ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ತಾಲೂಕಿನಾದ್ಯಂತ ಕೊರೋನ ಸೋಂಕು ಹೆಚ್ಚಳವಾಗುತ್ತಿದ್ದು, ನಿನ್ನೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ನಗರ ಭೇಟಿಯ ಹಿನ್ನೆಲೆಯಲ್ಲಿ ಇಂದು ನಗರದಾದ್ಯಂತ ಕಠಿಣ ಲಾಕ್‌ಡೌನ್ ಜಾರಿಗೊಳಿಸಲಾಗಿದೆ.
ಜಿಲ್ಲೆಯಲ್ಲಿ ಭದ್ರಾವತಿ ತಾಲೂಕಿನಲ್ಲಿ ನಿರಂತರವಾಗಿ ಹೆಚ್ಚು ಪಾಸಿಟಿವ್ ಪ್ರಕರಣಗಳು ಪತ್ತೆಯಾಗುತ್ತಿದ್ದು, ಸಾವಿನ ಸಂಖ್ಯೆಯೂ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಿನ್ನೆ ಸಚಿವ ಈಶ್ವರಪ್ಪ ಹಾಗೂ ಜಿಲ್ಲಾಧಿಕಾರಿಗಳು ನಗರಕ್ಕೆ ದಿಢೀರ್ ಭೇಟಿ ನೀಡಿ, ನಗರಸಭೆಯಲ್ಲಿ ಅಧಿಕಾರಿಗಳ ಸಭೆ ನಡೆಸಿ, ಕಠಿಣ ಲಾಕ್‌ಡೌನ್ ಜಾರಿಗೆ ಸೂಚಿಸಿದ್ದರು. ಅಲ್ಲದೆ, ಭದ್ರಾವತಿಯಲ್ಲಿ ಪೊಲೀಸ್ ಇಲಾಖೆ ಇದೆಯೋ ಅಥವಾ ಇಲ್ಲವೋ ಎಂದು ಕಠಿಣವಾಗಿ ಆಕ್ರೋಶ ಹೊರಹಾಕಿದ್ದರು.
ಈ ಹಿನ್ನೆಲೆಯಲ್ಲಿ ಕಠಿಣ ಲಾಕ್‌ಡೌನ್ ಜಾರಿಗೆ ಮುಂದಾಗಿರುವ ಭದ್ರಾವತಿ ಪೊಲೀಸರು, ಸಚಿವರ ಸೂಚನೆಯಂತೆ ಇಂದು ಮುಂಜಾನೆ ೮ ಗಂಟೆಯಿಂದಲೇ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಿ ಹೆಚ್ಚಿನ ವಾಹನ ಸಂಚಾರಕ್ಕೆ ಬ್ರೇಕ್ ಹಾಕಿದ್ದಾರೆ. ನಗರದ ಪ್ರಮುಖ ರಸ್ತೆಗಳು, ವೃತ್ತಗಳು ಹಾಗೂ ನಗರವನ್ನು ಸಂಪರ್ಕಿಸುವ ಪ್ರಮುಖ ಸ್ಥಳಗಳಲ್ಲಿ ಚೆಕ್‌ಪೋಸ್ಟನ್ನು ಬಿಗಿ ಮಾಡಿದ್ದು, ಅನಾವಶ್ಯಕವಾಗಿ ಓಡಾಡುವವರಿಗೆ ಬಿಸಿ ಮುಟ್ಟಿಸಿದ್ದಾರೆ.
ಆಸ್ಪತ್ರೆ, ಮೆಡಿಕಲ್ ಶಾಪ್ ಸೇರಿದಂತೆ ಕೆಲವೇ ತುರ್ತು ಅವಶ್ಯಕತೆಗಳಿಗೆ ಹೊರತುಪಡಿಸಿ, ಬೇರಾವುದೇ ಕಾರಣಗಳನ್ನು ಹೇಳಿಕೊಂಡು ಓಡಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ. ಪೊಲೀಸರ ಈ ಬಿಗಿ ಕ್ರಮದ ಹಿನ್ನೆಲೆಯಲ್ಲಿ ನಗರದ ಪ್ರಮುಖ ಪ್ರದೇಶ ಹಾಗೂ ರಸ್ತೆಗಳು ಬಿಕೋ ಎನ್ನುತ್ತಿವೆ. ಖುದ್ದು ಡಿವೈಎಸ್‌ಪಿ ಕೃಷ್ಣಮೂರ್ತಿ ಅವರು, ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಕಠಿಣ ಲಾಕ್‌ಡೌನ್ ಜಾರಿಯನ್ನು ಪರಿಶೀಲಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post