ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯದಲ್ಲಿ ಉತ್ತಮ ಗುಣಮಟ್ಟದ ಹಾಗೂ ಕಡಿಮೆ ವೆಚ್ಚದಲ್ಲಿ ಉಪ ವಿಜ್ಞಾನ ಕೇಂದ್ರಗಳು ಹಾಗೂ ತಾರಾಲಯಗಳನ್ನು ನಿರ್ಮಿಸುವ ನಿಟ್ಟಿನಲ್ಲಿ ಏಕ ರೂಪದ ವಿನ್ಯಾಸ ರಚನೆಗೆ ತಾಂತ್ರಿಕ ಸಮಿತಿಯನ್ನು ರಚಿಸಲಾಗುವುದು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್ ಎಸ್ ಭೋಸರಾಜು Minister Bosaraju ಅವರು ತಿಳಿಸಿದ್ದಾರೆ.
ಇಂದು ವಿಕಾಸಸೌಧದಲ್ಲಿ ಕರ್ನಾಟಕ ವಿಜ್ಞಾನ ಪ್ರೋತ್ಸಾಹಕ ಸೊಸೈಟಿ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ನಡೆದ ಸಭೆಯ ನಂತರ ಈ ವಿಷಯ ತಿಳಿಸಿದರು.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರಗಳನ್ನ ನಿರ್ಮಿಸಲಾಗಿದೆ. ಅಲ್ಲದೇ, ಇನ್ನು ಕೆಲವು ಜಿಲ್ಲೆಗಳಲ್ಲಿ ಉಪ ಪ್ರಾದೇಶಿಕ ಕೇಂದ್ರಗಳು ಹಾಗೂ ತಾರಾಲಯಗಳ ನಿರ್ಮಾಣಕ್ಕೆ ಅನುಮತಿಯನ್ನು ನೀಡಲಾಗಿದೆ. ಆದರೆ, ಅನುಮತಿ ದೊರಕಿರುವ ಹಲವಾರು ಕೇಂದ್ರಗಳಲ್ಲಿ ನಿರ್ಮಾಣ ಕಾರ್ಯ ಪ್ರಾರಂಭವಾಗಿಲ್ಲ. ಇದಕ್ಕೆ ಪ್ರಮುಖ ಕಾರಣ ಅವುಗಳ ವಿನ್ಯಾಸ ಅಂತಿಮಗೊಳ್ಳದೇ ಇರುವುದು. ಈ ಹಿನ್ನಲೆಯಲ್ಲಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರಗಳು ಹಾಗೂ ತಾರಾಲಯಗಳ ನಿರ್ಮಾಣಕ್ಕೆ ಏಕರೂಪ ವಿನ್ಯಾಸವನ್ನ ಅಂತಿಮಗೊಳಿಸುವುದು ಸೂಕ್ತವಾಗಿದೆ. ಈ ಹಿನ್ನಲೆಯಲ್ಲಿ ಕಡಿಮೆ ವೆಚ್ಚದಲ್ಲಿ ಅತ್ಯುತ್ತಮ ಗುಣಮಟ್ಟದ ಹಾಗೂ ಹೆಚ್ಚು ವರ್ಷಗಳ ಕಾಲ ಬಾಳಿಕೆ ಬರುವಂತಹ ವಿನ್ಯಾಸ ರಚನೆ ಮಾಡುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಏಕರೂಪ ವಿನ್ಯಾಸವನ್ನ ತಯಾರು ಮಾಡಲು ತಾಂತ್ರಿಕ ಸಮಿತಿಯನ್ನು ರಚಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.
