ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ನಗರದ ರಾಜ್ಯ ಸರ್ಕಾರಿ ಸ್ವಾಮ್ಯದ ಮೈಸೂರು ಕಾಗದ ಕಾರ್ಖಾನೆಯನ್ನು ಕಾರ್ಮಿಕ ಇಲಾಖೆ ಕಾರ್ಯದರ್ಶಿಗಳು ಸಂಪೂರ್ಣವಾಗಿ ಮುಚ್ಚುವ ಸಂಬಂಧ ಹೊರಡಿಸಿರುವ ಆದೇಶ ಹಾಗು ಕಾರ್ಖಾನೆ ಮುಖ್ಯ ಆಡಳಿತಾಧಿಕಾರಿ ಕಾರ್ಮಿಕರನ್ನು ಕರ್ತವ್ಯಕ್ಕೆ ಹಾಜರಾಗದಂತೆ ಸೂಚಿಸಿರುವ ಪತ್ರದ ವಿರುದ್ಧ ಕಾರ್ಮಿಕರು ಹಾಗು ಕುಟುಂಬ ವರ್ಗದವರು ಸಿಡಿದೆದಿದ್ದು, ಭಾನುವಾರ ಶಿವಮೊಗ್ಗದಲ್ಲಿ ಸಂಸದ ಬಿ.ವೈ ರಾಘವೇಂದ್ರ ಅವರನ್ನು ಭೇಟಿಯಾಗಿ ಚರ್ಚಿಸಿದರು.
ಕಾರ್ಮಿಕ ಇಲಾಖೆ ಕಾರ್ಯದರ್ಶಿಗಳು ಅ.7ರಂದು ಕಾರ್ಖಾನೆಯನ್ನು ಸಂಪೂರ್ಣವಾಗಿ ಮುಚ್ಚುವ ಸಂಬಂಧ ಆದೇಶ ಹೊರಡಿಸಿದ್ದು, ಇದರಿಂದಾಗಿ ಪ್ರಸ್ತುತ ಕಾರ್ಖಾನೆಯಲ್ಲಿರುವ 214 ಕಾರ್ಮಿಕರು ಅತಂತ್ರ ಸ್ಥಿತಿಗೆ ಒಳಗಾಗಿದ್ದಾರೆ. ಯಾವುದೇ ಉದ್ಯೋಗದ ಭದ್ರತೆ ಇಲ್ಲದಂತಾಗಿದೆ. ಸರ್ಕಾರ 214 ಕಾರ್ಮಿಕರಿಗೆ ಉದ್ಯೋಗದ ಭರವಸೆ ನೀಡಿದ್ದು, ಈಗಾಗಲೇ 142 ಮಂದಿ ವಿವಿಧ ನಿಗಮ ಮಂಡಳಿಗಳಲ್ಲಿ ನಿಯೋಜನೆ ಮೇರೆಗೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಉಳಿದ ೭೨ ಮಂದಿಗೆ ಯಾವುದೇ ಉದ್ಯೋಗವಿಲ್ಲದಂತಾಗಿದೆ. ಈ ನಡುವೆ ಮುಖ್ಯ ಆಡಳಿತಾಧಿಕಾರಿಗಳು ಕಾರ್ಮಿಕರಿಗೆ ಕರ್ತವ್ಯಕ್ಕೆ ಹಾಜರಾಗದಂತೆ ಸೂಚನೆ ಹೊರಡಿಸಿದ್ದಾರೆ. ಇದರಿಂದಾಗಿ ಕಾರ್ಮಿಕರು ಮತ್ತು ಕುಟುಂಬ ವರ್ಗದವರು ಅತಂತ್ರಕ್ಕೆ ಒಳಗಾಗಿದ್ದಾರೆಂದು ಅಳಲು ವ್ಯಕ್ತಪಡಿಸಿದರು.
ಇದಕ್ಕೆ ಸ್ಪಂದಿಸಿದ ಸಂಸದ ಬಿ.ವೈ ರಾಘವೇಂದ್ರರವರು, ವಿವಿಧ ನಿಗಮ ಮಂಡಳಿಗಳಲ್ಲಿ ನಿಯೋಜನೆ ಮೇರೆಗೆ ಕರ್ತವ್ಯ ನಿರ್ವಹಿಸುತ್ತಿರುವವರು ಅಲ್ಲಿಯೇ ಕರ್ತವ್ಯ ಮುಂದುವರೆಸಲು ಸಂಬಂಧಪಟ್ಟ ನಿಗಮ ಮಂಡಳಿಗಳಿಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಮೂಲಕ ಆದೇಶ ಹೊರಡಿಸಲು ಕ್ರಮ ಕೈಗೊಳ್ಳಲಾಗುವುದು. ಈ ಸಂಬಂಧ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುವುದಾಗಿ ಹಾಗು ಯಾವುದೇ ಉದ್ಯೋಗವಿಲ್ಲದೆ ಉಳಿದು ಕೊಂಡಿರುವ 72 ಕಾರ್ಮಿಕರಿಗೆ ಅರಣ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಕಾರ್ಖಾನೆ ವ್ಯವಸ್ಥಾಪಕ ನಿರ್ದೇಶಕರಾದ ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್, ಎರಡು ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳು, ಬಿಜೆಪಿ ತಾಲೂಕು ಮಂಡಲ ಅಧ್ಯಕ್ಷ ಎಂ. ಪ್ರಭಾಕರ್, ಪ್ರಧಾನ ಕಾರ್ಯದರ್ಶಿ ಚನ್ನೇಶ್, ಜಿಲ್ಲಾ ಕಾರ್ಯದರ್ಶಿ ಜಿ. ಧರ್ಮಪ್ರಸಾದ್, ಜಯರಾಂ ಸೇರಿದಂತೆ ಕಾರ್ಮಿಕರು, ಕುಟುಂಬ ವರ್ಗದವರು ಪಾಲ್ಗೊಂಡಿದ್ದರು ಎಂದು ಕಾರ್ಮಿಕ ಮುಖಂಡ ಎಚ್. ತಿಮ್ಮಪ್ಪ ತಿಳಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post