ಕಲ್ಪ ಮೀಡಿಯಾ ಹೌಸ್ | ಚಿಕ್ಕಬಳ್ಳಾಪುರ |
75ನೇ ಅಮೃತ ಸ್ವಾತಂತ್ರ್ಯ ಮಹೋತ್ಸವದ ಅಂಗವಾಗಿ ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆಯ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ನಗರದ ಸರ್.ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಸಂಭ್ರಮದಿಂದ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಎನ್.ಎಮ್.ನಾಗರಾಜ್ ಅವರು ತಿಳಿಸಿದರು.
ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆಯ ಕುರಿತು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

Also read: ಕಾರ್ಗಿಲ್ ವಿಜಯೋತ್ಸವ: ಸನ್ಮಾನ
ಅಂದು ಕ್ರೀಡಾಂಗಣದಲ್ಲಿ ಕೋವಿಡ್-19ರ ಸೋಂಕು ಹರಡದಂತೆ ನಿಯಂತ್ರಿಸಲು ಥರ್ಮಲ್ ಸ್ಕ್ರೀನಿಂಗ್, ಸ್ಯಾನಿಟೈಜರ್ ವ್ಯವಸ್ಥೆ ಮತ್ತು ಆಂಬುಲೆನ್ಸ್ ವ್ಯವಸ್ಥೆ ಮಾಡಲು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು ಹಾಗೂ ವೇದಿಕೆ ಸಿದ್ಧತೆ, ಅಲಂಕಾರ, ಆಸನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಆಹ್ವಾನ ಪತ್ರಿಕೆಗಳ ಮುದ್ರಣ, ಕಾರ್ಯಕ್ರಮ ನಿರ್ವಹಣೆ, ನಿರೂಪಣೆ, ಕ್ರೀಡಾಂಗಣ ಸ್ವಚ್ಛತೆ ಇನ್ನಿತರೆ ಸಿದ್ಧತಾ ಕಾರ್ಯಗಳನ್ನು ಸಂಬಂಧ ಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಹಂಚಿಕೆ ಮಾಡಿ ಈ ಎಲ್ಲಾ ಕಾರ್ಯಗಳನ್ನು ಸಮರ್ಪಕವಾಗಿ ಮಾಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಶಿಕ್ಷಣ ಇಲಾಖೆಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲು ಸೂಚಿಸಿದರು.

ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಮೂಲ ಸೌಕರ್ಯ ಒದಗಿಸಲು ಮುಖ್ಯವಾಗಿ ಕುಡಿಯುವ ನೀರು, ಶೌಚಾಲಯ, ಸ್ವಚ್ಛತೆ, ವಿದ್ಯುತ್ ಸಂಪರ್ಕ ಒದಗಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.
ಧ್ವಜಾರೋಹಣ ವೇಳೆ ವಿದ್ಯುತ್ ತಂತಿಗಳ ಮೇಲೆ ಎಚ್ಚರವಹಿಸಿ:
ಹರ್ ಘರ್ ತಿರಂಗಾ ಅಭಿಯಾನದಡಿ ಪ್ರತಿಯೊಬ್ಬರು ಸಹ ಆಗಸ್ಟ್ 13 ರಿಂದ 15 ರವರೆಗೆ ಜಿಲ್ಲೆಯ ಎಲ್ಲ ಮನೆಗಳ ಮೇಲೆ ರಾಷ್ಟ್ರ ಧ್ವಜವನ್ನು ಹಾರಿಸಬೇಕು. ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಮನೆಯ ಮೇಲೆ ಕಡ್ಡಾಯವಾಗಿ ಧ್ವಜಾರೋಹಣ ಮಾಡಬೇಕು ಎಂದು ಕಟ್ಟುನಿಟ್ಟಿನ ಆದೇಶ ಹೊರಡಿಸಿದರು.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಹೆಚ್.ಅಮರೇಶ್, ಉಪವಿಭಾಗಾಧಿಕಾರಿ ಡಾ.ಜಿ.ಸಂತೋಷ್ ಕುಮಾರ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶಿವಕುಮಾರ್, ಡಿ.ವೈ.ಎಸ್.ಪಿ. ವಾಸುದೇವ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.









Discussion about this post