ಕಲ್ಪ ಮೀಡಿಯಾ ಹೌಸ್
ಬೆಂಗಳೂರು: ಕರ್ನಾಟಕ ಸೇರಿದಂತೆ ದೇಶದ 8 ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಿ ರಾಷ್ಟ್ರಪತಿ ಭವನ ಆದೇಶ ಹೊರಡಿಸಿದ್ದು, ರಾಜ್ಯದ ನೂತನ ರಾಜ್ಯಪಾಲರಾಗಿ ಥಾವರ್‌ಚಂದ್ ಗೆಹ್ಲೋಟ್ ನೇಮಕಗೊಂಡಿದ್ದಾರೆ. ಈ ಮೂಲಕ ಕರ್ನಾಟಕದ 19ನೇ ರಾಜ್ಯಪಾಲರಾಗಿ ಗೆಹ್ಲೋಟ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಹಾಲಿ ರಾಜ್ಯಪಾಲ ವಾಜುಬಾಯಿ ವಾಲ ಅವರ ಅವಧಿ ಪೂರ್ಣ ಗೊಂಡಿರುವ ಹಿನ್ನೆಲೆಯಲ್ಲಿ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಕರ್ನಾಟಕ ರಾಜ್ಯಪಾಲರಾಗಿ ನೇಮಕ ಮಾಡಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆದೇಶ ಹೊರಡಿಸಿದ್ದಾರೆ.
ಮಧ್ಯಪ್ರದೇಶದ ನಾಗ್ಡಾದವರಾದ ಗೆಹ್ಲೋಟ್ ಬಿಜೆಪಿಯ ರಾಜ್ಯಸಭಾ ಸದಸ್ಯರಾಗಿದ್ದು, ನರೇಂದ್ರ ಮೋದಿ ಸರ್ಕಾರದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರಾಗಿ, ಕೇಂದ್ರ ಸಚಿವರಾಗಿ ಅಧಿಕಾರ ವಹಿಸಿದ ಅನುಭವ ಹೊಂದಿದ್ದಾರೆ.
ಒಟ್ಟು ಎಂಟು ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ:
ಮಿಜೋರಾಂ ರಾಜ್ಯಪಾಲ ಪಿ.ಎಸ್.ಶ್ರೀಧರನ್ ಪಿಳ್ಳೈ ಅವರನ್ನು ಗೋವಾ ರಾಜ್ಯಪಾಲರಾಗಿ, ಹರಿಯಾಣ ಗವರ್ನರ್ ಸತ್ಯದೇವ್ ನಾರಾಯಣ್ ಆರ್ಯ ಅವರನ್ನು ತ್ರಿಪುರಾಗೆ ರಾಜ್ಯಕ್ಕೆ ರಾಜ್ಯಪಾಲರಾಗಿ ನೇಮಕ ಮಾಡಲಾಗಿದೆ.
ತ್ರಿಪುರ ರಾಜ್ಯಪಾಲ ರಮೇಶ್ ಬೈಸ್ ಅವರನ್ನು ಜಾರ್ಖಂಡ್‌ಗೆ ವರ್ಗಾವಣೆ ಮಾಡಲಾಗಿದೆ. ಹಿಮಾಚಲ ಪ್ರದೇಶದ ರಾಜ್ಯಪಾಲರಾದ ಬಂಡಾರು ದತ್ತಾತ್ರೇಯ ಅವರನ್ನು ಹರಿಯಾಣ ರಾಜ್ಯಪಾಲರಾಗಿ ನೇಮಕ ಮಾಡಿ ರಾಷ್ಟ್ರಪತಿ ಆದೇಶ ಹೊರಡಿಸಿದ್ದಾರೆ.
ಇನ್ನುಳಿದಂತೆ ಹರಿ ಬಾಬು ಕಂಭಂಪತಿ ಮಿಜೋರಾಂ ರಾಜ್ಯಪಾಲರಾಗಿ, ಮಂಗುಭಾಯ್ ಛಗಂಬಾಯ್ ಪಟೇಲ್ ಮಧ್ಯಪ್ರದೇಶದ ರಾಜ್ಯಪಾಲರಾಗಿ, ರಾಜೇಂದ್ರ ವಿಶ್ವನಾಥ್ ಅರ್ಲೆಕರ್ ಅವರನ್ನು ಹಿಮಾಚಲ ಪ್ರದೇಶದ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post