ಕಲ್ಪ ಮೀಡಿಯಾ ಹೌಸ್ | ಚಂದ್ರಗುತ್ತಿ |
ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಅತಿಥಿ ಶಿಕ್ಷಕರ ಪಾತ್ರ ಮಹತ್ವವಾಗಿದೆ ಎಂದು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ದಯಾನಂದ್ ಕಲ್ಲೇರ್ ಹೇಳಿದರು.
ಚಂದ್ರಗುತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಹೋಬಳಿ ವ್ಯಾಪ್ತಿಯ ವಿವಿಧ ಶಾಲೆಗಳ ಅತಿಥಿ ಶಿಕ್ಷಕರ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು.
ತಾಲೂಕಿನಲ್ಲಿ ಶಿಕ್ಷಕರ ಕೊರತೆಯನ್ನು ನೀಗಿಸಲು ಇಲಾಖೆಯು ಅತಿಥಿ ಶಿಕ್ಷಕರನ್ನು ಶೈಕ್ಷಣಿಕ ವರ್ಷದ ಆರಂಭದಿಂದಲೇ ನೇಮಕಾತಿ ಮಾಡಿದೆ. ಅತಿಥಿ ಶಿಕ್ಷಕರು ಇದರ ಸದುಪಯೋಗ ಪಡೆದುಕೊಂಡು ಶಾಲೆಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡಬೇಕು. ಶಾಲೆಗಳಲ್ಲಿ ಉತ್ತಮ ಕಲಿಕಾ ವಾತಾವರಣವನ್ನು ನಿರ್ಮಿಸಬೇಕು. ಸರ್ಕಾರಿ ಶಾಲೆಗಳನ್ನು ಉತ್ತಮ ಜ್ಞಾನ ಕೇಂದ್ರಗಳನ್ನಾಗಿ ಮಾಡಬೇಕು ಎಂದರು.
Also read: ವಿಧಾನಸೌಧದ ಮುಖ್ಯಮಂತ್ರಿ ಕಚೇರಿಯ ದಕ್ಷಿಣ ದ್ವಾರ ತೆರೆಸಿದ ಸಿಎಂ ಸಿದ್ಧರಾಮಯ್ಯ
ಸಿ.ಆರ್.ಪಿ ಎಂ.ಎಲ್ ರಾಘವೇಂದ್ರ ಮಾತನಾಡಿ ಶಿಕ್ಷಣ ಸಚಿವರು ನಮ್ಮ ತಾಲೂಕಿನವರಾಗಿರುವುದರಿಂದ ಇಲಾಖೆಯ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಮತ್ತು ತಾಲೂಕಿನ ಶೈಕ್ಷಣಿಕ ಪ್ರಗತಿಯನ್ನು ಉತ್ತಮಗೊಳಿಸಲು ಅತಿಥಿ ಶಿಕ್ಷಕರ ಕಾರ್ಯಗಾರವು ಉಪಯುಕ್ತ ಎಂದರು. ಶಾಲೆಗಳಲ್ಲಿ ಅತಿಥಿ ಶಿಕ್ಷಕರಿಗೆ ಇಲಾಖೆಯ ಕೆಲಸ ಕಾರ್ಯಗಳನ್ನು ಗೊಂದಲವಿಲ್ಲದೆ ನಿರ್ವಹಿಸಲು ಅನುಕೂಲವಾಗುತ್ತದೆ ಎಂದು ತಿಳಿಸಿದರು.
ತರಬೇತಿ ಕಾರ್ಯಗಾರದಲ್ಲಿ ಅತಿಥಿ ಶಿಕ್ಷಕರಿಗೆ ಇಲಾಖೆಯ ಕಾರ್ಯಕ್ರಮಗಳಾದ ವಿದ್ಯಾ ಪ್ರವೇಶ, ನಲಿಕಲಿ ಇಲಾಖೆಯ ವಿವಿಧ ಕಾರ್ಯಕ್ರಮಗಳ ಕುರಿತು ಸಂಪನ್ಮೂಲ ವ್ಯಕ್ತಿಗಳು ಮಾಹಿತಿ ನೀಡಿದರು. ಚಂದ್ರಗುತ್ತಿ, ಗುಡುವಿ, ಹರೀಶಿ, ಬೆನ್ನೂರು, ಹೊಸಬಾಳೆ, ಕ್ಲಸ್ಟರ್ಗಳ ವ್ಯಾಪ್ತಿಯ ವಿವಿಧ ಶಾಲೆಗಳಿಂದ ಸುಮಾರು 60 ಅತಿಥಿ ಶಿಕ್ಷಕರು ಭಾಗವಹಿಸಿದ್ದರು.
ವರದಿ: ಮಧುರಾಮ್, ಸೊರಬ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post