ಕಲ್ಪ ಮೀಡಿಯಾ ಹೌಸ್ | ಬ್ಯಾಂಕಾಕ್ |
ಥಾಯ್ಲೆಂಡ್‌ನ ರಾಜಧಾನಿ ಬ್ಯಾಂಕಾಕ್‌ನ ಉತ್ತರ ಭಾಗದಲ್ಲಿರುವ ನಾ ಲಾಡ್‌ಪ್ರಾವೋ ಪ್ರದೇಶದ ಪಬ್‌ನಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ 27 ಮಂದಿ ಮೃತಪಟ್ಟಿದ್ದು, 63ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಮುಂಜಾನೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲೇ ಪಬ್ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಕೆಲವೇ ಕ್ಷಣಗಳಲ್ಲಿ ದಟ್ಟ ಹೊಗೆ ಮತ್ತು ಬೆಂಕಿ ಜ್ವಾಲೆಗಳು ವ್ಯಾಪಿಸಿ, ಒಳಗಿದ್ದವರು ಆತಂಕದಿಂದ ಹೊರಗೆ ಓಡಿ ಪ್ರಾಣ ಉಳಿಸಿಕೊಳ್ಳಲು ಪ್ರಯತ್ನಿಸಿದರು.
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೊಗಳಲ್ಲಿ ಪಬ್‌ನ ಮುಂಭಾಗದಿಂದ ಭಾರೀ ಬೆಂಕಿ ಮತ್ತು ಕಪ್ಪು ಹೊಗೆ ಹೊರಬರುತ್ತಿರುವ ದೃಶ್ಯಗಳು ಕಂಡುಬಂದಿವೆ.
ಥಾಯ್ಲೆಂಡ್ ಪ್ರಧಾನಿ ಅನುತಿನ್ ಚಾರ್ನ್ವಿರಾಕುಲ್ ಸ್ಥಳಕ್ಕೆ ಭೇಟಿ ನೀಡಿ, ಹಲವರ ಮೃತದೇಹಗಳು ಪಬ್‌ನ ಹಿಂಭಾಗದ ಶೌಚಾಲಯಗಳ ಬಳಿ ಪತ್ತೆಯಾಗಿವೆ ಎಂದು ತಿಳಿಸಿದ್ದಾರೆ. ಬೆಂಕಿ ಅವಘಡಕ್ಕೆ ನಿಖರ ಕಾರಣ ಏನು ಎಂಬುದರ ಕುರಿತು ತನಿಖೆ ಮುಂದುವರಿದಿದೆ.
ಪಬ್‌ನಲ್ಲಿ ಕಾರ್ಯಕ್ರಮ ನೀಡುತ್ತಿದ್ದ ಸಂಗೀತಗಾರರೊಬ್ಬರು ಹೇಳುವಂತೆ, ವೇದಿಕೆಯ ಸಮೀಪದ ವಿದ್ಯುತ್ ಸರ್ಕ್ಯೂಟ್ ಬ್ರೇಕರ್‌ನಿಂದ ಮೊದಲು ಹೊಗೆ ಕಾಣಿಸಿಕೊಂಡಿದ್ದು, ಬಳಿಕ ವಿದ್ಯುತ್ ಕಡಿತಗೊಂಡು ಸ್ಫೋಟದ ಶಬ್ದ ಕೇಳಿಸಿತು. ಕೆಲವೇ ಕ್ಷಣಗಳಲ್ಲಿ ಪಬ್ ದಟ್ಟ ಹೊಗೆಯಿಂದ ಆವರಿಸಿಕೊಂಡ ಕಾರಣ ಜನರು ಹೊರಬರಲು ಸಾಧ್ಯವಾಗಲಿಲ್ಲ ಎಂದು ತಿಳಿಸಿದ್ದಾರೆ.
