ಕಲ್ಪ ಮೀಡಿಯಾ ಹೌಸ್ | ಬನ್ನೇರುಘಟ್ಟ |
ರಾಜ್ಯದ ಯಾವುದೇ ಮೃಗಾಲಯಗಳಲ್ಲಿ ಬೆಕ್ಕಿನ ಜಾತಿಗೆ ಸೇರಿದ ವನ್ಯಮೃಗಗಳಿಗೆ ಸೋಂಕು ಬಾರದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಅರಣ್ಯಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ Eshwar Khandre ಸೂಚನೆ ನೀಡಿದ್ದಾರೆ.
ಬನ್ನೇರುಘಟ್ಟ ರಾಷ್ಟ್ರೀಯ ಜೈವಿಕ ಉದ್ಯಾನದಲ್ಲಿ ಬೆಕ್ಕುಗಳಿಗೆ ತಗಲುವ ಮಾರಕ ಫೆಲಿನ್ ಪ್ಯಾನ್ಲೂಕೋಪೇನಿಯಾ (ಎಫ್.ಪಿ.ವಿ.) ವೈರಾಣು ಸೋಂಕಿನಿಂದ 7 ಚಿರತೆ ಮರಿಗಳು ಮತ್ತು ಉದರ ಸಂಬಂಧಿ ಕಾಯಿಲೆ (ಹೆಮೊರೈಜಿಕ್ ಎಂಟ್ರೈಟಿಸ್ ಮತ್ತು ಎಂಡೋಕಾರ್ಡೈಟಿಸ್) ಯಿಂದ ಹಾಗೂ ಪರಸ್ಪರ ಸಂಘರ್ಷದಿಂದ 16 ಜಿಂಕೆಗಳು ಸಾವಿಗೀಡಾಗಿರುವ ಹಿನ್ನೆಲೆಯಲ್ಲಿ ಉದ್ಯಾನಕ್ಕೆ ಖುದ್ದು ಭೇಟಿ ನೀಡಿ ಪರಿಶೀಲಿಸಿ, ಬಳಿಕ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಈ ಉದ್ಯಾನದಲ್ಲಿ ಚಿರತೆಗಳಿಗೆ ಸೋಂಕು ಬಂದಿರುವ ಹಿನ್ನೆಲೆಯಲ್ಲಿ ಇಲ್ಲಿನ ಯಾವುದೇ ಸಿಬ್ಬಂದಿ ರಾಜ್ಯದ ಬೇರೆ ಯಾವುದೇ ಮೃಗಾಲಯಕ್ಕೆ ಭೇಟಿ ನೀಡದಂತೆ ಆದೇಶ ನೀಡಿದರು.
ಮೈಸೂರಿನ ಜಗದ್ವಿಖ್ಯಾತ ಶ್ರೀ ಚಾಮರಾಜೇಂದ್ರ ಮೃಗಾಲಯ ಮತ್ತು ಇತರ ಮೃಗಾಲಯಗಳಲ್ಲಿ ಬೆಕ್ಕಿನ ಜಾತಿಯ ಪ್ರಾಣಿಗಳು ಅಂದರೆ ಚಿರತೆ, ಸಿಂಹ, ಹುಲಿ, ಕಾಡುಬೆಕ್ಕು ಇತ್ಯಾದಿಗಳಿಗೆ ಅಗತ್ಯವಿದ್ದರೆ ಲಸಿಕೆ ನೀಡುವಂತೆ ಸೂಚಿಸಿದರು.

Also read: ಭಾರತದಲ್ಲಿ ಬೇರು ಹೊಂದಿರುವ ಮಹಿಳೆಯರನ್ನು ಎಂದೂ ದುರ್ಬಲರೆಂದು ಪರಿಗಣಿಸುವುದಿಲ್ಲ: ಅಮಿತ್ ಶಾ
ಅರಣ್ಯ ಅಧಿಕಾರಿಗಳು ಮತ್ತು ವೈದ್ಯಾಧಿಕಾರಿಗಳು ಸಮನ್ವಯದೊಂದಿಗೆ ಎಲ್ಲ ಪ್ರಾಣಿಗಳನ್ನು ಗಮನವಿಟ್ಟು ಪರೀಕ್ಷಿಸಿ ಅವುಗಳ ಆರೈಕೆ ಮತ್ತು ಸಂರಕ್ಷಣೆಗೆ ಆದ್ಯತೆ ನೀಡಬೇಕು ಯಾವುದೇ ವೈಮನಸ್ಯ ಮನಸ್ತಾಪದಿಂದ ಸಂಸ್ಥೆಗೆ ಸರ್ಕಾರಕ್ಕೆ ಕೆಟ್ಟ ಹೆಸರು ಬಾರದಂತೆ ಮುಂಜಾಗ್ರತೆ ವಹಿಸಬೇಕು ಎಂದು ಸ್ಪಷ್ಟ ಸೂಚನೆ ನೀಡಿದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು 










Discussion about this post