ಕಲ್ಪ ಮೀಡಿಯಾ ಹೌಸ್ | ಬೀದರ್ |
ಜಿಲ್ಲೆಯ ಹುಮನಾಬಾದ್ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿರುವ ಸಿಎಂ ಫೈಜ್ ರವರ ಪರ ಹುಮನಾಬಾದ್ ವಿಧಾನಸಭಾ ಕ್ಷೇತ್ರದ ಯರಂಡಿ, ಹಳೆಯರಂಡಿ, ದಾಸರವಾಡಿ, ಧನಗಾರವಾಡಿ, ರೋಳಾ, ನೀರಗುಡಿ, ರಾಜೇಶ್ವರ, ನಿಂಬೂರ, ಬೆಳಕೇರಾ ಸೇರಿದಂತೆ ವಿವಿಧೆಡೆ ಶುಕ್ರವಾರ ಬೆಳಗ್ಗೆ ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ಕ್ಷೇತ್ರದ ಶಾಸಕರು, ಜೆಡಿಎಸ್ ಅಭ್ಯರ್ಥಿಯಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಮತಯಾಚನೆ ನಡೆಸಿದರು.
ಈ ವೇಳೆ ಮಾತನಾಡಿದ ಶಾಸಕ ಬಂಡೆಪ್ಪ ಖಾಶೆಂಪುರ್ ರವರು, ಸಿಎಂ ಫೈಜ್ ರವರು ಹುಮನಾಬಾದ್ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿದ್ದಾರೆ. ಅವರು ಉತ್ಸಾಹಿ ಯುವನಾಯಕರಾಗಿದ್ದಾರೆ. ಈಗಾಗಲೇ ಅವರು ಕ್ಷೇತ್ರ ಸಂಚಾರ ನಡೆಸಿ ಕ್ಷೇತ್ರದ ಜನರ ಸಮಸ್ಯೆಗಳ ಬಗ್ಗೆ ತಿಳಿದುಕೊಂಡಿದ್ದಾರೆ. ಕ್ಷೇತ್ರದ ಜನರು ಸಿಎಂ ಫೈಜ್ ರವರಿಗೆ ಬೆಂಬಲ ನೀಡಬೇಕು. ಅವರನ್ನು ಗೆಲ್ಲಿಸಿ ತರುವ ಕೆಲಸ ಮಾಡಬೇಕೆಂದು ಮನವಿ ಮಾಡಿದರು.
ಜೆಡಿಎಸ್ ಪಕ್ಷ ನಾಡಿನ ಜನರ ಒಳಿತಿಗಾಗಿ ಅನೇಕ ಮಹತ್ವದ ಯೋಜನೆಗಳನ್ನು, ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ನಮ್ಮ ಪ್ರಣಾಳಿಕೆಯಲ್ಲಿ ಕೂಡ ಅನೇಕ ಮಹತ್ವದ ಯೋಜನೆಗಳ ಬಗ್ಗೆ ತಿಳಿಸಿದ್ದೇವೆ. ತಾವೆಲ್ಲರೂ ಜೆಡಿಎಸ್ ಪಕ್ಷವನ್ನು ಬೆಂಬಲಿಸಬೇಕು. ನಾಡಿನ ಒಳಿತಿಗಾಗಿ ಜೆಡಿಎಸ್ ಸರ್ಕಾರ ರಚನೆಗೆ ಸಹಕರಿಸಬೇಕೆಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಮನವಿ ಮಾಡಿದರು.
ಹುಮನಾಬಾದ್ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಿಎಂ ಫೈಜ್ ರವರು ಮಾತನಾಡಿ, ಈ ಬಾರಿಯ ಚುನಾವಣೆಯಲ್ಲಿ ನನಗೆ ಅತ್ಯಂತ ಹೆಚ್ಚಿನ ಬಹುಮತ ನೀಡಿ ಗೆಲ್ಲಿಸಿ ಎಂದು ಮತದಾರರಲ್ಲಿ ಮನವಿ ಮಾಡಿದರು. ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಅನೇಕರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post