ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಲಾಕ್‍ಡೌನ್ ಹಿನ್ನೆಲೆಯಲ್ಲಿ ಈದ್ ಹಬ್ಬವನ್ನು ಸರ್ಕಾರದ ಮಾರ್ಗಸೂಚಿಯಂತೆ ಮನೆಯಲ್ಲಿಯೇ ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸುವಂತೆ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ಮನವಿ ಮಾಡಿದರು.
ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಮುಸ್ಲಿಮ್ ಸಮುದಾಯದ ಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದರು.
ಲಾಕ್‍ಡೌನ್ ಹಿನ್ನೆಲೆಯಲ್ಲಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶವಿರುವುದಿಲ್ಲ. ಈ ಹಿನ್ನಲೆಯಲ್ಲಿ ಮನೆಯಲ್ಲಿಯೇ ಪ್ರಾರ್ಥನೆ ಸಲ್ಲಿಸಬಹುದಾಗಿದೆ. ಈ ವಿಶೇಷ ಸಂದರ್ಭದಲ್ಲಿ ಎಲ್ಲರೂ ಜಿಲ್ಲಾಡಳಿತದೊಂದಿಗೆ ಕೈಜೋಡಿಸಿ ಸಹಕರಿಸಬೇಕು ಎಂದು ಅವರು ಹೇಳಿದರು.
ಈದ್ ಶುಭಾಶಯಕ್ಕಾಗಿ ಕೈಕುಲುಕುವುದು, ತಬ್ಬಿಕೊಳ್ಳುವುದನ್ನು ಆದಷ್ಟು ತಪ್ಪಿಸಬೇಕು. ಕಂಟೈನ್‍ಮೆಂಟ್ ಪ್ರದೇಶದಲ್ಲಿ ಈ ರೀತಿಯಲ್ಲಿ ಶುಭಾಶಯ ಯಾವುದೇ ಕಾರಣಕ್ಕೂ ಕೋರಬಾರದು. ಈದ್ಗಾಗಳಲ್ಲಿ ಪ್ರಾರ್ಥನೆಗೆ ಅವಕಾಶವಿರುವುದಿಲ್ಲ. ಎಲ್ಲರೂ ಸರ್ಕಾರದ ಮಾರ್ಗಸೂಚಿಯಂತೆ ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಅವರು ಮನವಿ ಮಾಡಿದರು.
ಸಂಪೂರ್ಣ ಲಾಕ್‍ಡೌನ್
ಶನಿವಾರ ಸಂಜೆ 7 ಗಂಟೆಯಿಂದ ಸೋಮವಾರ ಬೆಳಿಗ್ಗೆ 7 ರವರೆಗೆ ಜಿಲ್ಲೆಯಾದ್ಯಂತ ಸಂಪೂರ್ಣ ಲಾಕ್‍ಡೌನ್ ಇರಲಿದೆ. ಈ ಅವಧಿಯಲ್ಲಿ ದಿನಸಿ ಸಾಮಾಗ್ರಿಗಳು, ಹಾಲು, ತರಕಾರಿ, ಮೀನು, ಮಾಂಸ, ಕೋಳಿ ಅಂಗಡಿಗಳು ಸೇರಿದಂತೆ ಅಗತ್ಯ ವಸ್ತುಗಳ ಅಂಗಡಿಗಳನ್ನು ತೆರೆಯಲು ಮಾತ್ರ ಅವಕಾಶ ನೀಡಲಾಗುವುದು. ಯಾವುದೇ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಇರುವುದಿಲ್ಲ. ಜನರು ಅನಗತ್ಯವಾಗಿ ಹೊರಬಾರದೆ ಸ್ವಯಂಪ್ರೇರಿತರಾಗಿ ಮನೆಯಲ್ಲಿಯೇ ಇದ್ದು, ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.
Get in Touch With Us info@kalpa.news Whatsapp: 9481252093
Discussion about this post