ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕಳೆದ ಕೆಲ ದಿನಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣ ಆರ್ಭಟ ಹೆಚ್ಚಾಗಿದ್ದು, ಅ. 17ರವರೆಗೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿದಂತೆ ಚಿಕ್ಕಮಗಳೂರು, ಹಾಸನ, ಮೈಸೂರು, ಕೊಡಗು, ಶಿವಮೊಗ್ಗ, ತುಮಕೂರು, ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಭಾರಿ ಪ್ರಮಾಣದ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಲಾಗಿದೆ.
ಈಗಾಗಲೇ ಭಾರತೀಯ ಹವಾಮಾನ ಇಲಾಖೆ ಅಕ್ಟೋಬರ್ 21ರವರೆಗೆ ಮಳೆಯ ಸೂಚನೆ ನೀಡಿತ್ತು. ಇದೀಗ 17ರವರೆಗೆ ಭಾರಿ ಮಳೆಯಾಗುವ ಬಗ್ಗೆ ಮುನ್ನೆಚ್ಚರಿಕೆಯಾಗಿ ಆರೆಂಜ್ ಅಲರ್ಟ್ ಘೊಷಿಸಿದೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ಮಳೆಯಾಗುತ್ತಲೆ ಇದ್ದು ಬೆಳೆ ಹಾನಿ, ಕಷ್ಟ ನಷ್ಟಗಳು ಸಂಭವಿಸುತ್ತಿವೆ. ಹಲವು ಜಿಲ್ಲೆಗಳಲ್ಲಿ ಕೆರೆಕಟ್ಟೆಗಳು ತುಂಬಿವೆ. ರೈತರು ಭಾರಿ ಮಳೆಯಿಂದ ಸಂಕಷ್ಟ ಎದುರಿಸುವಂತಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ಬೆಂಗಳೂರು ನಗರದಲ್ಲಿ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಅನೇಕ ಪ್ರದೇಶಗಳು ಸಂಪೂರ್ಣ ಜಲಾವೃತವಾಗಿದೆ. ಹಾಗೂ ಹಲವು ಪ್ರದೇಶಗಳ ಮನೆಗಳಿಗೆ ನೀರು ನುಗ್ಗಿ ಜನರು ಪರದಾಡುವಂತಾಗಿದೆ. ರಸ್ತೆಗಳಲ್ಲಿ ಅತ್ಯಧಿಕ ಪ್ರಮಾಣದಲ್ಲಿ ನೀರು ನಿಂತಿದ್ದು ಸಾರ್ವಜನಿಕರು, ವಾಹನ ಸವಾರರು ಪರದಾಡುವಂತಾಗಿದೆ.
ಬೆಂಗಳೂರು ನಗರಕ್ಕೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಬಂಗಾಳಕೊಲ್ಲಿ ಅರಬ್ಬಿ ಸಮುದ್ರದಲ್ಲಿನ ವಾಯುಭಾರ ಕುಸಿತ ಮೇಲ್ಮೈ ಸುಳಿಗಾಳಿ ಮತ್ತು ಕಡಿಮೆ ಒತ್ತಡಗಳ ಪ್ರಭಾವದಿಂದ ನಗರದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post