ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಭದ್ರಾ ಜಲಾಶಯದ (Bhadra Dam) ಎಡ ಮತ್ತು ಬಲದಂಡೆ ನಾಲೆಗಳಿಗೆ ಕನಿಷ್ಠ 20 ದಿನ ನೀರು (20 Days Water) ಹರಿಸಬೇಕು. ಭದ್ರಾ ಮೇಲ್ದಂಡೆ ಯೋಜನೆಗೆ ಪ್ರಸ್ತುತ ಹರಿಸುತ್ತಿರುವ ನೀರನ್ನು ತಕ್ಷಣ ಸ್ಥಗಿತಗೊಳಿಸಬೇಕು ಎಂದು ರೈತ ಸಂಘದ ಅಧ್ಯಕ್ಷೀಯ ಮಂಡಳಿ ಸದಸ್ಯ ಕೆ.ಟಿ. ಗಂಗಾಧರ್ ಆಗ್ರಹಿಸಿದರು.
ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭದ್ರಾ ಎಡದಂಡೆ ಹಾಗೂ ಬಲದಂಡೆ ನಾಲೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ನವೆಂಬರ್ 16ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಅಚ್ಚುಕಟ್ಟು ಪ್ರದೇಶದ ಸಾವಿರಾರು ರೈತರು ಪ್ರತಿಭಟನೆ ನಡೆಸಲಿದ್ದಾರೆ ಎಂದು ತಿಳಿಸಿದರು.
ಮಳೆ ಕೊರತೆಯಿಂದ ರೈತರಿಗೆ ಸಂಕಷ್ಟ
ಭದ್ರಾ ಜಲಾಶಯದ ನೀರನ್ನು ಅವಲಂಬಿಸಿ ಅಚ್ಚುಕಟ್ಟು ಪ್ರದೇಶದ ರೈತರು ಕೃಷಿ ಕಾಯಕದಿಂದ ಬದುಕು ಕಟ್ಟಿಕೊಂಡಿದ್ದಾರೆ. ಆದರೆ ಪ್ರಸಕ್ತ ವರ್ಷ ಮಳೆ ಕೊರತೆಯಿಂದಾಗಿ ಭತ್ತ, ಅಡಿಕೆ, ತೆಂಗು, ಬಾಳೆ ಸೇರಿದಂತೆ ವಿವಿಧ ಬೆಳೆಗಳನ್ನು ಬೆಳೆಯಲು ರೈತರು ಸಂಕಷ್ಟ ಎದುರಿಸುವಂತಾಗಿದೆ.
ರಾಜ್ಯ ಸರ್ಕಾರವೇ 30 ಜಿಲ್ಲೆಗಳ 226 ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಿದೆ. ಇಂತಹ ಪರಿಸ್ಥಿತಿಯಲ್ಲಿ ಅಚ್ಚುಕಟ್ಟು ಪ್ರದೇಶದ ರೈತರು ಕುಡಿಯುವ ನೀರಿಗೆ ಆದ್ಯತೆ ನೀಡುವಂತೆ ಮುಖ್ಯಮಂತ್ರಿಗಳ ಮನವಿಗೆ ಸ್ಪಂದಿಸಿ ಮುಂಗಾರು ಹಂಗಾಮಿನಲ್ಲಿ ಭತ್ತದ ಬೆಳೆ ಬೆಳೆಯುವುದನ್ನು ಕೈಬಿಟ್ಟು, ಬೇಸಿಗೆ ಹಂಗಾಮಿನ ಕೃಷಿಗಾಗಿ ನೀರನ್ನು ಕಾಯ್ದಿರಿಸುವ ಮೂಲಕ ಜವಾಬ್ದಾರಿ ಮೆರೆದಿದ್ದಾರೆ ಎಂದರು.
ಆದರೆ, ತುಂಗಾ ನದಿಯಿಂದ ಭದ್ರಾ ಜಲಾಶಯಕ್ಕೆ ನೀರು ಹರಿಸಿದ ಬಳಿಕ ಭದ್ರಾ ಮೇಲ್ದಂಡೆ ಯೋಜನೆಗೆ ಪ್ರಾಯೋಗಿಕವಾಗಿ ಮೂರು ಟಿಎಂಸಿ ನೀರು ಹರಿಸಲಾಗಿದೆ. ಹರಿಸಿದ ನೀರನ್ನು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಳ್ಳದೆ, ನಾಲೆಗಳ ಕೊನೆಯ ಭಾಗದ ಕೆರೆಗಳಿಗೆ ಹೆಚ್ಚುವರಿಯಾಗಿ ಒಂದು ಟಿಎಂಸಿ ನೀರು ಹರಿಸುತ್ತಿರುವ ಸರ್ಕಾರದ ನಿರ್ಧಾರವನ್ನು ಅಚ್ಚುಕಟ್ಟುದಾರರು ಖಂಡಿಸುತ್ತಾರೆ ಎಂದು ಹೇಳಿದರು.
