ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮಾಜಿ ಕೇಂದ್ರ ಸಚಿವ ವಿ. ಶ್ರೀನಿವಾಸ ಪ್ರಸಾದ್ (76) #V Shrinivasa Prasad ತೀವ್ರ ಹೃದಯಾಘಾತದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
ಬಹು ಅಂಗಾಂಗ ವೈಫಲ್ಯದಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸ ಪ್ರಸಾದ್ ಮೂರು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ತುರ್ತು ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಮಧ್ಯರಾತ್ರಿ 1.20ರ ಸುಮಾರಿಗೆ ತೀವ್ರ ಹೃದಯಾಘಾತದಿಂದಾಗಿ ನಿಧನ ಹೊಂದಿದ್ದಾರೆ ಎಂದು ವರದಿಯಾಗಿದೆ.
ಪತ್ನಿ ಭಾಗ್ಯಲಕ್ಷ್ಮಿ ಪ್ರಸಾದ್, ಪುತ್ರಿಯರಾದ ಪ್ರತಿಮಾ ಪ್ರಸಾದ್, ಪೂರ್ಣಿಮಾ ಪ್ರಸಾದ್, ಪೂನಂ ಪ್ರಸಾದ್ ಹಾಗೂ ಅಪಾರ ಬಂಧು-ಮಿತ್ರರು, ಅಭಿಮಾನಿಗಳನ್ನು ಅಗಲಿದ್ದಾರೆ.
ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದರಾಗಿದ್ದ ಶ್ರೀನಿವಾಸ್ ಪ್ರಸಾದ್, ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಮತ್ತು ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರದಲ್ಲಿ ಕಂದಾಯ ಮತ್ತು ಮುಜರಾಯಿ ಇಲಾಖೆ ಸಚಿವ ಸೇರಿದಂತೆ ಪ್ರಮುಖ ಸಚಿವ ಖಾತೆಗಳನ್ನು ಹೊಂದಿದ್ದರು.
ಮೈಸೂರು, ಚಾಮರಾಜನಗರ ಭಾಗದ ಪ್ರಭಾವಿ ದಲಿತ ಮುಖಂಡರಾಗಿದ್ದ ಶ್ರೀನಿವಾಸ ಪ್ರಸಾದ್, ಇತ್ತೀಚೆಗೆ ರಾಜಕೀಯ ನಿವೃತ್ತಿ ಘೋಷಿಸಿದ್ದರು. ಸ್ವಾಭಿಮಾನಿ ರಾಜಕಾರಣಿ ಎಂದೇ ಹೆಸರಾಗಿದ್ದ ಅವರು ಮೂಲತಃ ಮೈಸೂರಿನ ಅಶೋಕಪುರಂನವರಾದ ಶ್ರೀನಿವಾಸಪ್ರಸಾದ್ ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದಿಂದ ಆರು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು.
ಪ್ರಧಾನಿ ಮೋದಿ ಸಂತಾಪ:
ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ನಿಧನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ #PM Narendra Modi ಸಂತಾಪ ಸೂಚಿಸಿದ್ದು, ಚಾಮರಾಜನಗರದ ಹಿರಿಯ ನಾಯಕ ಹಾಗೂ ಸಂಸದರಾದ ವಿ.ಶ್ರೀನಿವಾಸ ಪ್ರಸಾದ್ ಅವರ ನಿಧನ ಅತೀವ್ರ ನೋವು ತಂದಿದೆ.
ಶ್ರೀನಿವಾಸ್ ಪ್ರಸಾದ್ ಅವರು ಸಾಮಾಜಿಕ ನ್ಯಾಯದ ಹೋರಾಟಗಾರರಾಗಿದ್ದರು, ಬಡವರು, ದೀನದಲಿತರ ಕಲ್ಯಾಣಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದರು. ಅವರು ತಮ್ಮ ವಿವಿಧ ಸಮಾಜ ಸೇವೆಗಾಗಿ ಬಹಳ ಜನಪ್ರಿಯರಾಗಿದ್ದರು. ಅವರ ಕುಟುಂಬ ಮತ್ತು ಬೆಂಬಲಿಗರಿಗೆ ಸಂತಾಪ ಸೂಚಿಸುತ್ತೇನೆ ಎಂದು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post