ಕಲ್ಪ ಮೀಡಿಯಾ ಹೌಸ್ | ಬೀದರ್ |
ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಬೆಮ್ಮಳಖೇಡ ಬಳಿ ಟ್ರಕ್ ಮತ್ತು ಆಟೋ ನಡುವೆ ಮುಖಾಮುಖಿ ಡಿಕ್ಕಿಯಾಗಿ 7 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಘಟನೆಯಲ್ಲಿ ಪ್ರಭಾವತಿ (36), ಯಾದಮ್ಮ(40), ಗುಂಡಮ್ಮ(52), ಜಕ್ಕಮ್ಮ(32) ಹಾಗೂ ರುಕ್ಮಿಣಿ(60) ಮೃತಪಟ್ಟಿದ್ದು, ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಬೀದರ್, ಮನ್ನಾಖೇಳಿ ಆಸ್ಪತ್ರೆಗಳಲ್ಲಿ ದಾಖಲಾಗಿದ್ದವರ ಪೈಕಿ ಇಬ್ಬರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಮೃತರು ಮತ್ತು ಗಾಯಾಳುಗಳು ಉಡಮನಳ್ಳಿ ಗ್ರಾಮಸ್ಥರಾಗಿದ್ದು, ಕೂಲಿ ಕೆಲಸ ಮುಗಿಸಿಕೊಂಡು ಸ್ವಗ್ರಾಮಕ್ಕೆ ಆಟೋದಲ್ಲಿ ವಾಪಸಾಗುತ್ತಿದ್ದಾಗ ಬೆಮಳಖೇಡಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
ಶಾಸಕ ಬಂಡೆಪ್ಪ ಖಾಶೆಂಪುರ್ ಸಂತಾಪ
ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಾಳುಗಳು ಆದಷ್ಟು ಬೇಗ ಗುಣಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಈ ಘಟನೆ ಕುರಿತು ಈಗಾಗಲೇ ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದ್ದೇನೆ. ಆದಷ್ಟು ಬೇಗ ರಾಜ್ಯ ಸರ್ಕಾರದಿಂದ ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಮತ್ತು ಗಾಯಗೊಂಡವರಿಗೆ ಉತ್ತಮ ಚಿಕಿತ್ಸೆ ಒದಗಿಸಿ ಕೊಡಬೇಕು ಎಂದು ಒತ್ತಾಯಿಸಿದ್ದೇನೆ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post