Also read: ಸರ್ಕಾರ ರೈತರ ಪರವಾಗಿದೆ, ನ್ಯಾಯ ಕೊಡಿಸಲು ಸಿದ್ಧ: ಸಚಿವ ಮಧು ಬಂಗಾರಪ್ಪ
ಶೀಘ್ರದಲ್ಲೇ ರಾಯಚೂರು, ಯಾದಗಿರಿ, ಚಿಕ್ಕಮಗಳೂರು ಉಪ ಪ್ರಾದೇಶಿಕ ಕೇಂದ್ರಗಳ ನಿರ್ಮಾಣ:
ರಾಯಚೂರು ಹಾಗೂ ಯಾದಗಿರಿಯಲ್ಲಿ ರಚಿಸಲು ಉದ್ದೇಶಿಸಲಾಗಿರುವ ಉಪ ವಿಜ್ಞಾನ ಕೇಂದ್ರಗಳಿಗೆ ಕೇಂದ್ರ ಸರಕಾರದ ತಂಡ ಭೇಟಿ ನೀಡಿ ತಮ್ಮ ಒಪ್ಪಿಗೆ ಸೂಚಿಸಿದೆ. ಚಿಕ್ಕಮಗಳೂರು ಉಪ ವಿಜ್ಞಾನ ಕೇಂದ್ರ ಹಾಗೂ ತಾರಾಲಯಕ್ಕೆ ಕೇಂದ್ರ ತಂಡ ಜನವರಿ ತಿಂಗಳಲ್ಲಿ ಭೇಟಿ ನೀಡಲಿದೆ. ಈ ವಿಜ್ಞಾನ ಕೇಂದ್ರಗಳ ನಿರ್ಮಾಣ ಕಾರ್ಯ ರಾಜ್ಯ ಮತ್ತು ಕೇಂದ್ರ ಸರಕಾರದ ಜಂಟಿ ಅನುದಾನದಲ್ಲಿ ನಡೆಯಲಿದ್ದು, ಈ ಬಗ್ಗೆ ಒಡಂಬಡಿಕೆ ಬಾಕಿಯಿದೆ. ಒಡಂಬಡಿಕೆಯ ನಂತರ ನಿರ್ಮಾಣ ಕಾರ್ಯ ಪ್ರಾರಂಭವಾಗಲಿದೆ. ಒಡಂಬಡಿಕೆಯ ಬಗ್ಗೆ ಕೇಂದ್ರ ಸರಕಾರದೊಂದಿಗೆ ಸಂವಹನ ನಡೆಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

2 ಕೋಟಿ ರೂಪಾಯಿಗಳ ವೆಚ್ಚದಲ್ಲಿ 2 ಪ್ರಾದೇಶಿಕ ಹಾಗೂ 4 ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರಗಳ ಉನ್ನತೀಕರಣ:
ವಿದ್ಯಾರ್ಥಿಗಳಲ್ಲಿ ಹಾಗೂ ಜನಸಾಮಾನ್ಯರಲ್ಲಿ ವೈಜ್ಞಾನಿಕ ಮನೋಭಾವನೆ, ಚಿಂತನೆ ಮತ್ತು ವೈಚಾರಿಕತೆಗಳನ್ನ ಬೆಳೆಸುವ ನಿಟ್ಟಿನಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಬೆಳವಣಿಗೆಗಳನ್ನ ಪ್ರಚುರಪಡಿಸುವ ಪ್ರಮುಖ ಉದ್ದೇಶದಿಂದ ವಿಜ್ಞಾನ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಖಗೋಳಶಾಸ್ತ್ರ ಹಾಗೂ ವಿಜ್ಞಾನ, ತಂತ್ರಜ್ಞಾನ, ಎಂಜಿನೀಯರಿಂಗ್ ಮತ್ತು ಗಣಿತಶಾಸ್ತ್ರ ಆಧಾರಿತ ಶಿಕ್ಷಣವನ್ನು ಉತ್ತೇಜಿಸಲು ತಾರಾಲಯಗಳ ಸ್ಥಾಪನೆ ಮಾಡಲಾಗಿದೆ. ಕಳೆದ ಆಯವ್ಯಯದಲ್ಲಿ ಘೋಷಿಸಿದ್ದಂತೆ 2 ಕೋಟಿ ರೂಪಾಯಿಗಳ ವೆಚ್ಚದಲ್ಲಿ 2 ಪ್ರಾದೇಶಿಕ ಹಾಗೂ 4 ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರಗಳನ್ನು ಉನ್ನತೀಕರಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಧಾರವಾಡ ಪ್ರಾದೇಶಿಕ ವಿಜ್ಞಾನ ಕೇಂದ್ರ ಹಾಗೂ ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರ ಮಂಗಳೂರಿನಲ್ಲಿ ತಲಾ 50 ಲಕ್ಷ ರೂಪಾಯಿಗಳ ವೆಚ್ಚದಲ್ಲಿ, ಡಾ. ಎಚ್.ಎನ್. ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರ, ಚಿಕ್ಕಬಳ್ಳಾಪುರ, ಬಳ್ಳಾರಿ, ಕಾರವಾರ ಮತ್ತು ಬೀದರ್ ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರಗಳಲ್ಲಿ ತಲಾ 25 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಉನ್ನತೀಕರಣ ಕಾರ್ಯಗಳನ್ನು ಹಮ್ಮಿಕೊಳ್ಳಲಾಗುವುದು. ಆಗಾಗ್ಗೆ ವಿಜ್ಞಾನ ಕೇಂದ್ರಗಳನ್ನು ಉನ್ನತೀಕರಿಸುವುದರಿಂದ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಆಗಿರುವಂತಹ ಹೊಸ ಆವಿಷ್ಕಾರಗಳನ್ನ ಅಳವಡಿಸಕೊಳ್ಳಬಹುದಾಗಿದೆ. ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಹೆಚ್ಚಿಸುವ ಹಾಗೂ ಆಸಕ್ತಿಯನ್ನು ಹೆಚ್ಚಿಸುವಂತಹ ನೂತನ ಅಂಶಗಳನ್ನು ಅಳವಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post