ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ದಿನದಿಂದ ದಿನಕ್ಕೆ ರಾಜ್ಯದಲ್ಲಿ ಬಿಸಿಲಿನ ಧಗೆ ಹೆಚ್ಚಾಗುತ್ತಿದ್ದು, ಹಲವು ಜಿಲ್ಲೆಗಳಲ್ಲಿ ತಾಪಮಾನ Temperature ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ಹಾಸನ, ಕಲಬುರಗಿಯಲ್ಲಿ 33ರಿಂದ 36 ಡಿಗ್ರಿ ಸೆಲ್ಸಿಯಸ್‌ವರೆಗೆ ತಾಪಮಾನ ಇರಲಿದೆ.
ಹಾಸನ, ಶಿವಮೊಗ್ಗ, ಚಿತ್ರದುರ್ಗ, ಚಾಮರಾಜನಗರ, ರಾಯಚೂರು ಜಿಲ್ಲೆಗಳಲ್ಲೂ ಗರಿಷ್ಠ ತಾಪಮಾನ ದಾಖಲಾಗುವ ಸಾಧ್ಯತೆ ಇದೆ. ವಿಜಯಪುರ, ಕಾರವಾರ, ಮಂಗಳೂರು, ಬೀದರ್, ಗದಗ, ಹಾವೇರಿ, ಬಳ್ಳಾರಿಯಲ್ಲಿ ಹೆಚ್ಚಿನ ಬಿಸಿಲು ಇರಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಗಾಳಿ ಮತ್ತು ಮಳೆಯ ಕೊರತೆಯಿಂದಾಗಿ ತಾಪಮಾನ ಏರಿಕೆಗೆ ಕಾರಣವಾಗಿದ್ದು, ಫೆಬ್ರವರಿಯಲ್ಲಿ ನಗರದಲ್ಲಿ 7.1 ಮಿಮೀ ಮಳೆಯಾಗಬೇಕಿತ್ತು. ಆದರೆ ಇಲ್ಲಿಯವರೆಗೆ ಯಾವುದೇ ಮಳೆಯಾಗಿಲ್ಲ. ಮಾರ್ಚ್‌ನಲ್ಲಿ ಮಳೆಯಾಗುವ ಸಂಭವವಿದೆ ಎಂದು ವರದಿಯಾಗಿದೆ.
ಬಿಸಿಲಿನ ಬೇಗೆಯಿಂದ ಈಗಾಗಲೇ ರಾಜ್ಯದ ಹಲವೆಡೆ ಕುಡಿಯುವ ನೀರಿಗೆ ತತ್ವಾರ ಆರಂಭವಾಗಿದೆ. ಮಲೆನಾಡಿನ ಹಲವು ಪ್ರದೇಶಗಳಲ್ಲಿ ಅಂತರ್‌ಜಲ ಮಟ್ಟ ಕುಸಿದಿದ್ದು, ಮುಂಬರುವ ದಿನಗಳಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದು ಎನ್ನಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















