ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕರ್ನಾಟಕದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯಾಗಿ ಹಾಗೂ ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರನ್ನು ನೇಮಿಸಿ ಕಾಂಗ್ರೆಸ್ ಹೈಕಮಾಂಡ್ ಅಧಿಕೃತವಾಗಿ ಘೋಷಣೆ ಮಾಡಿದೆ.
ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರು ಜಂಟಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ್ದು, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರನ್ನು ಆಯ್ಕೆ ಮಾಡಿರುವುದಾಗಿ ಹೇಳಿದ್ದಾರೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಮಾತನಾಡಿ, ಮೇ 20ರಂದು ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕರಿಸುತ್ತಾರೆ. ಮೇ 20ರ ಮಧ್ಯಾಹ್ನ 12.30ಕ್ಕೆ ಪದಗ್ರಹಣ ಸಮಾರಂಭ ನಡೆಯಲಿದೆ. ಮೇ 20ರಂದು ಕೆಲ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸುತ್ತಾರೆಂದು ಎಂದು ಮಾಹಿತಿ ನೀಡಿದ್ದಾರೆ.
ಲೋಕಸಭಾ ಚುನಾವಣೆ ಪೂರ್ಣಗೊಳ್ಳುವವರೆಗೂ ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಮುಂದುವರಿಯಲಿದ್ದು, ಡಿಕೆ ಶಿವಕುಮಾರ್ ಒಬ್ಬರು ಮಾತ್ರ ಡಿಸಿಎಂ ಆಗಿರುತ್ತಾರೆ. ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಇಬ್ಬರೂ ಪಕ್ಷದ ದೊಡ್ಡ ಆಸ್ತಿ, ಇಬ್ಬರಿಗೂ ಸಿಎಂ ಆಗಬೇಕೆಂಬ ಆಕಾಂಕ್ಷೆಯಿತ್ತು. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಜೊತೆ ಒನ್ ಟು ಒನ್ ಮಾತುಕತೆ ನಡೆಸಲಾಗಿತ್ತು. ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಅಭಿಪ್ರಾಯ ಪಡೆದಿದ್ದೇವು. ಅಂತಿಮವಾಗಿ ಎಐಸಿಸಿ ಅಧ್ಯಕ್ಷರು ನಿರ್ಣಯ ತೆಗೆದುಕೊಂಡಿದ್ದಾರೆ ಎಂದು ತಿಳಿಸಿದರು.
ಸಿದ್ದರಾಮಯ್ಯ ಅನುಭವಿ, ಹಿರಿಯ ರಾಜಕಾರಣಿ, ಉತ್ತಮ ಆಡಳಿತಗಾರರು ಹೌದು. ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರದ್ದು ದೊಡ್ಡ ಪಾತ್ರವಿದೆ. ಡಿಕೆ ಶಿವಕುಮಾರ್ ಪಕ್ಷ ಸಂಘಟಕರು, ಪಕ್ಷದಲ್ಲಿ ಕೆಡಾರ್ ತಯಾರು ಮಾಡುವಲ್ಲಿ ಅವರ ಪಾತ್ರ ದೊಡ್ದದಿದೆ. ಕರ್ನಾಟಕದಲ್ಲಿ ಅನುಭವಿ, ಸಮರ್ಥ ಕಾಂಗ್ರೆಸ್ ನಾಯಕರಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪಕ್ಷವನ್ನು ಸಂಘಟಿಸಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಇಬ್ಬರೂ ಸಮರ್ಥ ನಾಯಕರು. ಕರ್ನಾಟಕದ ಗೆಲುವಿನ ಶ್ರೇಯಸ್ಸು ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ, ರಾಹುಲ್ ಗಾಂಧಿ ಸೇರಿ ಎಲ್ಲ ಹಿರಿಯ ನಾಯಕರಿಗೂ ಸಲ್ಲುತ್ತದೆ. ಭಾರತ್ ಜೋಡೋ ಪಾದಯಾತ್ರೆ ಬಳಿಕ ಕಾಂಗ್ರೆಸ್ ಗೆದ್ದಿದೆ ಎಂದು ಹೇಳಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post