ಕಲ್ಪ ಮೀಡಿಯಾ ಹೌಸ್ | ಬಂಟ್ವಾಳ |
ಬಂಟ್ವಾಳದ ಬಿ.ಸಿ.ರೋಡ್ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ನಡೆದ ಯುವತಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧನದ ವೇಳೆ ಆರೋಪಿ ವಿಷ ಸೇವಿಸಿದ್ದರಿಂದ ಆತನನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.
ಹತ್ಯೆಗೀಡಾದ ಯುವತಿಯನ್ನು ಬಂಟ್ವಾಳ ತಾಲೂಕಿನ ಉಳಿ ಗ್ರಾಮದ ಲಾವಣ್ಯಾ (21) ಎಂದು ಗುರುತಿಸಲಾಗಿದೆ. ಪ್ರಕರಣದ ಆರೋಪಿ ಬೆಳ್ತಂಗಡಿ ತಾಲೂಕಿನ ಒಡಿಲ್ನಾಳ ನಿವಾಸಿ ಹಾಗೂ ಮೃತಳ ದೂರದ ಸಂಬಂಧಿಯಾಗಿರುವ ಚೇತನ್ (22) ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕುಮಾರ್ ತಿಳಿಸಿದ್ದಾರೆ.
ಶುಕ್ರವಾರ ಬೆಳಗ್ಗೆ ಮಂಗಳೂರಿನಲ್ಲಿ ಆರೋಪಿಯನ್ನು ಬಂಧಿಸಲಾಯಿತು. ಬಂಧನದ ವೇಳೆ ಆತ ಇಲಿ ಪಾಷಾಣ ಸೇವಿಸಿದ್ದರಿಂದ ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
Also read: ನಶೆಯಿಂದ ದೂರವಿದ್ದಾಗಲೆ ಅಭಿವೃದ್ಧಿ ರಾಷ್ಟ್ರ ನಿರ್ಮಾಣ ಸಾಧ್ಯ: ಎಸ್‌ಪಿ ನಿಖಿಲ್
ಪ್ರಾಥಮಿಕ ತನಿಖೆಯ ಪ್ರಕಾರ, ಆರೋಪಿ ಚೇತನ್ ಲಾವಣ್ಯಾಳನ್ನು ಏಕಪಕ್ಷೀಯವಾಗಿ ಪ್ರೀತಿಸುತ್ತಿದ್ದ ಎನ್ನಲಾಗಿದೆ. ಕಳೆದ ಎಂಟು ತಿಂಗಳಿಂದ ಕಲ್ಲಡ್ಕ ಸಮೀಪದ ಖಾಸಗಿ ಆಸ್ಪತ್ರೆಯಲ್ಲಿ ನರ್ಸಿಂಗ್ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಲಾವಣ್ಯಾ, ಗುರುವಾರ ಸಂಜೆ ಕರ್ತವ್ಯ ಮುಗಿಸಿ ಬಿ.ಸಿ.ರೋಡ್ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಬಂದಿದ್ದರು.
ಕಕ್ಯೆಪದವು ಕಡೆಗೆ ತೆರಳಲು ಬಸ್‌ನಲ್ಲಿ ಕುಳಿತಿದ್ದ ವೇಳೆ ಆರೋಪಿ ಅಲ್ಲಿಗೆ ಬಂದಿದ್ದಾನೆ. ಆತನನ್ನು ಕಂಡು ಆತಂಕಗೊಂಡ ಲಾವಣ್ಯಾ ಬಸ್‌ನಿಂದ ಇಳಿದು ತಪ್ಪಿಸಿಕೊಳ್ಳಲು ಯತ್ನಿಸಿದರೂ, ಬೆನ್ನಟ್ಟಿದ ಆರೋಪಿ ಕತ್ತಿಯಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ. ಘಟನೆಯ ವೇಳೆ ಮಧ್ಯಪ್ರವೇಶಿಸಲು ಮುಂದಾದ ಸಾರ್ವಜನಿಕರಿಗೂ ಬೆದರಿಕೆ ಹಾಕಿದ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಬಂಟ್ವಾಳ ನಗರ ಠಾಣೆ ಪೊಲೀಸರು ತ್ವರಿತ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಏಕಪಕ್ಷೀಯ ಪ್ರೀತಿಯೇ ಕೃತ್ಯಕ್ಕೆ ಕಾರಣ ಎಂಬ ಶಂಕೆ ವ್ಯಕ್ತವಾಗಿದ್ದು, ಪ್ರಕರಣದ ಎಲ್ಲ ಆಯಾಮಗಳಲ್ಲೂ ತನಿಖೆ ಮುಂದುವರೆದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 







