್ಲೆಗಳ ಕ್ರೀಡಾ ವಸತಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಗ್ರಾಮೀಣ ಭಾಗದ ಕ್ರೀಡಾಪಟುಗಳಿಗೆ ಹೆಚ್ಚಿನ ವೈದ್ಯಕೀಯ ಚಿಕಿತ್ಸೆ, ಆರೋಗ್ಯ ಶಿಕ್ಷಣ, ಆರೋಗ್ಯ ಮಾಹಿತಿ, ದೈಹಿಕ ಆರೋಗ್ಯ ಹಾಗೂ ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲು ಈ ಕಾರ್ಯಕ್ರಮ ಸಹಕಾರಿ.
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಹಲವಾರು ಸಂಶೋಧನೆ, ಚಿಕಿತ್ಸೆಗಳಿಗೆ ಜನಪ್ರಿಯ. ಈ ಸಂಸ್ಥೆಯ ತಜ್ಞರನ್ನು ಬಳಸಿಕೊಂಡು ಕ್ರೀಡಾಪಟುಗಳಿಗೆ ಆರೋಗ್ಯ ಮಾರ್ಗದರ್ಶನ ನೀಡಲಾಗುತ್ತದೆ.
ಪ್ರತಿ ದಿನ ವೈದ್ಯಕೀಯ ತಪಾಸಣೆ, ಗಾಯಗಳ ಬಗ್ಗೆ ಮಾಹಿತಿ ಹಾಗೂ ಚಿಕಿತ್ಸಾ ವಿಧಾನ, ಆರೋಗ್ಯವನ್ನು ಸದಾ ಉತ್ತಮವಾಗಿರಿಸಿಕೊಳ್ಳಲು ಅನುಸರಿಸಬೇಕಾದ ಕ್ರಮ, ಪೌಷ್ಠಿಕ ಆಹಾರ ಸೇವನೆ, ಮಾನಸಿಕ ಆರೋಗ್ಯವನ್ನು ಉತ್ತಮವಾಗಿರಿಸಿಕೊಳ್ಳುವುದು ಮೊದಲಾದವುಗಳ ಬಗ್ಗೆ ಮಾರ್ಗದರ್ಶನ ನೀಡಲಾಗುತ್ತದೆ.
ಪ್ರತಿ ಜಿಲ್ಲೆಗಳಲ್ಲಿ ಮೆಡಿಕಲ್ ಕಾಲೇಜುಗಳ ವಿವಿಧ ವಿಭಾಗಗಳ ತಜ್ಞರ ಸಹಾಯವನ್ನು ವಸತಿ ಶಾಲೆಗಳು ಪಡೆಯಬಹುದು. ಕ್ರೀಡಾಪಟುಗಳ ಆರೋಗ್ಯ ತಪಾಸಣೆ ಮಾಡಬಹುದು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news








Discussion about this post