ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಶಾಲಾ-ಕಾಲೇಜು ಆವರಣಗಳಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ಧರಿಸುವುದು ಸಮವಸ್ತ್ರ ನೀತಿಗೆ ವಿರುದ್ಧವಾಗಿದ್ದು, ಶಾಲಾ-ಕಾಲೇಜುಗಳು ಆಡಳಿತ ಮಂಡಳಿಗಳು ನಿಗದಿಪಡಿಸಿರುವ ಸಮವಸ್ತ್ರವನ್ನೇ ಕಡ್ಡಾಯವಾಗಿ ಧರಿಸಬೇಕು ಎಂಬ ಬಗ್ಗೆ ರಾಜ್ಯ ಸರ್ಕಾರ ಹಾಗೂ ಶಿಕ್ಷಣ ಇಲಾಖೆ ಆದೇಶ ನೀಡಿದ್ದು, ಈ ಸಮವಸ್ತ್ರ ನೀತಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಶಾಲಾ-ಕಾಲೇಜು ಆಡಳಿತ ಮಂಡಳಿಗಳಿಗೆ ಸಂಪೂರ್ಣ ಅಧಿಕಾರ ನೀಡಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಹಿಜಾಬ್-ಕೇಸರಿ ಶಾಲು ವಿವಾದ ದಿನೇ ದಿನೇ ತೀವ್ರ ಸ್ವರೂಪ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಸುದ್ಧಿಗಾರರಿಗೆ ಮಾಹಿತಿ ನೀಡಿರುವ ಅವರು, ಧರ್ಮವನ್ನು ಮೀರಿ ಭಾರತಮಾತೆಯ ಮಕ್ಕಳು ನಾವು. ನಾವೆಲ್ಲ ಒಂದೇ ಎಂಬ ಭಾವನೆ ನಿರ್ಮಾಣವಾಗಬೇಕು. ಹಾಗೂ ಇಂತಹ ಸಂಸ್ಕಾರ ಶಾಲಾ-ಕಾಲೇಜುಗಳಲ್ಲಿ ಮಾತ್ರ ಕಲಿಯಲು ಅವಕಾಶವಿರುವ ಕಾರಣ ಸಮವಸ್ತ್ರ ನೀತಿಯನ್ನು ಅನುಸರಿಸಲಾಗುತ್ತಿದೆ. ಸಮವಸ್ತ್ರ ಎಂದರೆ ಸಮಾನತೆಯ ನೀತಿ ಅದನ್ನು ಪಾಲಿಸುವುದು ಎಲ್ಲರ ಕರ್ತವ್ಯ ಎಂದು ಕಿವಿಮಾತು ಹೇಳಿದ್ದಾರೆ.
ಇತ್ತೀಚೆಗೆ ಹಿಜಾಬ್ ಬಗ್ಗೆ ಹೆಚ್ಚಿನ ಒಲವು ತೋರಲಾಗುತ್ತಿದ್ದು, ಕಡ್ಡಾಯವಾಗಿ ಹಿಜಾಬ್ ಧರಿಸುತ್ತೇವೆ. ಇದಕ್ಕೆ ಅವಕಾಶ ನೀಡದಿದ್ದಲ್ಲಿ ವಿದ್ಯಾಭ್ಯಾಸ ಮೊಟಕುಗೊಳಿಸುತ್ತೇವೆ ಎಂಬ ನಿಲುವು ಮಕ್ಕಳಿಂದ ಕೇಳಿಬರುತ್ತಿದೆ. ಇದರ ಹಿಂದೆ ಕಾಣದ ಕೈಗಳ ಶಕ್ತಿ ಕೆಲಸ ಮಾಡುತ್ತಿದೆ ಎಂಬ ಬಗ್ಗೆ ನಮಗೂ ಅನುಮಾನವಿದೆ. ಹಾಗೂ ಪೊಲೀಸ್ ಇಲಾಖೆ ಇದರ ಬಗ್ಗೆ ಕೂಲಂಕುಷ ತನಿಖೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಮತ್ತು ಕಾಲೇಜು ಆಡಳಿತ ಮಂಡಳಿಗಳಿಗೆ ರಕ್ಷಣೆ ನೀಡುವಂತೆ ನಿರ್ದೇಶನ ನೀಡಿದ್ದೇವೆ ಎಂದು ತಿಳಿಸಿದ್ದಾರೆ.
ಕೋವಿಡ್-19 ಹಿನ್ನೆಲೆ ಕಳೆದ ಎರಡು ವರ್ಷಗಳಿಂದ ಶಿಕ್ಷಣ ಕಲಿಕೆಯಲ್ಲಿ ಹಿನ್ನಡೆಯಾಗಿದೆ. ಇನ್ನು ಕೆಲವೇ ತಿಂಗಳುಗಳಲ್ಲಿ ಪರೀಕ್ಷೆಗಳು ಪ್ರಾರಂಭವಾಗಲಿದ್ದು, ಮಕ್ಕಳನ್ನು ಪ್ರಚೋದನೆಗೆ ಬಳಸಿಕೊಂಡು ಅವರ ಭವಿಷ್ಯಕ್ಕೆ ತೊಂದರೆ ಮಾಡಬಾರದು. ಹಾಗೂ ಎಲ್ಲಾ ಮಕ್ಕಳು ಕಡ್ಡಾಯವಾಗಿ ಆಡಳಿತ ಮಂಡಳಿ ನಿರ್ಧರಿಸುವಂತಹ ಸಮವಸ್ತ್ರವನ್ನು ಧರಿಸಿ ತರಗತಿಗೆ ಹಾಜರಾಗತಕ್ಕದ್ದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಮನವಿ ಮಾಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post