ಹಿರಿಯೂರು: ಈ ಭಾಗದ ಜನರ ಬಹುದಿನಗಳ ಬೇಡಿಕೆಯಾದ ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಯನ್ನು ತ್ವರಿಗತಿಯಲ್ಲಿ ಪೂರ್ಣಗೊಳಿಸಿ ವಾಣಿ ವಿಲಾಸ ಸಾಗರಕ್ಕೆ ನೀರು ಹರಿಸುವ ಮೂಲಕ ಮತದಾರರ ಋಣ ತೀರುಸುತ್ತೇನೆ ಎಂದು ಚಿತ್ರದುರ್ಗ ಸಂಸದ ಎ. ನಾರಾಯಣಸ್ವಾಮಿ ಹೇಳಿದರು.
ನಗರದ ವಾಲ್ಮೀಕಿ ಭವನದಲ್ಲಿ ಭಾನುವಾರ ತಾಲೂಕು ಭಾರತೀಯ ಜನತಾ ಪಾರ್ಟಿ ವತಿಯಿಂದ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ನೂತನ ಸಂಸದರಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ವಿವಿ ಸಾಗರಕ್ಕೆ ನೀರು ಹರಿಸುವುದು ನನ್ನ ಮೊದಲ ಆದ್ಯತೆಯಾಗಿದ್ದು, ಈಗಾಗಲೇ ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಯನ್ನು ಖುದ್ದಾಗಿ ವೀಕ್ಷಣೆ ಮಾಡಿ ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಈ ಭಾಗದ ರೈತರು ಯಾವುದೇ ಕಾರಣಕ್ಕೂ ಸಂಕಷ್ಟಕ್ಕೆ ಒಳಗಾಗಲು ಬಿಡುವುದಿಲ್ಲ. ಅವರ ಋಣ ತೀರಿಸುವ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.
ದೇಶದಲ್ಲಿ ಮೋದಿಯವರು ಯಾವ ರೀತಿಯಲ್ಲಿ ಅಭಿವೃದ್ದಿ ಕಾರ್ಯಗಳನ್ನು ಮಾಡುತ್ತಾರೆಯೋ ಅದೇ ರೀತಿಯಲ್ಲಿ ಈ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ದಿ ಕಾರ್ಯಗಳನ್ನು ನಡೆಸಿ ಮಾದರಿ ಕ್ಷೇತ್ರವನ್ನಾಗಿ ಮಾಡುತ್ತೇನೆ ಎಂದರು.
ಶಾಸಕಿ ಕೆ. ಪೂರ್ಣಿಮಾ ಮಾತನಾಡಿ, ಕಳೆದ ಒಂದು ವರ್ಷದ ಅವಧಿಯಲ್ಲಿ ನಮ್ಮ ಪಕ್ಷ ಅಧಿಕಾರದಲ್ಲಿ ಇಲ್ಲದಿದ್ದರೂ ಸಾಕಷ್ಟು ಅನುದಾನ ತಂದು ಅಭಿವೃದ್ದಿ ಕಾರ್ಯಗಳಿಗೆ ಚಾಲನೆ ನೀಡಿದ್ದೇನೆ. ಅಲ್ಲದೇ ಕ್ಷೇತ್ರದ ಅಭಿವೃದ್ದಿ ಯಾವ್ಯಾವ ಕ್ಷೇತ್ರಗಳಿಗೆ ಅನುದಾನ ಅವಶ್ಯಕತೆಯಿದೆ ಎಂಬುದನ್ನು ಪಕ್ಷಾತೀತವಾಗಿ ಸಚಿವರೊಂದಿಗೆ ಚರ್ಚಿಸಿದ್ದೇನೆ. ಮುಂದಿನ ನಾಲ್ಕು ವರ್ಷಗಳಲ್ಲಿ ಜನರು ಇಟ್ಟಿರುವ ನೀರಿಕ್ಷೆಯಂತೆ ಕೆಲಸ ಮಾಡುತ್ತೇನೆ ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಎಸ್. ನವೀನ್ ಮಾತನಾಡಿ, ನಮ್ಮ ಪಕ್ಷವು ಕಾರ್ಯಕರ್ತರ ಆಧಾರಿತವಾದ ಪಕ್ಷವಾಗಿದ್ದು, ಮುನ್ನಡೆಸುವ ಹಾಗೂ ಸಂಘಟಿಸುವುದು ಕಾರ್ಯಕರ್ತರೇ ಹೊರತು ನಾಯಕರಲ್ಲ. ಇಂದು ನಾಯಕರಿಂದಲೇ ಪಕ್ಷ ನಡೆಯಬೇಕೆನ್ನುವ ಪಕ್ಷಗಳು ಅಧೋಗತಿ ತಲುಪಿವೆ. ಆದ್ದರಿಂದ ನಮ್ಮ ಪಕ್ಷದಲ್ಲಿ ಮಾತ್ರ ಸಮಾನ ಅವಕಾಶವಿದೆ ಎಂದರು.
ರಾಜ್ಯ ಒಬಿಸಿ ಮೋರ್ಚಾ ಉಪಾಧ್ಯಕ್ಷ ಡಿ.ಟಿ. ಶ್ರೀನಿವಾಸ ಮಾತನಾಡಿ, ಕ್ಷೇತ್ರದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಮಾಡಿಕೊಂಡು ಬಿಜೆಪಿಯನ್ನು ಕಟ್ಟಕಡೆಗೆ ಕಳುಹಿಸುತ್ತೇವೆ ಎಂದು ಹೇಳಿಕೊಳ್ಳುತ್ತಿದ್ದರು. ಆದರೆ ನಮ್ಮ ಕಾರ್ಯಕರ್ತರ ಸತತ ಹೋರಾಟದಿಂದ ಕ್ಷೇತ್ರದಲ್ಲಿ ಎರಡು ಪಕ್ಷ ಒಂದಾದರೂ ಬಿಜೆಪಿ ಅಭ್ಯರ್ಥಿಗೆ ಸುಮಾರು ಐದು ಸಾವಿರಕ್ಕೂ ಹೆಚ್ಚು ಮತಗಳನ್ನು ಗಳಿಸಿಕೊಟ್ಟಿದೆ ಎಂದರು.
ತಾಲೂಕು ಅಧ್ಯಕ್ಷ ದ್ಯಾಮೇಗೌಡ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕ ರಾಮಯ್ಯ, ರಾಜ್ಯ ಸ್ಲಂ ಮೋರ್ಚಾ ಉಪಾಧ್ಯಕ್ಷ ಸಿದ್ದೇಶ್ ಯಾದವ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುರುಳಿ, ಕಾಂತರಾಜ್, ಪ್ರಧಾನ ಕಾರ್ಯದರ್ಶಿ ಕೇಶವಮೂರ್ತಿ, ಮಾಜಿ ನಗರಸಭಾ ಸದಸ್ಯ ಜಿ. ಪ್ರೇಮ್’ಕುಮಾರ್, ರಾಜೇಶ್ವರಿ, ಮಹಲಿಂಗಪ್ಪ, ಮಂಜುನಾಥ್ ಇತರರು ಉಪಸ್ಥಿತರಿದ್ದರು.
(ವರದಿ: ಸುರೇಶ್ ಬೆಳಗೆರೆ, ಚಳ್ಳಕೆರೆ)
Discussion about this post