ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಚಿಕ್ಕಬಳ್ಳಾಪುರ: ಕೇರಳ, ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ, ರಾಜ್ಯದ ಗಡಿಭಾಗಗಳಲ್ಲಿ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಸಮಾಜ ಕಲ್ಯಾಣ ಇಲಾಖೆಯ ನೂತನ ವಿದ್ಯಾರ್ಥಿನಿಲಯ ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇರಳ, ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮ ವಹಿಸಲು ಸೂಚಿಸಲಾಗಿದೆ ಎಂದರು.
ಇನ್ನಷ್ಟು ಕ್ರಮ ಕೈಗೊಳ್ಳುವ ಸಂಬಂಧ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು. ಪ್ರಧಾನಿ ನರೇಂದ್ರ ಮೋದಿಯವರು ಉಚಿತವಾಗಿ ಲಸಿಕೆ ನೀಡುತ್ತಿದ್ದಾರೆ. ಇದನ್ನು ಸದುಪಯೋಪಡಿಸಿಕೊಳ್ಳಬೇಕು. ಸಾರ್ವಜನಿಕರು ಕೋವಿಡ್ ಸುರಕ್ಷತಾ ಕ್ರಮ ಪಾಲಿಸಬೇಕು ಎಂದು ಹೇಳಿದರು.
ಜಾತಿ ಮೀಸಲು ಬೇಡಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಕಾನೂನಿನ ಚೌಕಟ್ಟು, ಸಾಂವಿಧಾನಿಕ ಆಶಯಗಳು ಮತ್ತು ಬೇಡಿಕೆಗಳು ಇವೆಲ್ಲವನ್ನೂ ಸಮತೋಲನದಿಂದ ವೈಜಾನಿಕವಾಗಿ ಪರಾಮರ್ಶಿಸಿ, ಸಾಧ್ಯಾಸಾಧ್ಯತೆಗಳನ್ನು ಪರಿಗಣಿಸಿ ಒಂದು ಅಂತಿಮ ರೂಪ ನೀಡುವುದು ನಮ್ಮ ಸರ್ಕಾರದ ಉದ್ದೇಶ ಎಂದು ವಿವರಿಸಿದರು.
ನಂತರ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ಕಳೆದ ಒಂದು ವರ್ಷದಲ್ಲಿ ಬೇರೆ ರಾಜ್ಯಗಳಂತೆ ಸರ್ಕಾರಿ ನೌಕರರಿಗೆ ವೇತನ ಕಡಿತ, ಬಡ್ತಿ ಕಡಿತ ಮಾಡಿಲ್ಲ. ಆರ್ಥಿಕ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡರೂ ವೇತನ ಕಡಿತಗೊಳಿಸಲಿಲ್ಲ. ಕೋವಿಡ್ ಹಿನ್ನೆಲೆಯಲ್ಲಿ ಅನೇಕ ಇಲಾಖೆಗಳ ನೌಕರರು ಸರ್ಕಾರದೊಂದಿಗೆ ಕೈ ಜೋಡಿಸಿ ಸೇವೆ ಮಾಡಿದ್ದಾರೆ. ಇದರಿಂದಾಗಿ ಕೋವಿಡ್ ಅನ್ನು ಯಶಸ್ವಿಯಾಗಿ ನಿಯಂತ್ರಿಸಲು ಸಾಧ್ಯವಾಗಿದೆ ಎಂದರು.
ದೈಹಿಕ ಆರೋಗ್ಯ ಚೆನ್ನಾಗಿದ್ದರೆ ಉತ್ತಮವಾಗಿ ಕೆಲಸ ಮಾಡಬಹುದು. ವರ್ಷದಲ್ಲಿ ಒಮ್ಮೆಯಾದರೂ ನೌಕರರು ಕ್ರೀಡೆ, ಸ್ಪರ್ಧೆಗಳಲ್ಲಿ ಭಾಗವಹಿಸಬೇಕು. ಕ್ರೀಡೆ ಉತ್ತೇಜನಕ್ಕೆ ಜಿಲ್ಲೆಯಲ್ಲಿ ಕ್ರೀಡಾ ವಿಲೇಜ್ ಆರಂಭಿಸಲಾಗುವುದು ಎಂದು ಭರವಸೆ ನೀಡಿದರು.
ವಿವಿಧ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ:
286 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಗೋಪಿನಾಥ ಬೆಟ್ಟದ ರಸ್ತೆ ಉದ್ಘಾಟನೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಕೈಗಾರಿಕಾ ವಲಯದಲ್ಲಿ ನಿರ್ಮಾಣಗೊಂಡ 3.25 ಕೋಟಿ ರೂ. ವೆಚ್ಚದ ಹಾಸ್ಟೆಲ್ ಉದ್ಘಾಟನೆ, ೫ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾದ ಲೋಕೋಪಯೋಗಿ ಇಲಾಖೆ ಕಚೇರಿ ಕಟ್ಟಡ ಉದ್ಘಾಟನೆ, ಪೊಲೀಸ್ ವಸತಿ ಗೃಹ ಸಮುಚ್ಚಯದಲ್ಲಿ ರಸ್ತೆ, ಒಳಚರಂಡಿ ಕಾಮಗಾರಿಗೆ ಚಾಲನೆ, 3 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾದ ಸರ್ಕಾರಿ ಪದವಿ ಪೂರ್ವ ಕಾಲೇಜು ಕಟ್ಟಡ ಉದ್ಘಾಟನೆ ಕಾರ್ಯಕ್ರಮದಲ್ಲಿ ಸಚಿವರು ಭಾಗವಹಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post