ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ನಗರದ ಆಳ್ವಾಸ್ ನುಡಿಸಿರಿ ವಿರಾಸತ್ ವತಿಯಿಂದ ಮೂಡಬಿದರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದೊಂದಿಗೆ ಶಾಸಕ ಬಿ.ಕೆ ಸಂಗಮೇಶ್ವರ್ ನೇತೃತ್ವದಲ್ಲಿ ಹಳೇನಗರದ ಕನಕಮಂಟಪ ಮೈದಾನದಲ್ಲಿ ಶನಿವಾರ ಸಂಜೆ ಆಯೋಜಿಸಲಾಗಿದ್ದ ಆಳ್ವಾಸ್ ಸಾಂಸ್ಕೃತಿಕ ವೈಭವ ಮನಸೂರೆಗೊಂಡಿತು.
ಆಂಧ್ರದ ಜನಪದ ಬಂಜಾರ ನೃತ್ಯ, ಮಣಿಪುರಿ ಸ್ಟಿಕ್ ಡ್ಯಾನ್ಸ್, ಶಾಸ್ತ್ರೀಯ ನೃತ್ಯ-ನವದುರ್ಗೆ, ಮಲ್ಲಕಂಬ ಮತ್ತು ರೋಪ್ ಕಸರತ್ತು, ಗುಜರಾತಿನ ಗಾರ್ಭ ಮತ್ತು ದಾಂಡಿಯಾ, ಮಣಿಪುರಿ ದೋಲ್ ಚಲಮ್, ಕಥಕ್ ನೃತ್ಯ-ನವರಂಗ್, ಪಶ್ಚಿಮ ಬಂಗಾಳದ ಪುರುಲಿಯ ಸಿಂಹ ನೃತ್ಯ ಸೇರಿದಂತೆ ದೇಶ-ವಿದೇಶಗಳ ವಿವಿಧ ಪ್ರಕಾರದ ಶಾಸ್ತ್ರೀಯ ಜಾನಪದ, ಸಾಂಸ್ಕೃತಿಕ ಕಾರ್ಯಕ್ರಮಗಳು ಅನಾವರಣಗೊಂಡವು. ಆಳ್ವಾಸ್‌ನ ಪ್ರತಿಭಾವಂತ 300 ವಿದ್ಯಾರ್ಥಿಗಳಿಂದ 3 ಗಂಟೆ 30 ನಿಮಿಷ ಕಾರ್ಯಕ್ರಮ ಜರುಗಿತು.
ಕಾರ್ಯಕ್ರಮ ವೀಕ್ಷಿಸಲು ಗ್ರಾಮಾಂತರ ಹಾಗು ನಗರ ಪ್ರದೇಶದ ವಿವಿಧೆಡೆಗಳಿಂದ ಜನರು ಆಗಮಿಸಿದ್ದರು. ಇದಕ್ಕೂ ಮೊದಲು ಕಾರ್ಯಕ್ರಮವನ್ನು ನಗರಸಭೆ ಅಧ್ಯಕ್ಷೆ ಅನುಸುಧಾ ಮೋಹನ್ ಪಳನಿ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿ, 3 ಬಾರಿ ಕ್ಷೇತ್ರದ ಶಾಸಕರನ್ನಾಗಿ ಆಯ್ಕೆ ಮಾಡಿರುವ ಕ್ಷೇತ್ರದ ಜನರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಕ್ಷೇತ್ರದ ಜನರಿಗೆ ಇದೊಂದು ನನ್ನ ಚಿಕ್ಕ ಸೇವೆಯಾಗಿದೆ. ನಾನು, ನನ್ನ ಕುಟುಂಬದವರು, ಅಭಿಮಾನಿಗಳು, ಹಿತೈಷಿಗಳು, ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರೊಂದಿಗೆ ಸೇರಿ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸೇವೆ ಮಾಡುವ ಗುರಿ ಹೊಂದಿದ್ದೇನೆ. ಮುಂದಿನ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದ್ದು, ನಾನು ಮಂತ್ರಿಯಾಗುವುದು ಖಚಿತ. ಈಗಾಗಲೇ ಪಕ್ಷದ ವರಿಷ್ಠರು ನನ್ನನ್ನು ಮಂತ್ರಿ ಮಾಡುವುದಾಗಿ ಭರವಸೆ ನೀಡಿದ್ದಾರೆ. ಅಧಿಕಾರ ಇದ್ದಾಗ ಮಾತ್ರ ಏನಾದರೂ ಮಾಡಲು ಸಾಧ್ಯ. ಈ ಹಿನ್ನಲೆಯಲ್ಲಿ ನನ್ನನ್ನು ಪುನಃ ಆಯ್ಕೆ ಮಾಡುವ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಕಾರಣಕರ್ತರಾಗಬೇಕೆಂದು ಮನವಿ ಮಾಡಿದರು.
ನಗರಸಭೆ ಉಪಾಧ್ಯಕ್ಷ ಚನ್ನಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್ ಕುಮಾರ್, ತಹಸೀಲ್ದಾರ್ ಆರ್. ಪ್ರದೀಪ್, ನಗರಸಭೆ ಪೌರಾಯುಕ್ತ ಮನುಕುಮಾರ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ. ಸಿದ್ದಬಸಪ್ಪ ಮತ್ತು ಆಳ್ವಾಸ್ ನುಡಿಸಿರಿ ವಿರಾಸತ್ ಪ್ರಮುಖರಾದ ಪ್ರಕಾಶ್ ವೇದಿಕೆ ಉಪಸ್ಥಿತರಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಸ್ವಾಗತಿಸಿದರು. ಎಂ. ವಿರೂಪಾಕ್ಷಪ್ಪ ನಿರೂಪಿಸಿದರು.
Also read: ಶ್ರವಣ ದೋಷ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ಸರ್ಕಾರ ಬದ್ಧ: ಆರೋಗ್ಯ ಸಚಿವ ಸುಧಾಕರ್
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post