ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕನ್ನಡದ ಖ್ಯಾತ ಸುಗಮ ಸಂಗೀತ ಗಾಯಕ, ರಾಷ್ಟ್ರ ಪ್ರಶಸ್ತಿ ವಿಜೇತರಾದ ಶಿವಮೊಗ್ಗ ಸುಬ್ಬಣ್ಣ(83) ವಿಧಿವಶರಾಗಿದ್ದಾರೆ.
ತೀವ್ರ ಹೃದಯಾಘಾತಕ್ಕೆ ಒಳಗಾಗಿದ್ದ ಸುಬ್ಬಣ್ಣ ಅವರು ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಸುಬ್ಬಣ್ಣ ಅವರ ನಿಜ ನಾಮಧೇಯ ಜಿ.ಸುಬ್ರಹ್ಮಣ್ಯಂ. ಶ್ರೀ ಗಣೇಶ್ ರಾವ್ ಹಾಗೂ ರಂಗನಾಯಕಮ್ಮನವರ ಪುತ್ರರಾದ ಸುಬ್ಬಣ್ಣ, ಶಿವಮೊಗ್ಗ ಜಿಲ್ಲೆಯ ನಗರ ಗ್ರಾಮದಲ್ಲಿ 1938ರಲ್ಲಿ ಜನಿಸಿದವರು. ಮನೆಯಲ್ಲಿ ಪ್ರತಿದಿನ ಪೂಜೆ, ಪುರಸ್ಕಾರ, ವೇದ ಮಂತ್ರಗಳ ಝೇಂಕಾರ ಕೇಳಿ ಬೆಳೆದವರು. ಇವರ ತಾತ ಶಾಮಣ್ಣನವರು ಸಂಗೀತದಲ್ಲಿ ಘನ ವಿದ್ವಾಂಸರು.
ಕನ್ನಡ ಗಾಯನ ಕ್ಷೇತ್ರದಲ್ಲಿ ತಮ್ಮನ್ನು ಗುರುತಿಸಿಕೊಂಡ ಸುಬ್ಬಣ್ಣ 1963ರಲ್ಲಿ ಆಕಾಶವಾಣಿಯ ಗಾಯಕರಾಗಿಯೂ ಆಯ್ಕೆಯಾದರು. ಸಿನಿಮಾ ರಂಗಕ್ಕೆ ಸುಬ್ಬಣ್ಣ ಹಿನ್ನೆಲೆ ಗಾಯಕರಾಗಿ ಚಿತ್ರರಂಗ ಪ್ರವೇಶಿಸಿದ್ದು ನಾಟಕಕಾರ, ಚಿತ್ರ ನಿರ್ದೇಶಕ ಕವಿ ಚಂದ್ರಶೇಖರ ಕಂಬಾರರ ‘ಕರಿಮಾಯಿ’ ಮೂಲಕ. 1979ರಲ್ಲಿ ಅಂದಿನ ರಾಷ್ಟ್ರಪತಿ ನೀಲಂ ಸಂಜೀವ ರೆಡ್ಡಿ ಅವರಿಂದ ರಜತಕಮಲ ಪ್ರಶಸ್ತಿ ಸ್ವೀಕರಿಸಿದ ಸುಬ್ಬಣ್ಣ ಯಶಸ್ಸಿನ ಕುದುರೆಯೇರಿ ನಡೆದರು.
ಆಕಾಶವಾಣಿ ಎಂಎಸ್’ಐಎಲ್ ಪ್ರಾಯೋಜಕತ್ವದಲ್ಲಿ ಪ್ರಸಾರ ಮಾಡಿದ ಜನಪ್ರಿಯ ಕಾರ್ಯಕ್ರಮದಲ್ಲಿ ‘ಕೋಡಗನ ಕೋಳಿ ನುಂಗಿತ್ತಾ..’, ‘ಅಳಬೇಡಾ ತಂಗಿ ಅಳಬೇಡ…’ ‘ಬಿದ್ದೀಯಬ್ಬೇ ಮುದುಕಿ..’ ಮೊದಲಾದ ಶಿಶುನಾಳ ಷರೀಫರ ಗೀತೆಗಳನ್ನು ಹಾಡಿದ ಸುಬ್ಬಣ್ಣ ಮನೆ ಮಾತಾದರು.
ಸುಬ್ಬಣ್ಣ ಅವರ ಕಾಡು ಕುದುರೆ ಓಡಿ ಬಂದಿತ್ತಾ ಹಾಡು ಪ್ರಖ್ಯಾತಿ ಪಡೆದಿತ್ತು. 1979ರಲ್ಲಿ ‘ಕಾಡು ಕುದುರೆ’ ಚಲನಚಿತ್ರಕ್ಕೆ ಕಾಡು ಕುದುರೆ ಓಡಿ ಬಂದಿತ್ತಾ ಹಾಡನ್ನು ಹಾಡಿದ್ದರು. ಇದೇ ಹಾಡಿಗೆ ಅತ್ಯುತ್ತಮ ಹಿನ್ನೆಲೆ ಗಾಯನಕ್ಕಾಗಿ ರಜತ ಕಮಲ ರಾಷ್ಟ್ರ ಪ್ರಶಸ್ತಿ ಅವರಿಗೆ ಒಲಿದಿತ್ತು. ಮುಖ್ಯವಾಗಿ ರಜತ ಕಮಲ ರಾಷ್ಟ್ರ ಪ್ರಶಸ್ತಿಗೆ ಭಾಜನರಾದ ಮೊದಲ ಕನ್ನಡಿಗ ಸುಬ್ಬಣ್ಣರಾಗಿದ್ದರು.
1985ರಲ್ಲಿ ರಾಜ್ಯೋತ್ಸವ ಪುರಸ್ಕಾರ, 1988ರಲ್ಲಿ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಪುರಸ್ಕಾರ, 1999ರಲ್ಲಿ ಸಂತ ಶಿಶುನಾಳ ಷರೀಫ ಪ್ರಶಸ್ತಿ ಲಭಿಸಿದ್ದು, 2008ರಲ್ಲಿ ಕುವೆಂಪು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿಯನ್ನು ಸುಬ್ಬಣ್ಣ ಪಡೆದಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post