ಕಲ್ಪ ಮೀಡಿಯಾ ಹೌಸ್ | ಬೆಳಗಾವಿ |
ಜಿಲ್ಲಾಡಳಿತ, ಕರ್ನಾಟಕ ರಾಜ್ಯ ಒಲಿಂಪಿಕ್ ಸಂಸ್ಥೆ ಬೆಂಗಳೂರು ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಶ್ರಯದಲ್ಲಿ ರವಿವಾರ (ಜೂ.22) ನಗರದ ಕೋಟೆ ಆವರಣದಲ್ಲಿ “ಅಂತಾರಾಷ್ಟ್ರೀಯ ಒಲಿಂಪಿಕ್ ಡೇ ರನ್-2025” #International Olympic Day Run-2025 ಓಟದ ರ್ಯಾಲಿಗೆ ವಿಧಾನ ಪರಿಷತ್ ಸದಸ್ಯರು, ಕರ್ನಾಟಕ ಒಲಿಂಪಿಕ್ ಸಂಸ್ಥೆ ಹಾಗೂ ಫೀಬಾ ಏಷ್ಯಾ ಅಧ್ಯಕ್ಷರಾದ ಡಾ. ಕೆ. ಗೋವಿಂದರಾಜ್ ರಾಜು ಅವರು ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು ಅಂತಾರಾಷ್ಟ್ರೀಯ ಒಲಂಪಿಕ್ ಡೇ ಅಂಗವಾಗಿ ವಿಶ್ವದಾದ್ಯಂತ ಓಟವನ್ನು ಆಯೋಜಿಸಲಾಗಿದೆ. ಅದೇ ರೀತಿಯಲ್ಲಿ ಜಿಲ್ಲೆಯಲ್ಲಿ ಆಯೋಜಿಸಲಾಗಿರುವ ಓಟದಲ್ಲಿ ಸಾರ್ವಜನಿಕರು, ಪೊಲೀಸ್ ಇಲಾಖೆಯ ಸಿಬ್ಬಂದಿಗಳು, ವಿದ್ಯಾರ್ಥಿಗಳು, ಕ್ರೀಡಾ ಪಟುಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿರುವುದು ಸಂತಸದ ವಿಷಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಮಾತನಾಡಿ ಅಂತಾರಾಷ್ಟ್ರೀಯ ಒಲಿಂಪಿಕ್ ಡೇ ಆಚರಿಸುವ ಮೂಲಕ ಪ್ರತಿಯೊಬ್ಬರು ಕ್ರೀಡಾ ಸ್ಪೂರ್ತಿ ಜೊತೆಗೆ ನಾಯಕತ್ವ ಗುಣ ಬೆಳಸಿಕೊಳ್ಳಬೇಕು ಎಂದು ಕರೆ ನೀಡಿದರು.
“ಅಂತಾರಾಷ್ಟ್ರೀಯ ಒಲಿಂಪಿಕ್ ಡೇ ರನ್-2025” ಓಟದ ರ‌್ಯಾಲಿ ಕೋಟೆ ಆವರಣದಿಂದ ಆರಂಭಗೊಂಡು, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತ, ಕೃಷ್ಣ ದೇವರಾಯ ವೃತ್ತದ ಮಾರ್ಗವಾಗಿ ಜಿಲ್ಲಾ ಕ್ರೀಡಾಂಗಣದವರೆಗೆ ತಲುಪಿತು. ಒಲಿಂಪಿಕ್ ಡೇ ಓಟದಲ್ಲಿ ವಿವಿಧ ಶಾಲೆ/ಕಾಲೇಜು/ವಸತಿ ನಿಲಯ/ವಿಶ್ವವಿದ್ಯಾಲಯಗಳಿಂದ ಸುಮಾರು 3500 ವಿದ್ಯಾರ್ಥಿಗಳು ಹಾಗೂ ಕ್ರೀಡಾಪಟುಗಳು ಸೇರಿದಂತೆ ಸಾರ್ವಜನಿಕರು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಆಸೀಫ್ (ರಾಜು) ಸೇಠ್, ಕರ್ನಾಟಕ ರಾಜ್ಯ ಒಲಿಂಪಿಕ್ ಸಂಸ್ಥೆ ಮಹಾಕಾರ್ಯದರ್ಶಿ ಟಿ. ಅನಂತರಾಜು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ, ಯುವ ಮುಖಂಡರಾದ ಸರ್ವೋತ್ತಮ ಜಾರಕಿಹೊಳಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪ ನಿರ್ದೇಶಕ ಬಿ. ಶ್ರೀನಿವಾಸ್, ಆಹಾರ ಇಲಾಖೆ ಉಪ ನಿರ್ದೇಶಕ ಮಲ್ಲಿಕಾರ್ಜುನ್ ನಾಯಕ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post