ಭದ್ರಾವತಿ: ಗ್ರಾಮೀಣ ಪ್ರದೇಶಗಳಲ್ಲಿ ಎನ್‌ಆರ್‌ಐಜಿ ಯೋಜನೆಯಡಿ ಕರ್ತವ್ಯ ನಿರ್ವಹಿಸುತ್ತಿರುವ ಕಾರ್ಮಿಕರು, ಉದ್ಯೋಗಖಾತ್ರಿ ಯೋಜನೆಯ ಕಾರ್ಮಿಕರು ಹಾಗೂ ಕಟ್ಟಡ ಕಾರ್ಮಿಕರಿಗೆ ಕಾರ್ಮಿಕ ಇಲಾಖೆಯಿಂದ ಸ್ಮಾರ್ಟ್ ಕಾರ್ಡುಗಳನ್ನು ನೀಡಲಾಗುವುದು ಎಂದು ಕಾರ್ಮಿಕ ನಿರೀಕ್ಷಕ ಭೀಮೇಶ್ ಹೇಳಿದರು.
ನ್ಯೂಟೌನ್ ರೋಟರಿ ಸಭಾಂಗಣದಲ್ಲಿ ಕಾರ್ಮಿಕ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ, ರೋಟರಿ ಕ್ಲಬ್, ಆರೋಗ್ಯ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಆಶ್ರಯದಲ್ಲಿ ಏರ್ಪಡಿಸಿದ್ದ ಬಾಲ್ಯಾವಸ್ಥೆಯ ಹಾಗೂ ಕಿಶೋರಾವ್ಯಸ್ಥೆ ಕಾರ್ಮಿಕ ಪದ್ದತಿ ನಿರ್ಮೂಲನಗಾಗಿ ಅಂಗನವಾಡಿ ಕಾರ್ಯಕರ್ತೆಯರಿಗೆ, ಆಶಾ ಕಾರ್ಯಕರ್ತೆಯರಿಗೆ ಹಾಗೂ ಕಟ್ಟಡ ಕಾರ್ಮಿಕ ಸಂಘದ ಪದಾಧಿಕಾರಿಗಳಿಗೆ ಹಾಗೂ ಫಲಾನುಭವಿಗಳಿಗೆ ಕಾನೂನು ಅರಿವು ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಪ್ರತಿಹಂತದಲ್ಲಿ ಕಾರ್ಮಿಕ ಇಲಾಖೆಯ ಬಾಲ ಕಾರ್ಮಿಕ ಪದ್ದತಿಯನ್ನು ಹೋಗಲಾಡಿಸುವ ಪ್ರಯತ್ನ ಮಾಡುತ್ತಿದೆ. ಕಟ್ಟಡ ಕಾರ್ಮಿಕರು ಸೇರಿದಂತೆ ವಿವಿಧ ಫಲಾನುಭವಿಗಳಿಗೆ 2007 ರಲ್ಲಿ ಆರಂಭವಾಗಿರುವ ಯೋಜನೆಗಳು ನಿಜವಾದ ಫಲಾನುಭವಿಗಳಿಗೆ ದಕ್ಕುವಂತಾಗಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಎನ್‌ಆರ್‌ಐಜಿ ಯೋಜನೆಯಡಿ ಕರ್ತವ್ಯ ನಿರ್ವಹಿಸುತ್ತಿರುವ ಕಾರ್ಮಿಕರು, ಉದ್ಯೋಗಖಾತ್ರಿ ಯೋಜನೆಯ ಕಾರ್ಮಿಕರು ಹಾಗೂ ಕಟ್ಟಡ ಕಾರ್ಮಿಕರಿಗೆ ಕಾರ್ಮಿಕ ಇಲಾಖೆಯಿಂದ ಸ್ಮಾರ್ಟ್ ಕಾರ್ಡುಗಳನ್ನು ನೀಡಲಾಗುವುದು. ಓರ್ವ ವ್ಯಕ್ತಿಯು 90 ದಿನಗಳ ಕಾಲ ಕಟ್ಟಡಕಾರ್ಮಿಕನಾಗಿ ಸೇವೆ ಸಲ್ಲಿಸಿದ್ದಲ್ಲಿ ಈ ಕಾರ್ಡನ್ನು ಪಡೆಯಲು ಅರ್ಹನಾಗಿರುತ್ತಾನೆ. ಕಡ್ಡಾಯವಾಗಿ ಕಾರ್ಮಿಕ ಇಲಾಖೆಯಲ್ಲಿ ನೋಂದಾವಣಿ ಮಾಡಿಸಿರುವ ಕಾರ್ಮಿಕರಿಗೆ ಸರಕಾರದಿಂದ ಅನೇಕ ಯೋಜನೆಗಳಿವೆ ಎಂದರು.
