ಕಲ್ಪ ಮೀಡಿಯಾ ಹೌಸ್
ಚಳ್ಳಕೆರೆ: ಕೊರೋನಾ ಎರಡನೆಯ ಅಲೆಯನ್ನು ತಡೆಯಲು ಸೈನಿಕರ ರೀತಿಯಲ್ಲಿ ಕೆಲಸ ಮಾಡಬೇಕು ಎಂದು ಶಾಸಕ ಟಿ.ರಘುಮೂರ್ತಿ ಅಧಿಕಾರಿಗಳಿಗೆ ಹೇಳಿದರು.
ತಾಲ್ಲೂಕು ಪಂಚಾಯಿತಿಯಲ್ಲಿ ನಡೆದ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಕೊರೋನಾ ದೃಢಪಡುವ ಸೋಂಕಿತರಿಗೆ ಎಲ್ಲಾ ರೀತಿಯ ಚಿಕಿತ್ಸೆಯನ್ನು ಒದಗಿಸಬೇಕು. ಯಾವುದೇ ಕಾರಣಕ್ಕೂ ಪ್ರಕರಣಗಳನ್ನು ಜಿಲ್ಲಾ ಕೋವಿಡ್ ಸೆಂಟರ್‌ಗಳಿಗೆ ಕಳುಹಿಸಿ ಕೊಡಬಾರದು ಎಂದು ಸೂಚಿಸಿದರು.

ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತಿದ್ದು, ನಗರಪ್ರದೇಶದಿಂದ ಹೆಚ್ಚು ಜನರು ಗ್ರಾಮಗಳಿಗೆ ಬರುತ್ತಿದ್ದಾರೆ. ಆದ್ದರಿಂದ ತಾಲೂಕಿನ ಎಲ್ಲಾ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆ ಉಂಟಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಆರೋಗ್ಯಾಧಿಕಾರಿಗಳಿಗೆ ತಿಳಿಸಿದರು.
ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡಿ ಅವರಲ್ಲಿ ಆತ್ಮ ಸ್ಥೈರ್ಯ ತುಂಬಬೇಕು. ಮತ್ತು ಜನರಲಿರುವ ಭಯವನ್ನು ಹೋಗಲಾಡಿಸಬೇಕು. ಗ್ರಾಮ ಹಾಗೂ ನಗರ ಪ್ರದೇಶದಲ್ಲಿ ಅನಗತ್ಯವಾಗಿ ತಿರುಗಾಡುವವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಮತ್ತು ಪಿಡಿಒ, ವಿ.ಎ, ಅಂಗನವಾಡಿ, ಹಾಗೂ ಆಶಾ ಕಾರ್ಯಕರ್ತೆಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಹೇಳಿದರು.

ಗ್ರಾಮೀಣ ಪ್ರದೇಶದ ರಸ್ತೆ, ಚರಂಡಿಯ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆವರೆಗೆ ಕೇಂದ್ರದಲ್ಲೇ ಇರಲು ಅಂಗನವಾಡಿ ಕಾರ್ಯಕರ್ತೆಯರಿಗೆ ತಿಳಿವಳಿಕೆ ನೀಡಬೇಕು ಎಂದು ಇಒ ಅಧಿಕಾರಿಗಳಿಗೆ ಹೇಳಿದರು.
ತಹಶೀಲ್ದಾರ್ ಎಂ. ಮಲ್ಲಿಕಾರ್ಜುನ, ತಾಲೂಕಿನಲ್ಲಿ ಕಂಡು ಬಂದ ಕೋವಿಡ್ 19 ಸಕ್ರಿಯ ಪ್ರಕರಣಗಳಿಗೂ ಮನೆಯಲ್ಲೆ ಚಿಕಿತ್ಸೆ ಒದಗಿಸಲಾಗಿದೆ ಎಂದು ಹೇಳಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ಸುರೇಶ್, ಡಿವೈಎಸ್ಪಿ ಕೆ.ವಿ. ಶ್ರೀಧರ್, ಪೋಲಿಸ್ ನಿರೀಕ್ಷಕ ಎಸ್.ಜೆ. ತಿಪ್ಪೇಸ್ವಾಮಿ, ನಗರಸಭೆ ಅಧ್ಯಕ್ಷೆ ಸಿ.ಬಿ. ಜಯಲಕ್ಷ್ಮೀ, ಉಪಾಧ್ಯಕ್ಷೆ ಜೈತುನ್ಬಿ, ಬಿಸಿಎಂ ಇಲಾಖೆ ತಾಲ್ಲೂಕು ಅಧಿಕಾರಿ ಡಿ.ಟಿ.ಜಗನ್ನಾಥ್, ಕಂದಾಯ ಇಲಾಖೆ ಅಧಿಕಾರಿ ನಿಂಗೇಗೌಡ ಇದ್ದರು.
ವರದಿ: ಸುರೇಶ್ ಬೆಳಗೆರೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
















