ಕಲ್ಪ ಮೀಡಿಯಾ ಹೌಸ್ | ಬೀದರ್ |
ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಮಠಾಣಾ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಪದವಿ ಪೂರ್ವ ಕಾಲೇಜು ಮತ್ತು ಸರ್ಕಾರಿ ಪ್ರೌಢ ಶಾಲೆಗಳಲ್ಲಿ 15 ರಿಂದ 18 ವರ್ಷದೊಳಗಿನ ಮಕ್ಕಳಿಗಾಗಿ ಹಮ್ಮಿಕೊಂಡಿದ್ದ ಕೋವಿಡ್ – 19 ಲಸಿಕಾಕರಣ (ಲಸಿಕಾಮೇಳ) ಕಾರ್ಯಕ್ರಮಕ್ಕೆ ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯರಾಗಿರುವ ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಚಾಲನೆ ನೀಡಿದರು.
ಕಮಠಾಣಾ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಪದವಿ ಪೂರ್ವ ಕಾಲೇಜು ಮತ್ತು ಸರ್ಕಾರಿ ಪ್ರೌಢ ಶಾಲೆಗಳಿಗೆ ಸೋಮವಾರ ಭೇಟಿ ನೀಡಿ, ಲಸಿಕಾಮೇಳಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೊರೊನಾ ಮಹಾಮಾರಿಯ ಅಲೆ ಇನ್ನೂ ಮುಂದುವರೆದಿದೆ. ಮೊದಲನೇ ಅಲೆ, ಎರಡನೇ ಅಲೆ ನೋಡಿದ್ದಿವಿ. ಅನೇಕ ಸಾವು ನೋವುಗಳನ್ನು ಕಂಡಿದ್ದಿವಿ. ಈಗ ಮೂರನೇ ಅಲೆಯ ಆತಂಕ ಸೃಷ್ಟಿಯಾಗಿದೆ.
130 ಕೋಟಿಗಿಂತಲೂ ಹೆಚ್ಚಿನ ಜನಸಂಖ್ಯೆ ಇರುವ ಈ ದೇಶದಲ್ಲಿ 105 ಕೋಟಿಗೂ ಹೆಚ್ಚಿನ ಜನರಿಗೆ ಕೋವಿಡ್ – 19 ಲಸಿಕೆ ನೀಡಿರುವುದು ಒಳ್ಳೆಯ ಬೆಳವಣಿಗೆಯಾಗಿದೆ. ವೈದ್ಯರು, ನರ್ಸ್ ಗಳು, ಆಶಾ ಕಾರ್ಯಕರ್ತೆಯರು, ಪೊಲೀಸರು ಸೇರಿದಂತೆ ಅನೇಕ ಫ್ರೇಂಟ್ ಲೈನ್ ವರ್ಕರ್ಸ್ ಗಳು ಬಹಳಷ್ಟು ಶ್ರಮ ಪಟ್ಟಿದ್ದಾರೆ. ಈಗ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ನೀಡುವ ಕೆಲಸ ಆರಂಭವಾಗಿದೆ. 15 ರಿಂದ 18 ವರ್ಷದೊಳಗಿನ ಎಲ್ಲಾ ಮಕ್ಕಳು ವ್ಯಾಕ್ಸಿನ್ ಪಡೆದುಕೊಳ್ಳಬೇಕು ಎಂದರು.
