ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ನಗರದ ತಾಲೂಕು ಕಛೇರಿ ರಸ್ತೆ ನ್ಯಾಯಾಲಯದ ಮುಂಭಾಗದಲ್ಲಿ ಅಗಲೀಕರಣಗೊಳ್ಳದ ಕಾರಣ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ತಕ್ಷಣ ಜಿಲ್ಲಾಧಿಕಾರಿಗಳು ತುರ್ತು ಕ್ರಮ ಕೈಗೊಳ್ಳಬೇಕೆಂದು ತಾಲೂಕು ವಕೀಲರ ಸಂಘದ ಅಧ್ಯಕ್ಷ ಕೆ.ಎನ್. ಶ್ರೀಹರ್ಷ ಆಗ್ರಹಿಸಿದರು.
ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಸ್ತೆ ಅಗಲೀಕರಣ ವಿಚಾರದಲ್ಲಿ ಲೋಕೋಪಯೋಗಿ ಇಲಾಖೆ ನಿರ್ಲಕ್ಷ್ಯತನ ವಹಿಸುತ್ತಿದೆ. ಈ ಹಿಂದೆ ರಸ್ತೆ ಅಗಲೀಕರಣಕ್ಕಾಗಿ ತಾಲೂಕು ಕಛೇರಿ ರಸ್ತೆಯಲ್ಲಿದ್ದ ಬೃಹತ್ ಮರಗಳನ್ನು ವಿರೋಧದ ನಡುವೆಯೂ ಕಡೆತಲೆ ಮಾಡಿ ರಸ್ತೆ ಅಗಲೀಕರಣ ಕೈಗೊಳ್ಳಲಾಗಿತ್ತು. ಆದರೆ ನ್ಯಾಯಾಲಯದ ಮುಂಭಾಗದಲ್ಲಿ ಮಾತ್ರ ಅಗಲೀಕರಣದಲ್ಲಿ ತಾರತಮ್ಯ ಮಾಡಲಾಗಿದೆ. ಇದನ್ನು ವಕೀಲರ ಸಂಘ ತೀವ್ರವಾಗಿ ಖಂಡಿಸಿ ಪ್ರತಿಭಟನೆ ಸಹ ನಡೆಸಿತ್ತು. ಈ ಹಿನ್ನಲೆಯಲ್ಲಿ ಕಾಮಗಾರಿ ಸ್ಥಗಿತಗೊಂಡಿತ್ತು. ಈ ಸಂದರ್ಭದಲ್ಲಿ ಸ್ಥಳಕ್ಕೆ ಆಗಮಿಸಿದ್ದ ಉಪವಿಭಾಗಾಧಿಕಾರಿಗಳು ತಾರತಮ್ಯ ಸರಿಪಡಿಸುವುದಾಗಿ ಭರವಸೆ ನೀಡಿದ್ದರು. ಆದರೆ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ವಕೀಲರ ಸಂಘ ರಸ್ತೆ ಅಗಲೀಕರಣ ವಿಚಾರದಲ್ಲಿ ಯಾವುದೇ ದುರುದ್ದೇಶ ಅಥವಾ ರಾಜಕೀಯ ಹಿತಾಸಕ್ತಿ ಹೊಂದಿಲ್ಲ. ಸಾರ್ವಜನಿಕ ಹಿತಾಸಕ್ತಿಯಿಂದ ಹೋರಾಟ ನಡೆಸುತ್ತಿದೆ. ಜಿಲ್ಲಾಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು ಅಗಲೀಕರಣ ಕೈಗೊಳ್ಳುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಆದೇಶಿಸಬೇಕು. ಈ ನಿಟ್ಟಿನಲ್ಲಿ ಶಾಸಕರು ಜಿಲ್ಲಾಧಿಕಾರಿಗಳ ಮೇಲೆ ಇನ್ನೂ ಹೆಚ್ಚಿನ ಒತ್ತಡ ಹಾಕಬೇಕೆಂದು ಮನವಿ ಮಾಡಿದರು.
ಸಂಘದ ಉಪಾಧ್ಯಕ್ಷ ಡಿ.ಎಂ ವಿಶ್ವನಾಥ್, ಕಾರ್ಯದರ್ಶಿ ವಿ. ಉದಯ ಕುಮಾರ್, ನಿರ್ದೇಶಕರಾದ ಎಸ್. ಶ್ವೇತಾ, ಮಗೇಶ್‌ಬಾಬು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post