Bhadra Dam: ಜಲಾಶಯದಲ್ಲಿ 55.84 ಟಿಎಂಸಿ ನೀರು ಸಂಗ್ರಹ
ಪ್ರಸ್ತುತ ಭದ್ರಾ ಜಲಾಶಯದಲ್ಲಿ ಒಟ್ಟು 55.84 ಟಿಎಂಸಿ ನೀರು ಸಂಗ್ರಹವಾಗಿದೆ. ಇದರಲ್ಲಿ 13.83 ಟಿಎಂಸಿ ಡೆಡ್ ಸ್ಟೋರೇಜ್ ಹೊರತುಪಡಿಸಿದರೆ ಬಳಕೆಗೆ ಲಭ್ಯವಿರುವ ನೀರಿನ ಪ್ರಮಾಣ ಸುಮಾರು 42 ಟಿಎಂಸಿ ಮಾತ್ರ.
ಬೇಸಿಗೆ ಹಂಗಾಮಿನ ಭತ್ತದ ಬೆಳೆಗಾಗಿ ಭದ್ರಾ ಎಡ ಮತ್ತು ಬಲದಂಡೆ ನಾಲೆಗಳ ವ್ಯಾಪ್ತಿಗೆ ಒಟ್ಟು 36 ಟಿಎಂಸಿ ನೀರಿನ ಅಗತ್ಯವಿದೆ. ಅಚ್ಚುಕಟ್ಟು ಪ್ರದೇಶದ ನಾಲೆಗಳಿಗೆ 120 ದಿನ ನೀರು ಹರಿಸಲು ಸುಮಾರು 7 ಟಿಎಂಸಿ ನೀರಿನ ಕೊರತೆಯಿದೆ. ಇಂತಹ ಸಂದರ್ಭದಲ್ಲಿ ಮೇಲ್ದಂಡೆ ಯೋಜನೆಗೆ ನೀರು ಹರಿಸುವುದು ಸರಿಯಲ್ಲ ಎಂದು ಗಂಗಾಧರ್ ಆಕ್ಷೇಪಿಸಿದರು.
2026ರ ಅಕ್ಟೋಬರ್ 30ರಿಂದ ಭದ್ರಾ ಮೇಲ್ದಂಡೆ ಯೋಜನೆಯ ಎಚ್.ಆರ್.ಪಿ.ಗೆ ಒಂದು ಟಿಎಂಸಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ರೈತರು ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಿದ್ದಾರೆ. ಆದರೂ ಸರ್ಕಾರ ತನ್ನ ನಿರ್ಧಾರವನ್ನು ಬದಲಾಯಿಸಿಲ್ಲ ಎಂದು ಆರೋಪಿಸಿದರು.
ರೈತರ ಪ್ರಮುಖ ಹಕ್ಕೊತ್ತಾಯಗಳು
- ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರ ಹಿತದೃಷ್ಟಿಯಿಂದ ಸರ್ಕಾರ ತಕ್ಷಣ ಕೆಳಕಂಡ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
- ಭದ್ರಾ ಮೇಲ್ದಂಡೆ ಯೋಜನೆಗೆ ಹರಿಸುತ್ತಿರುವ ನೀರನ್ನು ತಕ್ಷಣ ಸ್ಥಗಿತಗೊಳಿಸಬೇಕು.
- ತುಂಗಾ ಮೇಲ್ದಂಡೆ ಯೋಜನೆಯನ್ನು ಆದಷ್ಟು ಬೇಗ ಪೂರ್ಣಗೊಳಿಸಿ ಭದ್ರಾ ಜಲಾಶಯಕ್ಕೆ ನೀರು ಹರಿಸಬೇಕು.
- ಭದ್ರಾ ಎಡ ಮತ್ತು ಬಲದಂಡೆ ನಾಲೆಗಳ ವ್ಯಾಪ್ತಿಯಲ್ಲಿ ಬೆಳೆದು ನಿಂತಿರುವ ಅಡಿಕೆ, ತೆಂಗು, ಬಾಳೆ ಸೇರಿದಂತೆ ಇತರೆ ಬೆಳೆಗಳ ರಕ್ಷಣೆಗಾಗಿ ನವೆಂಬರ್ ತಿಂಗಳಲ್ಲಿ ಕನಿಷ್ಠ 20 ದಿನ ನೀರು ಹರಿಸಬೇಕು.