ಬ್ಯಾಂಕಾಕ್ ಗವರ್ನರ್ ಚಾಡ್‌ಚಾರ್ಟ್ ಸಿಟ್ಟಿಪುಂಟ್ ಅವರು 63 ಮಂದಿಯನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಅವರಲ್ಲಿ 22 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಹಲವರ ಬಳಿ ಗುರುತಿನ ಚೀಟಿ ಇಲ್ಲದ ಕಾರಣ ಹಾಗೂ ಕೆಲವರು ಪ್ರಜ್ಞಾಹೀನ ಸ್ಥಿತಿಯಲ್ಲಿರುವುದರಿಂದ ಮೃತರು ಮತ್ತು ಗಾಯಾಳುಗಳ ಗುರುತು ಪತ್ತೆ ಕಾರ್ಯ ಮುಂದುವರಿದಿದೆ.
ಗಾಯಾಳುಗಳಲ್ಲಿ 22 ಮಂದಿಯ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ.
ಅಗ್ನಿಶಾಮಕ ಸಿಬ್ಬಂದಿ ಸುಮಾರು 30 ನಿಮಿಷಗಳ ಕಾರ್ಯಾಚರಣೆ ಬಳಿಕ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಘಟನೆಯ ನಂತರ ಪಬ್‌ನ ಒಳಭಾಗ ಸಂಪೂರ್ಣ ಸುಟ್ಟು ಕರಕಲಾಗಿರುವುದು ಕಂಡುಬಂದಿದೆ.
ಇದೇ ವೇಳೆ, ಕುಟುಂಬ ಸದಸ್ಯರು ಹಾಗೂ ಸ್ನೇಹಿತರ ಮಾಹಿತಿ ತಿಳಿದುಕೊಳ್ಳಲು ಘಟನಾ ಸ್ಥಳದಲ್ಲಿ ವಿಶೇಷ ನೋಂದಣಿ ಕೇಂದ್ರವನ್ನು ತೆರೆಯಲಾಗಿದೆ.
ಘಟನೆಯ ವೇಳೆ ಸಮೀಪದಲ್ಲೇ ಕಾರ್ಯಕ್ರಮ ನೀಡುತ್ತಿದ್ದ ಗಾಯಕಿ ಸುಕನ್ಯಾ ವೋಂಗ್‌ವೋಂಗ್ವೈ ಮಾತನಾಡಿ, ತಮ್ಮ ತಂಡದ ಒಬ್ಬ ಸದಸ್ಯ ಮೃತಪಟ್ಟಿದ್ದು, ಮೂವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮತ್ತೊಬ್ಬರ ಸುಳಿವು ಇನ್ನೂ ಲಭ್ಯವಾಗಿಲ್ಲ ಎಂದು ತಿಳಿಸಿದ್ದಾರೆ.
“ಬೆಂಕಿ ಕಾಣಿಸಿಕೊಂಡ ತಕ್ಷಣ ವಿದ್ಯುತ್ ಕಡಿತಗೊಂಡಿತು. ಎಲ್ಲೆಡೆ ದಟ್ಟ ಹೊಗೆ ಆವರಿಸಿದ್ದರಿಂದ ಯಾರನ್ನೂ ಗುರುತಿಸಲು ಸಾಧ್ಯವಾಗಲಿಲ್ಲ,” ಎಂದು ಅವರು ಹೇಳಿದ್ದಾರೆ.
ಇಂತಹ ದುರಂತಗಳು ಹೊಸದಲ್ಲ:
2022ರಲ್ಲಿ ಥಾಯ್ಲೆಂಡ್‌ನ ಪೂರ್ವ ಭಾಗದ ಸಂಗೀತ ಪಬ್‌ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 14 ಮಂದಿ ಮೃತಪಟ್ಟಿದ್ದರು. ಅದಕ್ಕೂ ಮೊದಲು, 2009ರ ಜನವರಿ 1ರಂದು ಬ್ಯಾಂಕಾಕ್‌ನ ಸಾಂಟಿಕಾ ನೈಟ್‌ಕ್ಲಬ್‌ನಲ್ಲಿ ಹೊಸ ವರ್ಷದ ಸಂಭ್ರಮದ ವೇಳೆ ಸಂಭವಿಸಿದ ಅಗ್ನಿ ಅವಘಡದಲ್ಲಿ 66 ಮಂದಿ ಸಾವನ್ನಪ್ಪಿ, 200ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 







