ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಬಿಬಿಎಂಪಿ ವ್ಯಾಪ್ತಿಯಲ್ಲಿ ಪಾಲಿಕೆ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ರಾಜ್ಯ ಸರ್ಕಾರ ಹೊರಡಿಸಿರುವ ನಿರ್ಬಂಧಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಜಂಟಿಯಾಗಿ ಕಾರ್ಯಾಚರಣೆ ನಡೆಸುವ ಮೂಲಕ ಕೋವಿಡ್ ರೂಪಾಂತರಿ ವೈರಾಣು ನಿಯಂತ್ರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಮುಖ್ಯ ಆಯಕ್ತ ಗೌರವ್ ಗುಪ್ತ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದಲ್ಲಿ ಕೋವಿಡ್ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಪಾಲಿಕೆ ಹಾಗೂ ಪೊಲೀಸ್ ಇಲಾಖೆಯ ಜೊತೆ ವರ್ಚುವಲ್ ಮೂಲಕ ನಡೆದ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಪಾಲಿಕೆ ವ್ಯಾಪ್ತಿಯಲ್ಲಿ ಪ್ರತಿನಿತ್ಯ ಸರಾಸರಿ 150 ರಿಂದ 200 ಕೋವಿಡ್ ಪ್ರಕರಣಗಳು ಪತ್ತೆಯಾಗುತ್ತಿದ್ದು, ಕಳೆದ ಮೂರು ದಿನಗಳಿಂದ ಸುಮಾರು 250 ಕೋವಿಡ್ ಪ್ರಕರಣಗಳು ಕಂಡುಬರುತ್ತಿದೆ. ಈ ಸಂಬಂಧ ಕೋವಿಡ್ ಸೋಂಕು ಹೆಚ್ಚಳವಾಗದಂತೆ ನಾವು ನಿಯಂತ್ರಿಸಬೇಕಿದೆ. ಈ ನಿಟ್ಟಿನಲ್ಲಿ ಪಾಲಿಕೆಯ ಅಧಿಕಾರಿಗಳ ಜೊತೆ ಪೊಲೀಸ್ ಇಲಾಖೆಯ ಸಿಬ್ಬಂದಿ ಜಂಟಿಯಾಗಿ ಕಾರ್ಯಾಚರಣೆ ನಡೆಸಿ ನಗರದಲ್ಲಿ ಕೋವಿಡ್ ಸೋಂಕು ಹರಡುವುದನ್ನು ನಿಯಂತ್ರಿಸಬೇಕು ಎಂದು ತಿಳಿಸಿದರು.
ರಾಜ್ಯ ಸರ್ಕಾರ ಹೊರಡಿಸಿರುವ ನಿರ್ಬಂಧಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ರೆಸ್ಟೋರೆಂಟ್, ಕ್ಲಬ್, ಪಬ್ಸ್ ಗಳಲ್ಲಿ ಶೇ.50 ರಷ್ಟು ಭರ್ತಿಗೆ ಮಾತ್ರ ಅನುಮತಿ ನೀಡಬೇಕು. ಇಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಯು ಕೋವಿಡ್ ಸಮುಚಿತ ವರ್ತನೆಯೊಂದಿಗೆ ಆರ್‌ಟಿಪಿಸಿಆರ್ ನೆಗೆಟಿವ್ ಸರ್ಟಿಫಿಕೇಟ್ ಹಾಗೂ ಎರಡೂ ಡೋಸ್ ಲಸಿಕೆಯನ್ನು ಕಡ್ಡಾಯವಾಗಿ ಪಡೆದಿರಬೇಕು. ಅಲ್ಲದೆ ಮೇಲಿನ ಸ್ಥಳಗಳಿಗೆ ಭೇಟಿ ನೀಡುವ ಸಾರ್ವಜನಿಕರು ಎರಡೂ ಡೋಸ್ ಲಸಿಕೆ ಪಡೆದವರಿಗೆ ಮಾತ್ರ ಒಳ ಪ್ರವೇಶಿಸಲು ಅವಕಾಶ ನೀಡಬೇಕು ಎಂದು ಹೇಳಿದರು.
ಸಾರ್ವಜನಿಕ ಸ್ಥಳ/ಜನಸಂದಣಿ ಪ್ರದೇಶಗಳಲ್ಲಿ ಹೊಸ ವರ್ಷಾಚರಣೆಯ ಸಭೆ ನಡೆಯದಂತೆ ನೋಡಿಕೊಳ್ಳಬೇಕು. ಅದಕ್ಕಾಗಿ ಧ್ವನಿವರ್ಧಕಗಳ ಮೂಲಕ ನಾಗರೀಕರಲ್ಲಿ ಜಾಗೃತಿ ಮೂಡಿಸಬೇಕು. ಜೊತೆಗೆ ಕೋವಿಡ್ ಸಮುಚಿತ ವರ್ತನೆ ಪಾಲನೆಯಾಗದಿರುವ ಕಡೆ ಪಾಲಿಕೆ ಹಾಗೂ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ನಿಯಮ ಉಲ್ಲಂಘಿಸಿದವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಾಗರೀಕರು ಜನಸಾಂದ್ರತೆಯಿರುವ ಪ್ರದೇಶಗಳಿಗೆ ಹೋಗುವುದನ್ನು ನಿಯಂತ್ರಿಸಬೇಕು, ಪಾಲಿಕೆ ಹಾಗೂ ಪೊಲೀಸ್ ಇಲಾಖೆಯಿಂದ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಆಯಾ ವಲಯ ವ್ಯಾಪ್ತಿಯಲ್ಲಿ ಬರುವ ಮಾರುಕಟ್ಟೆ, ಪಿಜಿ(ಪೇಯಿಂಗ್ ಗೆಸ್ಟ್), ಹಾಸ್ಟೆಲ್, ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳ ಜೊತೆ ಸಂಬಂಧಪಟ್ಟ ಅಧಿಕಾರಿಗಳು ಸಭೆ ನಡೆಸಿ ಸರ್ಕಾರ ಹೊರಡಿಸಿರುವ ನಿರ್ಬಂಧಗಳ ಬಗ್ಗೆ ಮಾಹಿತಿ ನೀಡಿ ಯಾವುದೇ ನಿಯಮ ಉಲ್ಲಂಘಿಸಿದಂತೆ ಎಚ್ಚರದಿಂದಿರಲು ಸೂಚಿಸಲು ತಿಳಿಸಿದರು.
