ನವದೆಹಲಿ: ರಾಜ್ಯದಲ್ಲಿ ಘೋಷಣೆಯಾಗಿದ್ದ 15 ಕ್ಷೇತ್ರಗಳ ಉಪಚುನಾವಣೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು, ಈ ಮೂಲಕ ಅನರ್ಹ ಶಾಸಕರಿಗೆ ತಾತ್ಕಾಲಿಕವಾಗಿ ರಿಲೀಫ್ ದೊರೆತಿದೆ.
ಈ ಕುರಿತಂತೆ ಇಂದು ವಿಚಾರಣೆ ನಡೆಸಿದ ನ್ಯಾಯಾಲಯ ಪ್ರಕರಣದಲ್ಲಿ ಸುಧೀರ್ಘ ವಿಚಾರಣೆಯ ಅಗತ್ಯವಿದೆ. ಹೀಗಾಗಿ, ಮುಂದಿನ ಆದೇಶ ನೀಡುವವರೆಗೂ ಯಾವುದೇ ಕಾರಣಕ್ಕೂ ಈ 15 ಕ್ಷೇತ್ರಗಳಿಗೆ ಉಪಚುನಾವಣೆ ನಡೆಸುವಂತಿಲ್ಲ ಎಂದು ಸೂಚಿಸಿದೆ. ಅಕ್ಟೋಬರ್ 22ರ ನಂತರ ಅನರ್ಹ ಶಾಸಕರ ಪ್ರಕರಣದ ವಿಚಾರಣೆ ನಡೆಸುವುದಾಗಿ ತಿಳಿಸಿದೆ.
ಬುಧವಾರ ಅನರ್ಹ ಶಾಸಕರ ಅರ್ಜಿಯ ವಿಚಾರಣೆ ನಡೆದಿತ್ತು. ಅನರ್ಹ ಶಾಸಕರ ಪರವಾಗಿ ಹಿರಿಯ ವಕೀಲ ಮುಕುಲ್ ರೋಹ್ಟಗಿ, ಸ್ಪೀಕರ್ ಕಚೇರಿ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಅನರ್ಹ ಶಾಸಕರ ಡಾ.ಸುಧಾಕರ್ ಪರ ವಕೀಲ ಸುಂದರಂ ವಾದ ಮಂಡಿಸಿದ್ದರು. ಇಂದು ಮುಂದುವರೆದ ವಿಚಾರಣೆಯಲ್ಲಿ ಕಾಂಗ್ರೆಸ್ ಪರ ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಿದ್ದರು.
ಇನ್ನು ಆದೇಶ ಕುರಿತಂತೆ ಮಾತನಾಡಿದ ಅನರ್ಹ ಕಾಂಗ್ರೆಸ್ ಶಾಸಕ ಮುನಿರತ್ನ, ನ್ಯಾಯಾಲಯದಲ್ಲಿ ಜಯ ಸಿಗುವ ವಿಶ್ವಾಸವಿದೆ. ಉಪಚುನಾವಣೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿ, ಪ್ರಕರಣದ ಬಗ್ಗೆ ವ್ಯಾಪಕ ವಿಚಾರಣೆ ನಡೆಸುವ ಅಗತ್ಯವಿದೆ ಎಂದು ನ್ಯಾಯಪೀಠ ಅಭಿಪ್ರಾಯ ವ್ಯಕ್ತಪಡಿಸಿದೆ. ಸ್ಪೀಕರ್ ಉದ್ದೇಶಪೂರ್ವಕವಾಗಿ ನಮ್ಮನ್ನು ಅನರ್ಹಗೊಳಿಸಿದ್ದಾರೆ. ನ್ಯಾಯಾಲಯದಲ್ಲಿ ನಮಗೆ ನ್ಯಾಯ ಸಿಗಲಿದೆ. ಸ್ಪೀಕರ್ ಕಾಂಗ್ರೆಸ್ ಪಕ್ಷದ ಪರವಾಗಿ ತೀರ್ಪು ಕೊಟ್ಟಿದ್ದಾರೆ ಹೊರತು ನ್ಯಾಯಯುತ ತೀರ್ಪು ನೀಡಿಲ್ಲ ಎಂದರು.
Discussion about this post