ಭದ್ರಾವತಿ: ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಹರಿಯುವ ಭದ್ರಾ ನದಿ ಮೈದುಂಬಿದ್ದು, ಇಂದು ಮಧ್ಯಾಹ್ನದ ವೇಳೆ ಹೊಸ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ.
ನಿನ್ನೆ ರಾತ್ರಿಯಿಂದಲೇ ಸೇತುವೆಯ ಮೇಲೆ ನೀರು ಹರಿಯುತ್ತಿದ್ದು, ಇಂದು ಮುಂಜಾನೆಯಿಂದ ನೀರಿನ ಮಟ್ಟ ಏರಿಕೆಯಾಗುತ್ತಾ ಬಂದಿತು. ಭದ್ರಾ ಜಲಾಶಯದಿಂದ ನೀರಿನ ಹೊರ ಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಹೊಸ ಸೇತುವೆ ಮಧ್ಯಾಹ್ನದ ವೇಳೆಗೆ ಸಂಪೂರ್ಣ ಮುಳುಗಡೆಯಾಗಿದೆ.
ಇನ್ನು ಹೊಸ ಸೇತುವೆ ಮುಳುಗಡೆಯಾಗಿರುವ ಹಿನ್ನೆಲೆಯಲ್ಲಿ ಹಳೆ ಸೇತುವೆ ಹಾಗೂ ಹಳೇ ನಗರ ಭಾಗದಲ್ಲಿ ಸಂಚಾರ ದಟ್ಟಣೆ ಅಧಿಕವಾಗಿ ಟ್ರಾಫಿಕ್ ಜಾಮ್ ಆಗುತ್ತಿದೆ. ಅಲ್ಲದೇ, ಸೇತುವೆ ಮುಳುಗಡೆಯಾಗಿರುವ ಹಿನ್ನೆಲೆಯಲ್ಲಿ ಇದನ್ನು ನೋಡಲು ನೂರಾರು ಮಂದಿ ತಂಡೋಪತಂಡವಾಗಿ ಆಗಮಿಸುತ್ತಲೇ ಇದ್ದಾರೆ. ಸೇತುವೆ ಮುಳುಗಡೆಯಾಗಿರುವುದನ್ನು ನೋಡಲು ಆಗಮಿಸುತ್ತಿರುವವರ ಸಂಖ್ಯೆ ಅಧಿಕವಾಗುತ್ತಿರುವ ಪರಿಣಾಮ ಜನರನ್ನು ನಿಯಂತ್ರಿಸುವುದು ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ.
ಇಂದು ಬೆಳಗಿನ ಮಾಹಿತಿಯಂತೆ ಭದ್ರಾ ಅಣೆಕಟ್ಟೆಗೆ 56395 ಕ್ಯೂಸೆಕ್‌ಸ್ ಒಳಹರಿವಿದ್ದು, 51002 ಕ್ಯೂಸೆಕ್‌ಸ್ ನಷ್ಟು ಭಾರೀ ಪ್ರಮಾಣದಲ್ಲಿ ನೀರನ್ನು ಹೊರಬಿಡಲಾಗುತ್ತಿದೆ.
Discussion about this post