ಹೊಸವರ್ಷಾಚರಣೆ ರಾತ್ರಿ 10 ಗಂಟೆಯ ನಂತರ ಎಲ್ಲಿಯೂ ಆಚರಣೆ ಮಾಡಲು ಅವಕಾಶ ನೀಡಬಾರದು. 10ರ ನಂತರ ಹೊಸವರ್ಷಾರಣೆಯ ಸಂಭ್ರಮ, ಸಭೆ ಸಮಾರಂಭ ಮಾಡುವುದು ಕಂಡುಬಂದಲ್ಲಿ ಅಂತಹವರ ಮೇಲೆ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕು. ಮಾರುಕಟ್ಟೆ ಸ್ಥಳಗಳಿಗೆ ಪಾಲಿಕೆ ಹಾಗೂ ಪೊಲೀಸ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಕೋವಿಡ್ ಸಮುಚಿತ ವರ್ತನೆ ಪಾಲಿಸದಿದ್ದಲ್ಲಿ ಕೂಡಲೆ ಶಿಸ್ತು ಕ್ರಮ ಜರುಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಆಡಳಿತಗಾರರಾದ ರಾಕೇಶ್ ಸಿಂಗ್ ಮಾತನಾಡಿ, ನಗರದಲ್ಲಿ ಕೊವಿಡ್ ನಿಯಂತ್ರಿಸಲು ಜನರು ಮತ್ತು ನಿಯಮ ಜಾರಿ ಕುರಿತಂತೆ ಸಮತೋಲಿತ ವಿಧಾನ ಹೊಂದಿರಬೇಕು. ಪ್ರಸ್ತುತ ಸನ್ನಿವೇಶವು ಅತ್ಯಂತ ಕಾಳಜಿಯದಾಗಿದ್ದು, ನಿಯಮಗಳ ಜಾರಿಯು ಸುಸೂತ್ರವಾಗಿರಬೇಕು. ಎಲ್ಲರಿಗೂ ಹೊಸ ವರ್ಷದ ಶುಭಕಾಮನೆಗಳನ್ನು ಕೋರುತ್ತಾ, ಅತ್ಯಂತ ಕಾಳಜಿಯೊಂದಿಗೆ ಹೊಸ ವರ್ಷವನ್ನು ಉತ್ತಮ ರೀತಿಯಲ್ಲಿ ಆಚರಿಸೋಣ ಎಂದು ತಿಳಿಸಿದರು.
ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಮಾತನಾಡಿ, ನಗರದಲ್ಲಿ ಕೋವಿಡ್ ಸೋಂಕು ನಿಯಂತ್ರಿಸುವ ಸಂಬಂಧ ರಾತ್ರಿ 10 ನಂತರ ಜಾರಿಯಾಗುವ ನೈಟ್ ಕರ್ಫ್ಯೂ ಅನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುತ್ತಿದೆ. ಸರ್ಕಾರ ಹೊರಡಿಸಿರುವ ನಿಬಂಧನೆಗಳನ್ನು ಕಡ್ಡಾಯವಾಗಿ ಜಾರಿಗೊಳಿಸುವ ಮೂಲಕ ಕೋವಿಡ್ ಸೋಂಕು ಹರಡುವುದನ್ನು ತಡೆಯಬೇಕು. ಯಾವುದೇ ಜನಸಂದಣಿಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಜೊತೆಗೆ ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಅಹಿತರ ಘಟನೆ ನಡೆಯದಂತೆ ನೋಡಿಕೊಳ್ಳಬೇಕು. ಈ ಪೈಕಿ ಪ್ರಮುಖ ಸ್ಥಳಗಳಲ್ಲಿ ಹೆಚ್ಚು ನಿಗಾವಹಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ವಿಶೇಷ ಆಯುಕ್ತ(ಆರೋಗ್ಯ) ಡಾ. ತ್ರಿಲೋಕ್ ಚಂದ್ರ, ಎಲ್ಲಾ ವಲಯ ಆಯುಕ್ತರುಗಳು, ಹೆಚ್ಚುವರಿ ಪೊಲೀಸ್ ಆಯುಕ್ತ ಮುರುಗನ್, ಅಪರ ಪೊಲೀಸ್ ಆಯುಕ್ತರಾದ ಸೌಮೆಂದು ಮುಖರ್ಜಿ, ಎಲ್ಲಾ ವಲಯ ಜಂಟಿ ಆಯುಕ್ತರುಗಳು, ಎಲ್ಲಾ ಡಿಸಿಪಿಗಳು, ಮುಖ್ಯ ಆರೋಗ್ಯಾಧಿಕಾರಿ, ಎಲ್ಲಾ ವಲಯ ಆರೋಗ್ಯಾಧಿಕಾರಿಗಳು ಹಾಗೂ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post