ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕನ್ನಡ ನಾಡಿನ ಶ್ರೀಮಂತ ಜಾನಪದ ಕಲೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಕನ್ನಡ ರಾಜ್ಯೋತ್ಸವದ (Kannada Rajyothsava) ಅಂಗವಾಗಿ ಬಿ.ವಿ.ಎಂ. ಗ್ಲೋಬಲ್ ಶಾಲೆಯ (BVM Global School) ಎಲೆಕ್ಟ್ರಾನಿಕ್ ಸಿಟಿ ಕ್ಯಾಂಪಸ್ನಲ್ಲಿ ನವೆಂಬರ್ 1ರಂದು ವಿಶೇಷ ಜಾನಪದ ಕಲಾ ಪ್ರದರ್ಶನ ಕಾರ್ಯಕ್ರಮ ಆಯೋಜಿಸಲಾಗಿದೆ.
ಜಾನಪದ ನೃತ್ಯ, ಜಾನಪದ ಗಾಯನ ಸೇರಿದಂತೆ ವಿವಿಧ ಜನಪದ ಕಲಾಪ್ರಕಾರಗಳಲ್ಲಿ ತೊಡಗಿಸಿಕೊಂಡಿರುವ ಕಲಾವಿದರು ಹಾಗೂ ಕಲಾತಂಡಗಳಿಗೆ ತಮ್ಮ ಪ್ರತಿಭೆಯನ್ನು ಸಾರ್ವಜನಿಕವಾಗಿ ಪ್ರದರ್ಶಿಸಲು ಮುಕ್ತ ವೇದಿಕೆ ಕಲ್ಪಿಸಲಾಗಿದೆ. ವಿಶೇಷವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗೆ ಯಾವುದೇ ಪ್ರವೇಶ ಶುಲ್ಕವಿಲ್ಲ ಹಾಗೂ ವಯೋಮಿತಿಯ ನಿರ್ಬಂಧವೂ ಇಲ್ಲ ಎಂದು ಆಯೋಜಕರು ತಿಳಿಸಿದ್ದಾರೆ.
ಜಾನಪದ ಕಲೆಗಳ ಉಳಿವಿಗೆ ವೇದಿಕೆ
ಆಧುನಿಕತೆಯ ನಡುವೆ ನಾಡಿನ ಸಾಂಪ್ರದಾಯಿಕ ಕಲೆ, ಸಂಸ್ಕೃತಿ ಹಾಗೂ ಜನಪದ ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಅಗತ್ಯ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಜಾನಪದ ಕಲಾವಿದರನ್ನು ಪ್ರೋತ್ಸಾಹಿಸುವುದು, ಅವರ ಪ್ರತಿಭೆಗೆ ಸೂಕ್ತ ವೇದಿಕೆ ಒದಗಿಸುವುದು ಹಾಗೂ ಕಲಾವಿದರನ್ನು ಗೌರವಿಸುವ ಆಶಯದೊಂದಿಗೆ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಆಸಕ್ತ ಕಲಾವಿದರು ತಮ್ಮ ತಂಡಗಳೊಂದಿಗೆ ಆಗಮಿಸಿ ಕನ್ನಡ ನಾಡಿನ ವೈವಿಧ್ಯಮಯ ಜಾನಪದ ಕಲಾ ವೈಭವವನ್ನು ಅನಾವರಣಗೊಳಿಸಬಹುದಾಗಿದೆ. ರಾಜ್ಯದ ವಿವಿಧ ಭಾಗಗಳ ಜಾನಪದ ಕಲೆಗಳನ್ನು ಒಂದೇ ವೇದಿಕೆಯಲ್ಲಿ ಪರಿಚಯಿಸುವ ಮೂಲಕ ಕನ್ನಡದ ಸಾಂಸ್ಕೃತಿಕ ಸೊಗಡನ್ನು ಸಂಭ್ರಮಿಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ.
ಕಾರ್ಯಕ್ರಮದಲ್ಲಿ ಪರಿಸರ ಹೋರಾಟಗಾರ ಪರಿಸರ ಮಂಜು, ಪತ್ರಕರ್ತ, ಸಾಹಿತಿ ಹಾಗೂ ಸಂಸ್ಕೃತಿ ಚಿಂತಕ ಡಾ. ಗುರುರಾಜ ಪೋಶೆಟ್ಟಿಹಳ್ಳಿ, ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ದಲಿತ ಸಂಘರ್ಷ ಸಮಿತಿಯೊಂದಿಗೆ ಗುರುತಿಸಿಕೊಂಡಿರುವ ಅಬ್ದುಲ್ ಶಂಶು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
BVM Global School: ನವೆಂಬರ್ 1ರಂದು ಕಾರ್ಯಕ್ರಮ
ಕನ್ನಡ ರಾಜ್ಯೋತ್ಸವದ ದಿನವಾದ ನವೆಂಬರ್ 1, 2026ರ ಭಾನುವಾರ ಬೆಳಿಗ್ಗೆ 8.30ಕ್ಕೆ ಕಾರ್ಯಕ್ರಮ ಆರಂಭವಾಗಲಿದೆ. ಬೆಂಗಳೂರಿನ ದಕ್ಷಿಣ ಭಾಗದ ಹುಲ್ಲಹಳ್ಳಿಯಲ್ಲಿರುವ ಬಿ.ವಿ.ಎಂ. ಗ್ಲೋಬಲ್ ಶಾಲೆ, ಎಲೆಕ್ಟ್ರಾನಿಕ್ ಸಿಟಿ ಕ್ಯಾಂಪಸ್ನಲ್ಲಿ ಕಾರ್ಯಕ್ರಮ ನಡೆಯಲಿದೆ.
Also Read>> ಕುವೆಂಪು ವಿವಿಯಲ್ಲಿ ‘ಸಹಕಾರ ತತ್ವ’ ಚರ್ಚಾ ಸ್ಪರ್ಧೆ; ಸಹಕಾರ ಕ್ಷೇತ್ರದ ಮಹತ್ವದ ಕುರಿತು ವಿಚಾರ ಮಂಥನ
ಜಾನಪದ ಕಲೆಗಳಲ್ಲಿ ಆಸಕ್ತಿ ಹೊಂದಿರುವ ಕಲಾವಿದರು ಮತ್ತು ಕಲಾತಂಡಗಳು ಕಾರ್ಯಕ್ರಮದಲ್ಲಿ ಭಾಗವಹಿಸಲು ಮುಂಚಿತವಾಗಿ ನೋಂದಣಿ ಮಾಡಿಕೊಳ್ಳಬಹುದು. ನೋಂದಣಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಶಶಿಕಲಾ ಸಿ. – 9902845881 ಅವರನ್ನು ಸಂಪರ್ಕಿಸುವಂತೆ ಆಯೋಜಕರು ಕೋರಿದ್ದಾರೆ.
ಕನ್ನಡ ನಾಡಿನ ಏಕತೆ, ಸಂಸ್ಕೃತಿ ಮತ್ತು ಕಲಾ ಪರಂಪರೆಯನ್ನು ಗೌರವಿಸುವುದರೊಂದಿಗೆ ಜಾನಪದ ಕಲಾವಿದರಿಗೆ ಪ್ರೋತ್ಸಾಹ ನೀಡುವ ಈ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಲಾವಿದರು ಹಾಗೂ ಕಲಾಭಿಮಾನಿಗಳು ಪಾಲ್ಗೊಳ್ಳುವಂತೆ ಮನವಿ ಮಾಡಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