ಈಗಾಗಲೆ ಇಲಾಖೆಯಿಂದ ಅರ್ಹ ಕಾರ್ಮಿಕರಿಗೆ 6 ಸಾವಿರ ಗುರುತಿನ ಚೀಟಿಗಳನ್ನು ವಿತರಿಸಲಾಗಿದೆ. ಗುರುತಿನ ಪತ್ರ ನವೀಕರಣ ಮಾಡದೆ ಇರುವವರು ನವೀಕರಿಸುವಂತೆ ತಿಳಿಸಿದ ಅವರು ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ ಪಿಎಫ್ ಜಾರಿಗೊಳಿಸಿರುವ ಖಾಸಗೀ ಸಂಸ್ಥೆಗಳಲ್ಲಿ ಪರಿಶಿಷ್ಟ ಜಾತಿ ಹಾಗು ಪಂಗಡಗಳ ಫಲಾನುಭವಿಗಳಿಗೆ ಸರಕಾರ ಹಣ ತುಂಬುವ ವ್ಯವಸ್ಥೆ ಕಲ್ಪಿಸಿದೆ. ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಲು ಮುಂದಾಗಬೇಕೆಂದು ಕರೆ ನೀಡಿದರು.
ರೋಟರಿ ಕ್ಲಬ್ ಅಧ್ಯಕ್ಷ ಡಿ.ಕೆ.ರಾಘವೇಂದ್ರರಾವ್ ಮಾತನಾಡಿ, ಅಂತರರಾಷ್ಟಿಯ ಸಂಸ್ಥೆಯಾಗಿರುವ ರೋಟರಿ ಸಂಸ್ಥೆಯು ಸ್ವಯಂ ಸೇವೆಗೆ ಸದಾ ಮೀಸಲಿದ್ದು ಸರಕಾರಗಳ ಯೋಜನೆಗಳಿಗೂ ಸಹಕಾರ ನೀಡಲಿದೆ ಎಂದರು.
ಸಿಡಿಪಿಓ ಸುರೇಶ್ ಮಾತನಾಡಿ, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರಿಗೆ ಶಿಬಿರಗಳ ಮೂಲಕ ಅರಿವು ಮೂಡಿಸಲಾಗುತ್ತಿದ್ದು ಗ್ರಾಮೀಣ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸುವಂತಾಗಬೇಕು. ಬಾಲ ಕಾರ್ಮಿಕರನ್ನು ಗುರುತಿಸಿ ಅಂತಹ ಮಕ್ಕಳನ್ನು ಶಾಲೆಗೆ ಸೇರಿಸುವ ಕೆಲಸಕ್ಕೆ ಮಂದಾಗಬೇಕು. ಬಾಲ ಕಾರ್ಮಿಕರು ಕಂಡು ಬಂದಲ್ಲಿ 1098 ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡುವಂತೆ ತಿಳಿಸಿದರು.
ಕಟ್ಟಡ ಕಾರ್ಮಿಕರ ಸಂಘದ ಕಾರ್ಯಾಧ್ಯಕ್ಷ ಸುಂದರ್ ಬಾಬು ಮಾತನಾಡಿದರು. ಶಿವಮೊಗ್ಗ 1 ನೇ ವೃತ್ತ ಕಾರ್ಮಿಕ ನಿರೀಕ್ಷಕ ಶಿವಕುಮಾರ್ ಬಾಲ್ಯಾವಸ್ಥೆಯ ಹಾಗೂ ಕಿಶೋರಾವ್ಯಸ್ಥೆ ಕಾರ್ಮಿಕ ಕಾಯ್ದೆ 1986 ಹಾಗೂ ತಿದ್ದು ಪಡಿ ಕಾಯ್ದೆ 2016 ವಿಷಯದ ಕುರಿತು ಉಪನ್ಯಾಸ ನೀಡಿದರು. ವೇದಿಕೆಯಲ್ಲಿ ಆರೋಗ್ಯ ಇಲಾಖೆ ನೌಕರರ ಸಂಘದ ಅಧ್ಯಕ್ಷ ನೀಲೇಶ್ ರಾಜ್, ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ನಾಗರಾಜ್, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ನಿರ್ದೇಶಕ ಎ.ಎಸ್.ರಘುನಾಥ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.
(ವರದಿ: ಆರ್.ವಿ. ಕೃಷ್ಣ, ಭದ್ರಾವತಿ)
Discussion about this post