ಬೆಂಗಳೂರು: ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾದ ಸತತ 26 ದಿನಗಳ ನಂತರ ಇಂದು ಸಂಪುಟ ವಿಸ್ತರಣೆಯಾಗಿದ್ದು, 17 ಮಂದಿ ಇಂದು ಸಚಿವರಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆಯೇ, ಬಿಜೆಪಿಯಲ್ಲಿ ಹೊಗೆಯಾಡುತ್ತಿದ್ದ ಅಸಮಾಧಾನ ಸ್ಪೋಟಗೊಂಡಿದೆ.
ಇಂದು ಮುಂಜಾನೆ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಬಿಜೆಪಿಯ 17 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಆದರೆ, ಇದರಲ್ಲಿ ಬಿಎಸ್’ವೈ ಆಪ್ತರೂ ಸೇರಿದಂತೆ ಹಲವರಿಗೆ ಪ್ರಾತಿನಿಧ್ಯ ದೊರೆತಿಲ್ಲ. ಈ ಹಿನ್ನೆಲೆಯಲ್ಲಿ ರೇಣುಕಾಚಾರ್ಯ, ಬಾಲಚಂದ್ರ ಜಾರಕಿಹೊಳಿ, ಉಮೇಶ್ ಕತ್ತಿ, ತಿಪ್ಪಾರೆಡ್ಡಿ, ಬಸನಗೌಡ ಪಾಟೀಲ್ ಯತ್ನಾಳ್, ರಾಮದಾಸ್, ಶಿವನಗೌಡ ನಾಯಕ್, ಕೆ.ಜಿ. ಬೋಪಯ್ಯ ಮುರುಗೇಶ್ ನಿರಾಣಿ ಸೇರಿದಂತೆ ಹಲವರು ಕಾರ್ಯಕ್ರಮದಿಂದ ದೂರವುಳಿದು ಅಸಮಾಧಾನ ಹೊರಹಾಕಿದ್ದಾರೆ.
ಇನ್ನು ಅತ್ಯಂತ ಪ್ರಮುಖವಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಸಂಪುಟದಲ್ಲಿ ಪ್ರಾತಿನಿಧ್ಯ ದೊರೆತಿಲ್ಲ ಎಂಬ ವಿಚಾರ ಇಡಿಯ ಭಾಗದ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ.
ಪ್ರಮುಖವಾಗಿ, ಸುಳ್ಯ ಮೀಸಲು ಕ್ಷೇತ್ರದಿಂದ ಆರು ಬಾರಿ ಗೆದ್ದಿರುವ ಎಸ್. ಅಂಗಾರ ಅವರಿಗೆ ಈ ಸಲ ಸಚಿವ ಸ್ಥಾನ ಪಕ್ಕಾ ಎಂದೇ ಹೇಳಲಾಗಿತ್ತು. ಯಾಕೆಂದರೆ ದಕ್ಷಿಣ ಕನ್ನಡ ಬಿಜೆಪಿ ಶಾಸಕರಲ್ಲಿ ಅಂಗಾರ ಬಿಟ್ಟರೆ ಉಳಿದ ಎಲ್ಲಾ ಆರು ಶಾಸಕರು ಮೊದಲ ಬಾರಿ ಆಯ್ಕೆಯಾಗಿರುವವರು. ಹೀಗಾಗಿ ಅಂಗಾರ ಅವರು ಮೊದಲ ಪಟ್ಟಿಯಲ್ಲಿ ಸ್ಥಾನ ಪಡೆಯುವುದು ನಿಶ್ಚಿತ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬಂದಿತ್ತು. ಆದರೆ ಅವರಿಗೆ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಅಂಗಾರ ಅವರ ಬೆಂಬಲಿಗರು ಹಾಗೂ ಕ್ಷೇತ್ರದ ಜನರು ತೀವ್ರ ಅಸಮಾಧಾನ ಹೊರಹಾಕಿದ್ದಾರೆ.
ಇನ್ನು, ಉಡುಪಿ ಜಿಲ್ಲೆಯ ಕುಂದಾಪುರ ವಿಧಾನಸಭಾ ಕ್ಷೇತ್ರದಿಂದ 5 ಬಾರಿ ಗೆದ್ದಿರುವ ಹಾಲಾಡಿ ಶ್ರೀನಿವಾಸ ಶೆಟ್ಟಿಯವರಿಗೂ ಬಿಎಸ್ ವೈ ಸಂಪುಟದ ಮೊದಲ ಹಂತದಲ್ಲಿ ಸ್ಥಾನ ಸಿಕ್ಕಿಲ್ಲ. 1999, 2004, 2008,ರಲ್ಲಿ ಬಿಜೆಪಿಯಿಂದ ಗೆದ್ದಿದ್ದ ಹಾಲಾಡಿ 2012ರ ಜಗದೀಶ್ ಶೆಟ್ಟರ್ ಸಂಪುಟದಲ್ಲಿ ಕೊನೆಯ ಕ್ಷಣದಲ್ಲಿ ಸಚಿವ ಸ್ಥಾನ ತಪ್ಪಿದಾಗ ಬೇಸರಿಸಿ ರಾಜೀನಾಮೆ ನೀಡಿದ್ದರು. ಇದೂ ಸಹ ಪಕ್ಷದಲ್ಲಿ ಅಸಮಾಧಾನ ಭುಗಿಲೇಳುವಂತೆ ಮಾಡಿದೆ.
ಹಾಗೆಯೇ, ಚಿತ್ರದುರ್ಗ ಶಾಸಕ ತಿಪ್ಪಾರೆಡ್ಡಿ ಮಾತನಾಡಿದ ತೀವ್ರ ಅಸಮಾಧಾನ ಹೊರಹಾಕಿದ್ದು, ನನಗೆ ಅನ್ಯಾಯ ಆಗಿದೆ. ಹೊರಗಿನವರೇ ಜಿಲ್ಲಾ ಉಸ್ತುವಾರಿ ಸಚಿವರಾಗುತ್ತಿದ್ದಾರೆ. ಹಿರಿತನ, ಪಕ್ಷನಿಷ್ಠೆ ಗುರುತಿಸಿ ಮಂತ್ರಿಗಿರಿ ನೀಡದ್ದಕ್ಕೆ ಬೇಸರವಾಗಿದೆ. ನಾನು 6 ಬಾರಿ ಶಾಸಕನಾದ್ರೂ ಸಚಿವ ಸ್ಥಾನ ಸಿಕ್ಕಿಲ್ಲ. ಈ ಬಾರಿ ನನ್ನನ್ನು ಪಕ್ಷದ ಮುಖಂಡರು ಕಡೆಗಣಿಸಿದ್ದಾರೆ. ನನಗೆ ಅನ್ಯಾಯವಾಗಿದೆ, ಕೆಲವು ಶಾಸಕರು ಇಂದು ಬೆಂಗಳೂರಿನಲ್ಲಿ ಸೇರಿ ಚರ್ಚಿಸುತ್ತೇವೆ ಎಂದಿದ್ದಾರೆ.
Discussion about this post