- ಜಾನುವಾರುಗಳ ಕುಡಿಯುವ ನೀರು ಹಾಗೂ ಕೆರೆ, ಕುಂಟೆಗಳನ್ನು ತುಂಬಿಸಲು ಆದ್ಯತೆ ನೀಡಬೇಕು.
- ಭದ್ರಾ ಜಲಾಶಯದ ನೀರಾವರಿ ಸಲಹಾ ಸಮಿತಿಯನ್ನು ತಕ್ಷಣ ರದ್ದುಪಡಿಸಬೇಕು.
- ಮುಂದಿನ ದಿನಗಳಲ್ಲಿ ಅಚ್ಚುಕಟ್ಟು ಪ್ರದೇಶದ ನಾಲೆಗಳಿಗೆ ನೀರು ಹರಿಸುವ ವೇಳಾಪಟ್ಟಿಯನ್ನು ಮುಂಚಿತವಾಗಿ ಪ್ರಕಟಿಸಬೇಕು.
- ಬೆಳೆ ನಷ್ಟ ಅನುಭವಿಸುವ ರೈತರಿಗೆ ಭತ್ತದ ಬೆಳೆಗೆ ಲಾಭದಾಯಕ ಬೆಂಬಲ ಬೆಲೆ ನೀಡಬೇಕು.
Also Read>> ಕನ್ನಡ ಅಧ್ಯಯನದಿಂದ ಬದುಕು ಸಾರ್ಥಕ: ನಟ ಡಾ. ಶ್ರೀಧರ್
ರೈತರ ಹಕ್ಕು ಮತ್ತು ಭವಿಷ್ಯಕ್ಕಾಗಿ ಹೋರಾಟ
ಇದು ಕೇವಲ ನೀರಿಗಾಗಿ ನಡೆಯುತ್ತಿರುವ ಹೋರಾಟವಲ್ಲ. ರೈತರ ಭೂಮಿ, ಹಕ್ಕು, ಕೃಷಿ, ಉದ್ಯೋಗ ಹಾಗೂ ಮುಂದಿನ ಭವಿಷ್ಯವನ್ನು ರೂಪಿಸಿಕೊಳ್ಳುವ ಹೋರಾಟವಾಗಿದೆ. ಆದ್ದರಿಂದ ಅಚ್ಚುಕಟ್ಟು ಪ್ರದೇಶದ ರೈತರು ಹೆಚ್ಚಿನ ಸಂಖ್ಯೆಯಲ್ಲಿ ನವೆಂಬರ್ 16ರಂದು ನಡೆಯುವ ಪ್ರತಿಭಟನೆಯಲ್ಲಿ ಭಾಗವಹಿಸಿ ಸರ್ಕಾರಕ್ಕೆ ಎಚ್ಚರಿಕೆ ನೀಡಬೇಕು ಎಂದು ಕೆ.ಟಿ. ಗಂಗಾಧರ್ ಕರೆ ನೀಡಿದರು.
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಭದ್ರಾವತಿ ತಾಲೂಕು ಶಾಖೆ, ಶಿವಮೊಗ್ಗ ಜಿಲ್ಲೆ ಮತ್ತು ಭದ್ರಾ ಎಡದಂಡೆ ಹಾಗೂ ಬಲದಂಡೆ ನಾಲೆಗಳ ಅಚ್ಚುಕಟ್ಟುದಾರರ ಹಿತರಕ್ಷಣಾ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ಪ್ರತಿಭಟನೆ ಆಯೋಜಿಸಲಾಗಿದೆ.
ಪತ್ರಿಕಾಗೋಷ್ಠಿಯಲ್ಲಿ ಸಂಘದ ಪದಾಧಿಕಾರಿಗಳಾದ ವಿರೇಶ್, ಲವಕುಮಾರ್, ಯಶವಂತರಾವ್ ಘೋರ್ಪಡೆ, ಮಂಜಪ್ಪಗೌಡ್ರು, ಮಂಜುನಾಥೇಶ್ವರ ಹೆಚ್.ಎಸ್., ಮೋಹನ್ ಕೂಡ್ಲಿಗೆರೆ, ಹಿರಣ್ಣಯ್ಯ, ಜಗದೀಶ್, ರಘುನಾಥ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









