ಕಲ್ಪ ಮೀಡಿಯಾ ಹೌಸ್ | ಹೈದರಾಬಾದ್ |
ಹೈದರಾಬಾದ್’ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್’ವೊಂದು ಆಂಧ್ರಪ್ರದೇಶದ ಕರ್ನೂಲ್ ಹೆದ್ದಾರಿಯಲ್ಲಿ ಏಕಾಏಕಿ ಬೆಂಕಿ ಹೊತ್ತಿ ಉರಿದಿದ್ದು, ಕನಿಷ್ಠ 20 ಮಂದಿ ಸಜೀವವಾಗಿ ದಹನಗೊಂಡಿರುವ ದಾರುಣ ಘಟನೆ ನಡೆದಿದೆ.
ಕರ್ನೂಲು ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44 ರ ಚಿನ್ನತೇಕೂರು ಗ್ರಾಮದ ಬಳಿ ಈ ದುರಂತ ಸಂಭವಿಸಿದ್ದು, ಕನಿಷ್ಠ 20 ಮಂದಿ ಸಜೀವವಾಗಿ ದಹನಗೊಂಡು, ಹಲವು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಖಾಸಗಿ ಟ್ರಾವೆಲ್ ಬಸ್ ಬೆಂಕಿಗೆ ಆಹುತಿಯಾಗಿ ಹಲವರು ಗಾಯಗೊಂಡಿದ್ದಾರೆ.
ತುರ್ತು ನಿರ್ಗಮನ ಮತ್ತು ಕಿಟಕಿ ಗಾಜುಗಳನ್ನು ಒಡೆದು 12 ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾರಿಯಾಗಿದ್ದು, ಬೆಂಕಿಯ ಕೆನ್ನಾಲಿಗೆ ಹೆಚ್ಚಿದ್ದ ಕಾರಣ ಹಲವು ಮಂದಿ ಸಜೀವವಾಗಿ ದಹನಗೊಂಡಿದ್ದಾರೆ.

ಕಾವೇರಿ ಟ್ರಾವೆಲ್ಸ್ ನಿರ್ವಹಿಸುತ್ತಿದ್ದ ಈ ದುರದೃಷ್ಟಕರ ಬಸ್ ಹೈದರಾಬಾದ್’ನಿಂದ ಬೆಂಗಳೂರಿಗೆ ತೆರಳುತ್ತಿದ್ದಾಗ ಇಂದು ನಸುಕಿನ ಜಾವ 3:30 ರ ಸುಮಾರಿಗೆ ಚಿನ್ನತೇಕೂರು ಗ್ರಾಮದ ಬಳಿ ದ್ವಿಚಕ್ರ ವಾಹನವೊಂದು ಹಿಂದಿನಿಂದ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.
ಅಪಘಾತದ ಪರಿಣಾಮವಾಗಿ ಬೈಕ್ ವಾಹನದ ಕೆಳಗೆ ಸಿಲುಕಿಕೊಂಡಿದ್ದು, ಕೂಡಲೇ ಬೆಂಕಿ ಹತ್ತಿಕೊಂಡು ಇಡೀ ಬಸ್ಸನ್ನು ವ್ಯಾಪಿಸಿ ಕ್ಷಣಾರ್ಧದಲ್ಲಿ ಸುಟ್ಟು ಕರಕಲಾಗಿದೆ.
ಸ್ಲೀಪರ್ ಕೋಚ್ ಬಸ್ ಆಗಿದ್ದ ಕಾರಣ ಪ್ರಯಾಣಿಕರು ನಿದ್ದೆ ಮಾಡುತ್ತಿದ್ದರು. ಸಾಧಾರಣವಾಗಿ ವೋಲ್ವೋ ಬಸ್ಸಿನಲ್ಲಿ ಕಿಟಕಿಯ ಗಾಜುಗಳು ಸಂಪೂರ್ಣವಾಗಿ ಲಾಕ್ ಆಗಿರುತ್ತದೆ. ಹೀಗಿದ್ದರೂ ಬೆಂಕಿ ಕಾಣಿಸಿದ ಕೂಡಲೇ ಕೆಲ ಪ್ರಯಾಣಿಕರು ಗಾಜನ್ನು ಒಡೆದು ಕೆಳಗೆ ಹಾರಿ ಜೀವ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಪ್ರಧಾನಿ ಸಂತಾಪ, ಪರಿಹಾರ ಘೋಷಣೆ
ಇನ್ನು, ಈ ದುರಂತದ ಬಗ್ಗೆ ಸಂತಾಪ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ ಪ್ರಾಣ ಕಳೆದುಕೊಂಡಿರುವವರ ಕುಟುಂಬಕ್ಕೆ 2 ಲಕ್ಷ ರೂ. ಹಾಗೂ ಗಾಯಗೊಂಡಿರುವವರಿಗೆ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ. ಗಾಯಗೊಂಡವರು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಧಾನಿ ಹಾರೈಸಿದ್ದಾರೆ.
ಸಿಎಂ ನಾಯ್ಡು ಸಂತಾಪ
ಪ್ರಸ್ತುತ ದುಬೈಗೆ ಅಧಿಕೃತ ಭೇಟಿಯಲ್ಲಿರುವ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ದುರಂತದ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.
ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆದ ನಂತರ, ಅವರು ಮುಖ್ಯ ಕಾರ್ಯದರ್ಶಿಯೊಂದಿಗೆ ಚರ್ಚಿಸಿದರು. ಉನ್ನತ ಆಡಳಿತ ಸಿಬ್ಬಂದಿಗೆ ಅಪಘಾತ ಸ್ಥಳಕ್ಕೆ ಧಾವಿಸಿ ರಕ್ಷಣಾ ಮತ್ತು ಪರಿಹಾರ ಪ್ರಯತ್ನಗಳನ್ನು ನೋಡಿಕೊಳ್ಳಲು ನಿರ್ದೇಶನ ನೀಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post