ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಅಲ್ಪಸಂಖ್ಯಾತ ಇಲಾಖೆಯ ಬಜೆಟ್ ಕಡಿತಗೊಳಿಸುವ ಮೂಲಕ ಪಿಎಚ್‌ಡಿ ವಿದ್ಯಾರ್ಥಿಗಳ ಹಾಗೂ ವಿವಿಧ ಯೋಜನೆಗಳ ಫಲಾನುಭವಿಗಳ ಜೀವನವನ್ನು ಅತಂತ್ರಗೊಳಿಸಿದ್ದು, ಸರ್ಕಾರ ಆ ಆದೇಶವನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ನಗರದ ಮೌರ್ಯ ಸರ್ಕಲ್‌ನಲ್ಲಿ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ನೇತೃತ್ವದಲ್ಲಿ ಪಿಎಚ್‌ಡಿ ವಿದ್ಯಾರ್ಥಿಗಳು ನಡೆಸುತ್ತಿದ್ದ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್ ಅವರು ಭೇಟಿ ನೀಡಿದರು.
ಈ ವೇಳೆ ಮಾತನಾಡಿದ ಅವರು, ಸರ್ಕಾರ ಈ ಪ್ರತಿಭಟನೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಈಗಾಗಲೇ ನೀಡಿರುವ ಅನುದಾನ ಕಡಿತದ ಆದೇಶವನ್ನು ಆದಷ್ಟು ಬೇಗ ಹಿಂಪಡೆಯಬೇಕು. ಪಿಎಚ್‌ಡಿ ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯವನ್ನು ಆದಷ್ಟು ಬೇಗ ತಡೆಗಟ್ಟಬೇಕು. ಈ ಬಗ್ಗೆ ನಾವು ಅದಿವೇಶದಲ್ಲಿ ಚರ್ಚಿಸುತ್ತೇವೆ. ನಮ್ಮ ಪಕ್ಷದ ನಾಯಕ ಕುಮಾರಸ್ವಾಮಿಯವರ ನೇತೃತ್ವದಲ್ಲಿ ಅದಿವೇಶದಲ್ಲಿ ಈ ಬಗ್ಗೆ ಧ್ವನಿ ಎತ್ತುತ್ತೇವೆಂದು ಶಾಸಕ ಬಂಡೆಪ್ಪ ಖಾಶೆಂಪುರ್ ಹೇಳಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಅಲ್ಪಸಂಖ್ಯಾತರ ಘಟಕದ ಮುಖಂಡರು, ಅನ್ಯಾಯಕೊಳಗಾದ ಪಿಎಚ್‌ಡಿ ವಿದ್ಯಾರ್ಥಿಗಳು, ವಿವಿಧ ಸಂಘಟನೆಗಳ ಮುಖಂಡರು ಸೇರಿದಂತೆ ಅನೇಕರಿದ್ದರು.
ಇದೇ ಸಂದರ್ಭದಲ್ಲಿ ಕರ್ನಾಟಕ ಪಿಂಜಾರ, ನದಾಫ ಮನ್ಸೂರಿ ಸಂಘಗಳ ಮಹಾಮಂಡಳ, ರಾಜ್ಯ ದುದೇಕುಲ ಪಿಂಜಾರಿ ನದಾಫ ಸಂಘ ಹಾಗೂ ಇನ್ನಿತರೆ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಪಕ್ಕದಲ್ಲೇ ನಡೆಯುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಶಾಸಕ ಬಂಡೆಪ್ಪ ಖಾಶೆಂಪುರ್ ಭೇಟಿ ನೀಡಿ ಅವರ ಬೇಡಿಕೆಗಳ ಮಾಹಿತಿ ಪಡೆದು ಆ ಬಗ್ಗೆ ಸರ್ಕಾರದ ಗಮನಸೆಳೆಯುವ ಭರವಸೆ ನೀಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post