ನವದೆಹಲಿ: ಜಮ್ಮು ಕಾಶ್ಮೀರಕ್ಕೆ ಸಂಬಂಧಿಸಿದಂತೆ ಆರ್ಟಿಕಲ್ 370 ಹಾಗೂ 35ಎ ವಿಧಿಯನ್ನು ಭಾರತ ಸರ್ಕಾರ ರದ್ದು ಮಾಡಿರುವ ಹಿನ್ನೆಲೆಯಲ್ಲಿ ಸೇಡು ತೀರಿಸಿಕೊಳ್ಳಲು ದೇಶದ ಹಲವು ಕಡೆಗಳಲ್ಲಿ ಭಾರೀ ಪ್ರಮಾಣದಲ್ಲಿ ಸರಣಿ ವಿಧ್ವಂಸಕ ಕೃತ್ಯಗಳನ್ನು ನಡೆಸಲು ಜೈಷ್ ಎ ಮೊಹಮದ್ ಉಗ್ರ ಸಂಘಟನೆ ಸಂಚು ರೂಪಿಸಿದೆ ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದಿದೆ.
ಈ ಕುರಿತಂತೆ ರಾಷ್ಟ್ರೀಯ ಮಾಧ್ಯಮವೊಂದು ವರದಿ ಮಾಡಿದ್ದು, ಜಮ್ಮು ಕಾಶ್ಮೀರ ಸೇರಿದಂತೆ ಕನಿಷ್ಠ ಏಳು ರಾಜ್ಯಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಭಯೋತ್ಪಾದಕ ದಾಳಿಗಳನ್ನು ನಡೆಸುವ ಮೂಲಕ ಸೇಡು ತೀರಿಸಿಕೊಳ್ಳಲು ಜೈಷ್ ಸಂಘಟನೆ ಮುಂದಾಗಿದೆ ಎಂದು ವರದಿಯಾಗಿದೆ.
ಪುಲ್ವಾಮಾದಲ್ಲಿ ನಡೆದ ಭೀಕರ ದಾಳಿಯ ಮಾದರಿಯಲ್ಲೇ ಮತ್ತೆ ಕನಿಷ್ಠ ಏಳು ರಾಜ್ಯಗಳಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದಾರೆ ಎನ್ನಲಾಗಿದ್ದು, ಪಾಕ್ ಮಾಜಿ ಮುಖ್ಯಸ್ಥ ಪರ್ವೇಜ್ ಮುಷರಫ್ ಸಹ ಇದೇ ಹೇಳಿಕೆಯನ್ನು ನೀಡಿರುವ ಎಚ್ಚರಿಕೆ ಗಂಭೀರತೆಯನ್ನು ಸೂಚಿಸಿದೆ.
ಈ ಹಿನ್ನೆಲೆಯಲ್ಲಿ ರಾಷ್ಟ್ರದ ಎಲ್ಲ ರಾಜ್ಯಗಳಲ್ಲಿ ಹೈಅಲರ್ಟ್ ಘೋಷಣೆ ಮಾಡಲಾಗಿದ್ದು, ಪ್ರಮುಖವಾಗಿ ಉತ್ತರ ಭಾರತದ ರಾಜ್ಯಗಳಲ್ಲಿ ಕಟ್ಟೆಚ್ಚರಕ್ಕೆ ಸೂಚನೆ ನೀಡಲಾಗಿದೆ.
ಉನ್ನತ ಮೂಲಗಳ ಮಾಹಿತಿಯನ್ವಯ ಜಮ್ಮು ಕಾಶ್ಮೀರ, ನವದೆಹಲಿ, ರಾಜಾಸ್ಥಾನ, ಪಂಜಾಬ್, ಗುಜರಾತ್, ಮಹಾರಾಷ್ಟ್ರ, ಕರ್ನಾಟಕ ಹಾಗೂ ಆಂಧ್ರಪ್ರದೇಶಗಳಲ್ಲಿ ಜೈಷ್ ಉಗ್ರರು ಟಾರ್ಗೆಟ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
Discussion about this post