ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ವಿಶ್ವ ಆರ್ಥಿಕ ವೇದಿಕೆಯ ದಾವೋಸ್ ಶೃಂಗಸಭೆಯಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆಗೆ ಮಾಡಿಕೊಂಡಿರುವ ಹಲವು ಒಪ್ಪಂದಗಳ ಫಲವಾಗಿ ಕರ್ನಾಟಕ ರಾಜ್ಯಕ್ಕೆ ₹ 23 ಸಾವಿರ ಕೋಟಿಗೂ ಹೆಚ್ಚಿನ ಮೊತ್ತದ ಬಂಡವಾಳ ಹರಿದು ಬರಲಿದೆ’ ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕೆಗಳು ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ Minister M B Patil ಅವರು ತಿಳಿಸಿದ್ದಾರೆ.
ವಿಧಾನಸೌದದ ಸಮ್ಮೇಳನ ಸಭಾಂಗಣದಲ್ಲಿ ಬುಧವಾರ ನಡೆದ ದಾವೋಸ್ ಪ್ರವಾಸದ ಫಲಶ್ರುತಿ ತಿಳಿಸುವ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನೆಸ್ಲೆ, ಎಚ್‌ಪಿ, ಎಚ್‌ಸಿಎಲ್, ವೋಲ್ವೊ ಗ್ರೂಪ್, ಐಕಿಯಾ, ಸೋನಿ, ಮೈಕ್ರೊಸಾಫ್ಟ್, ಹಿಟಾಚಿ ಮತ್ತಿತರ ಜಾಗತಿಕ ಉದ್ಯಮಗಳ ಪ್ರಮುಖರ ಜೊತೆಗೆ ರಾಜ್ಯದ ನಿಯೋಗವು 50ಕ್ಕೂ ಹೆಚ್ಚಿನ ಸಭೆಗಳನ್ನು ನಡೆಸಿತು. ಬೆಂಗಳೂರಿನಲ್ಲಿ 100 ಮೆಗಾವಾಟ್ ಸಾಮರ್ಥ್ಯದ ಬೃಹತ್ ಗಾತ್ರದ ಡೇಟಾ ಸೆಂಟರ್ ಸ್ಥಾಪಿಸಲು ವೆಬ್ ವರ್ಕ್ಸ್ ಕಂಪನಿಯು ₹ 20,000 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಮಾಡಲು ಬದ್ಧತೆ ಪ್ರಕಟಿಸಿದೆ. ಇದರಿಂದ 1000 ಜನರಿಗೆ ಉದ್ಯೋಗ ಅವಕಾಶಗಳು ದೊರೆಯಲಿವೆ. ಡಿಜಿಟಲ್ ಕೌಶಲ ವೃದ್ಧಿ ಪ್ರಕ್ರಿಯೆ ಹಮ್ಮಿಕೊಳ್ಳಲು ಮೈಕ್ರೊಸಾಫ್ಟ್ ವಾಗ್ದಾನ ಮಾಡಿದೆ. ಗ್ರಾಮೀಣ ಪ್ರದೇಶ ಕೇಂದ್ರೀತ ಆರ್ಥಿಕ ಬೆಳವಣಿಗೆ ಉತ್ತೇಜಿಸಲು ಹಿಟಾಚಿ ಕಂಪನಿಯು ‘ಎಂಒಯು’ಗೆ ಸಹಿ ಹಾಕಿದೆ’ ಎಂದರು.

Also read: ಬಂಡಿಪುರ-ವೈನಾಡು ಮಾರ್ಗದಲ್ಲಿ ಅರಣ್ಯ ಸಚಿವರ ಸಂಚಾರ | ಚೆಕ್ ಪೋಸ್ಟ್ ಗಳಲ್ಲಿ ಖುದ್ದು ತಪಾಸಣೆ
ಉತ್ತರ ಕರ್ನಾಟಕದ ಅಭಿವೃದ್ಧಿಗೆ ಆದ್ಯತೆ
ಲುಲು ಗ್ರೂಪ್, ಬಿಎಲ್ ಅಗ್ರೊ ವಿಜಯಪುರದಲ್ಲಿ ತಮ್ಮ ನೆಲೆ ವಿಸ್ತರಿಸಲಿವೆ. ವಿಜಯಪುರದಲ್ಲಿ ₹ 300 ಕೋಟಿ ವೆಚ್ಚದಲ್ಲಿ ಹೊಸ ಆಹಾರ ಸಂಸ್ಕರಣಾ ಘಟಕ ಸ್ಥಾಪಿಸಲು ಹಾಗೂ ಕಲಬುರಗಿಯಲ್ಲಿನ ತನ್ನ ಘಟಕದ ಸಾಮರ್ಥ್ಯ ವಿಸ್ತರಿಸುವ ಉದ್ದೇಶಕ್ಕೆ ಬಂಡವಾಳ ಹೂಡಿಕೆ ಮಾಡಲು ಲುಲು ಸಮೂಹವು ಯೋಜಿಸಿದೆ.

ಸ್ಮಾರ್ಟ್ ಸಿಟಿ ಮೂಲಸೌಲಭ್ಯ, ನವೀಕರಿಸಬಹುದಾದ ಇಂಧನ ಪರಿಹಾರಗಳು, ಡೇಟಾ ಕೇಂದ್ರಗಳು ಮತ್ತು ಸಂಬಂಧಿತ ವಲಯಗಳಲ್ಲಿ ವಿವಿಧ ಕಂಪನಿಗಳಿಂದ ಒಟ್ಟಾರೆ 3,000 ಕೋಟಿ ಮೊತ್ತದ ಬಂಡವಾಳ ಹೂಡಿಕೆಯ ಒಳಹರಿವು ಕಂಡುಬಂದಿದೆ

ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ ಎಸ್ ಸೆಲ್ವಕುಮಾರ್, ಐಟಿಬಿಟಿ ಕಾರ್ಯದರ್ಶಿ ಶ್ರೀಮತಿ ಕಪೂರ್‌ಕೌರ್, ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಆಯುಕ್ತೆ ಗುಂಜನ್ ಕೃಷ್ಣ, ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಸಿಇಒ ಡಾ. ಮಹೇಶ್ ಮತ್ತಿತರ ಉನ್ನತ ಅಧಿಕಾರಿಗಳು ಪತ್ರಿಕಾಗೋಷ್ಠಿಯಲ್ಲಿ ಇದ್ದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post