ಕಲ್ಪ ಮೀಡಿಯಾ ಹೌಸ್ | ಮಡಿಕೇರಿ |
ಇದೇ ಅಕ್ಟೋಬರ್ 17 ರಂದು ರಾತ್ರಿ 7.21 ಗಂಟೆಗೆ ಸಲ್ಲುವ ಮೇಷ ಲಗ್ನದಲ್ಲಿ ‘ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋಧ್ಬವ’ ಸಂಭವಿಸುವುದರಿಂದ, ಈ ಬಗ್ಗೆ ಅಗತ್ಯ ಸಿದ್ಧತೆ ಮಾಡಿಕೊಂಡಿರುವ ಸಂಬಂಧ ಅಧಿಕಾರಿಗಳಿಂದ ಪ್ರಭಾರ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅವರು ಮಾಹಿತಿ ಪಡೆದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅವರು ಪವಿತ್ರ ತೀರ್ಥೋಧ್ಬವವು ರಾತ್ರಿ ಸಂಭವಿಸುವುದರಿಂದ ಅಗತ್ಯ ಬೆಳಕು ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಅವರು ನಿರ್ದೇಶನ ನೀಡಿದರು.
ತಲಕಾವೇರಿಯಲ್ಲಿ ಗಣ್ಯರು ಹಾಗೂ ಮಾಧ್ಯಮವರಿಗೆ ಹಿಂದಿನ ವರ್ಷದಂತೆ ಪ್ರತ್ಯೇಕ ಗ್ಯಾಲರಿ ವ್ಯವಸ್ಥೆ ಮಾಡುವುದು, ಗಣ್ಯ ವ್ಯಕ್ತಿಗಳ ವಾಹನ ನಿಲುಗಡೆ, ವಿದ್ಯುನ್ಮಾನ ಮಾಧ್ಯಮಗಳ ‘ಒಬಿ’ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಸುಗಮ ಸಾರಿಗೆ ಸಂಪರ್ಕ ಸಂಬಂಧ ಅಗತ್ಯ ಬಸ್ ಸೌಲಭ್ಯ ಕಲ್ಪಿಸುವುದು, ಸೆಸ್ಕ್ ವತಿಯಿಂದ ವಿದ್ಯುತ್ ಸಂಪರ್ಕ ಒದಗಿಸುವುದು, ಶುಚಿತ್ವಕ್ಕೆ ಒತ್ತು ನೀಡುವುದು, ಅಲ್ಲಲ್ಲಿ ಡಸ್ಟ್’ಬಿನ್ ಇಡುವುದು, ಕುಡಿಯುವ ನೀರು ವ್ಯವಸ್ಥೆ ಮಾಡುವುದು ಮತ್ತಿತರ ಕಾರ್ಯಗಳನ್ನು ಗ್ರಾ.ಪಂ. ಅಧಿಕಾರಿಗಳು ನಿರ್ವಹಿಸುವಂತೆ ಜಿಲ್ಲಾಧಿಕಾರಿ ಅವರು ಹೇಳಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ತಾತ್ಕಾಲಿಕ ಕ್ಲಿನಿಕ್ ತೆರೆಯುವುದು, ಧಾರ್ಮಿಕ ಗೀತಗಾಯನ ಕಾರ್ಯಕ್ರಮ ಏರ್ಪಡಿಸುವುದು, ಹೀಗೆ ಹಲವು ಕಾರ್ಯಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅವರು ಸೂಚನೆ ನೀಡಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಹಾಗೂ ತಲಕಾವೇರಿ ಮತ್ತು ಭಾಗಮಂಡಲ ಭಗಂಡೇಶ್ವರ ದೇವಾಲಯಗಳ ಆಡಳಿತಾಧಿಕಾರಿ ಡಾ.ನಂಜುಂಡೇಗೌಡ, ಕಾರ್ಯನಿರ್ವಹಣಾಧಿಕಾರಿ ಕೃಷ್ಣಪ್ಪ ಅವರು ತಲಕಾವೇರಿ ಪವಿತ್ರ ತೀರ್ಥೋಧ್ಬವ ಸಂಬಂಧ ಇದುವರೆಗೆ ಕೈಗೊಳ್ಳಲಾಗಿರುವ ಸಿದ್ಧತೆ ಬಗ್ಗೆ ಮಾಹಿತಿ ನೀಡಿದರು.
‘ಉಪ ಪೊಲೀಸ್ ವರಿಷ್ಠಾಧಿಕಾರಿ ಗಜೇಂದ್ರ ಪ್ರಸಾದ್ ಅವರು ತಲಕಾವೇರಿ ಪವಿತ್ರ ತೀರ್ಥೋಧ್ಬವ ಸಂಬಂಧ ಪೊಲೀಸ್ ಇಲಾಖೆಯಿಂದ ಮೂವರು ಡಿವೈಎಸ್‍ಪಿಗಳು, 7 ಇನ್ಸ್‍ಪೆಕ್ಟರ್, 17 ಸಬ್ ಇನ್ಸ್‍ಪೆಕ್ಟರ್, 300 ಪೊಲೀಸರು, 100 ಮಂದಿ ಮೀಸಲು ಪೊಲೀಸ್ ಸಶಸ್ತ್ರ ಪಡೆಯನ್ನು ಬಂದೋಬಸ್ತ್‍ಗೆ ನಿಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.’
ಲೋಕೋಪಯೋಗಿ ಇಲಾಖೆಯ ಇಇ ನಾಗರಾಜು, ಅಬಕಾರಿ ಉಪ ಆಯುಕ್ತರಾದ ಜಗದೀಶ, ತಹಶೀಲ್ದಾರ್ ಪಿ.ಎಸ್.ಮಹೇಶ್, ತಾ.ಪಂ.ಇಒ ಶೇಖರ್, ತಾಲ್ಲೂಕು ವೈದ್ಯಾಧಿಕಾರಿ ಡಾ.ಚೇತನ್, ಸೆಸ್ಕ್ ಎಇಇ ವಿನಯ ಕುಮಾರ್, ನಗರಸಭೆ ಪೌರಾಯುಕ್ತರಾದ ವಿಜಯ, ಪೊಲೀಸ್ ಇನ್ಸ್‍ಪೆಕ್ಟರ್ ಮೇದಪ್ಪ ಇತರರು ತಮ್ಮ ಇಲಾಖೆ ವ್ಯಾಪ್ತಿಗೆ ಸಂಬಂಧಿಸಿದಂತೆ ಇದುವರೆಗೆ ಕೈಗೊಳ್ಳಲಾಗಿರುವ ಸಿದ್ಧತೆ ಬಗ್ಗೆ ಮಾಹಿತಿ ನೀಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post