ಡಾ. ಬಿ.ಆರ್ ಅಂಬೇಡ್ಕರ್ ರವರು ನಮಗೆ ಅತ್ಯುತ್ತಮ ಸಂವಿಧಾನ ನೀಡಿದ್ದಾರೆ. ಡಾಕ್ಟರ್, ಇಂಜಿನಿಯರ್, ಐಎಎಸ್, ಐಪಿಎಸ್ ಅಧಿಕಾರಿಗಳಾಗುವ ಕಡೆಗೆ ಹಾಗೂ ಓದಿ, ಬರೆದು ಒಳ್ಳೆಯ ವಿದ್ಯಾವಂತರಾಗಿ ದೇಶ ಸೇವೆ ಮಾಡುವ ಕಡೆಗೆ ವಿದ್ಯಾರ್ಥಿಗಳು ಗಮನ ಹರಿಸಬೇಕು. 12ನೇ ಶತಮಾನದಲ್ಲಿ ಬಸವಣ್ಣನವರು ಸಾಮಾಜಿಕ ಕ್ರಾಂತಿ ಮಾಡಿದ್ದರು. 21ನೇ ಶತಮಾನದಲ್ಲಿರುವ ನಾವು ಈಗ ಶಿಕ್ಷಣ ಕ್ರಾಂತಿ ಮಾಡಬೇಕಾಗಿದೆ. ಹಿಂದಿನ ಕಾಲದಲ್ಲಿ ಶಿಕ್ಷಣಕ್ಕೆ ಅಷ್ಟೊಂದು ಮಹತ್ವ ಕೊಟ್ಟಿರಲಿಲ್ಲ. ಈಗ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವ ಕೆಲಸವಾಗಬೇಕಾಗಿದೆ.
ನಾನು ಈ ಹಿಂದೆ ಸಚಿವನಾಗಿದ್ದಾಗ ದೆಹಲಿಗೆ ಹೋಗಿ ಅಲ್ಲಿನ ಶಿಕ್ಷಣ ವ್ಯವಸ್ಥೆಯನ್ನು ನೋಡಿಕೊಂಡು ಬಂದಿದ್ದೆ. ನಮ್ಮಲ್ಲಿನ ಶಿಕ್ಷಣದ ಸುಧಾರಣೆಯ ದೃಷ್ಟಿಯಿಂದ ಮಾದರಿ ಶಾಲೆ ನಿರ್ಮಾಣಕ್ಕಾಗಿ ಕಮಠಾಣಾ ಗ್ರಾಮಕ್ಕೆ ಮೂರು ಕೋಟಿ ರೂ. ಅನುದಾನ ನೀಡಿದ್ದೇನೆ. ನನ್ನ ಕ್ಷೇತ್ರದಲ್ಲಿ ಮೊದಲಿನಿಂದಲೂ ನಾನು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದೇನೆ. ಮುಂದೆಯೂ ಕೂಡ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುತ್ತೇನೆಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು.
ಇದೇ ವೇಳೆ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನ ಸ್ಮಾರ್ಟ್ ಕ್ಲಾಸ್ ರೂಮ್ ಮತ್ತು ಗ್ರಂಥಾಲಯವನ್ನು ಉದ್ಘಾಟಿಸಿದರು. ಗ್ರಾಮದಲ್ಲಿ 3 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಮಾದರಿ ಶಾಲೆಯ ಕಟ್ಟಡ ಕಾಮಗಾರಿಯ ಪರಿಶೀಲನೆ ನಡೆಸಿದರು. ಶಾಲೆಯ ವಿವಿಧ ತರಗತಿಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳನ್ನು ಮಾತನಾಡಿಸಿದರು.
ಈ ಸಂದರ್ಭದಲ್ಲಿ ಬೀದರ್ ತಹಶೀಲ್ದಾರ್ ಅಣ್ಣರಾವ್ ಪಾಟೀಲ್, ಟಿಹೆಚ್‌ಒ ಸಂಗರೆಡ್ಡಿ, ಬಿಇಒ ಸೂರ್ಯಕಾಂತ್ ಮದನೆ, ತಾಲೂಕು ಪಂಚಾಯ್ತಿ ಇಒ ಗದಿಗೆಪ್ಪ ಕುರಕುಂಟೆ, ಎಇಇ ಭಗವಾನ್ ಸಿಂಗ್, ಪಿಡಿಒ ಸವಿತಾ ಹಿರೇಮಠ, ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮುಖ್ಯೋಪಾಧ್ಯಯ ರವೀಂದ್ರನಾಥ ಚಟ್ಟನಳ್ಳಿ, ಪಾರುಕ್, ವಿಜಯಕುಮಾರ್, ಶಿಕ್ಷಕರು, ಸಿಬ್ಬಂದಿಗಳು, ವೈದ್ಯಾಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಮುಖಂಡರು ಸೇರಿದಂತೆ ಅನೇಕರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post