ಕಲ್ಪ ಮೀಡಿಯಾ ಹೌಸ್ | ಬಂಟ್ವಾಳ |
ಅಕ್ರಮವಾಗಿ ನಿಷೇಧಿತ ಮಾದಕ ವಸ್ತು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಬಂಧಿಸಿ 810 ಗ್ರಾಂ ಗಾಂಜಾ ವಶಪಡಿಸಿಕೊಂಡಿರುವ ಘಟನೆ ತಾಲೂಕಿನ ತುಂಬೆ ಗ್ರಾಮದ ಹನುಮನಗರ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಬಂಟ್ವಾಳ ತುಂಬೆ ನಿವಾಸಿ ಸಮೀರ್ (31) ಮತ್ತು ಮೊಹಮ್ಮದ್ ಅಸೀಫ್ (35) ಬಂಧಿತ ಆರೋಪಿಗಳಾಗಿದ್ದು, ರಾಷ್ಟ್ರೀಯ ಹೆದ್ದಾರಿ ಪಕ್ಕದ ನಿರ್ಜನ ಪ್ರದೇಶದಲ್ಲಿ ಇಬ್ಬರು ವ್ಯಕ್ತಿಗಳು ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ಸ್ಥಳೀಯ ಪೊಲೀಸರು ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಮಂಜುನಾಥ ಟಿ, ಪೊಲೀಸ್ ಉಪ ನಿರೀಕ್ಷಕರು (ಕಾ&ಸು), ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ರವರು, ಸಿಬ್ಬಂದಿಗಳೊಂದಿಗೆ ಸದ್ರಿ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ರಾಷ್ಟ್ರೀಯ ಹೆದ್ದಾರಿಯ ಪಕ್ಕ ನಿರ್ಜನ ಪ್ರದೇಶದಲ್ಲಿ ಇಬ್ಬರು ವ್ಯಕ್ತಿಗಳು ಕಾರು ಆಟೋ ರಿಕ್ಷಾದ ಬಳಿ ಅನುಮಾನಾಸ್ಪದವಾಗಿ ನಿಂತುಕೊಂಡಿದ್ದು, ಅವರುಗಳನ್ನು ಹಿಡಿದು ವಿಚಾರಿಸಲಾಗಿ, ತಾವುಗಳು ಅಧಿಕ ಹಣಗಳಿಸುವ ಉದ್ದೇಶದಿಂದ ನಿಷೇಧಿತ ಮಾದಕವಸ್ತುವಾದ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿರುವುದಾಗಿ ಒಪ್ಪಿಕೊಂಡಿದ್ದು, ತಪಾಸಣೆ ನಡೆಸಿದಾಗ ಕಾರಿನಲ್ಲಿ 450 ಗ್ರಾಂ. ಗಾಂಜಾ ಹಾಗೂ ರಿಕ್ಷಾದಲ್ಲಿ 360 ಗ್ರಾಂ ಗಾಂಜಾ ಪತ್ತೆಯಾಗಿದೆ ಎನ್ನಲಾಗಿದೆ.
ಮುಂದಿನ ಕಾನೂನು ಕ್ರಮಕ್ಕಾಗಿ ಸದ್ರಿ ವಾಹನಗಳನ್ನು ಹಾಗೂ 810 ಗ್ರಾಂ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಸ್ವಾಧೀನಪಡಿಸಲಾಗಿದ್ದು, ಆರೋಪಿಗಳ ವಿರುದ್ಧ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣದ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 


















