ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಹಿಂದೂ #Hindu ಧರ್ಮದ ವ್ಯಕ್ತಿ ಹಿಂದೂ, ಸಿಖ್ ಹಾಗೂ ಬೌದ್ಧ ಧರ್ಮಕ್ಕೆ ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ ಮತಾಂತರಗೊಂಡರೆ ಅಂತಹ ವ್ಯಕ್ತಿಗಳ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸ್ಥಾನಮಾನ ರದ್ದುಗೊಳ್ಳುತ್ತದೆ ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ.
ಈ ಕುರಿತಂತೆ ನ್ಯಾಯಮೂರ್ತಿಗಳಾದ ಪಿ.ಕೆ. ಮಿಶ್ರಾ ಮತ್ತು ಮನಮೋಹನ್ ಅವರಿದ್ದ ಪೀಠವು ಮಹತ್ವದ ತೀರ್ಪು ನೀಡಿದೆ.
ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮಗಳಿಗೆ ಸೇರಿದ ವ್ಯಕ್ತಿಗಳು ಮಾತ್ರ ಪರಿಶಿಷ್ಟ ಜಾತಿ #ScheduledCaste ಸ್ಥಾನಮಾನವನ್ನು ಪಡೆಯಬಹುದು ಮತ್ತು ಕ್ರಿಶ್ಚಿಯನ್ #Christian ಧರ್ಮದಂತಹ ಯಾವುದೇ ಇತರ ಧರ್ಮಕ್ಕೆ ಮತಾಂತರಗೊಂಡರೆ ಆ ವ್ಯಕ್ತಿ ಪರಿಶಿಷ್ಟ ಜಾತಿ ಸ್ಥಾನಮಾನವನ್ನು ಕಳೆದುಕೊಳ್ಳುತ್ತಾನೆ ಎಂದು ನ್ಯಾಯಪೀಠ ಹೇಳಿದೆ.
ಪ್ರಮುಖವಾಗಿ, ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ ದಲಿತ ವ್ಯಕ್ತಿಯೊಬ್ಬರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ #ScheduledTribe (ದೌರ್ಜನ್ಯ ತಡೆ) ಕಾಯ್ದೆ (ಎಸ್ಸಿ,ಎಸ್ಟಿ ಕಾಯ್ದೆ)ಯಡಿ ರಕ್ಷಣೆ ಕೇಳುವಂತಿಲ್ಲ ಎಂದು ನ್ಯಾಯಪೀಠ ತೀರ್ಪು ನೀಡಿದೆ.
ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮಗಳನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮವನ್ನು ಅನುಸರಿಸುವ, ಪ್ರತಿಪಾದಿಸುವ ಯಾವುದೇ ವ್ಯಕ್ತಿ ಎಸ್’ಸಿ, ಎಸ್’ಟಿ ಸಮುದಾಯದ ಸದಸ್ಯನಾಗಿರುವುದಿಲ್ಲ. ಅಲ್ಲದೇ, ಬೇರೆ ಯಾವುದೇ ಧರ್ಮಕ್ಕೆ ಮತಾಂತರಗೊಂಡರೆ ಎಸ್’ಸಿ, ಎಸ್’ಟಿ ಸ್ಥಾನಮಾನವನ್ನು ಕಳೆದುಕೊಳ್ಳುತ್ತಾರೆ ಎಂದು ನ್ಯಾಯಪೀಠ ಹೇಳಿದೆ.
ಹಿನ್ನೆಲೆಯೇನು?
ಆಂಧ್ರಪ್ರದೇಶ #Andrapradesh ಹೈಕೋರ್ಟ್ 2025ರಲ್ಲಿ ನೀಡಿದ್ದ ತೀರ್ಪಿನ ವಿರುದ್ಧ ಚಿಂತಾಡ ಆನಂದ್ ಎಂಬ ಪಾದ್ರಿ ಸಲ್ಲಿಸಿದ ಮೇಲ್ಮನವಿಯ ಹಿನ್ನೆಲೆಯಲ್ಲಿ ಈ ತೀರ್ಪು ನೀಡಿದೆ.
ಆನಂದ್ ಅವರು ಅಕ್ಕಲ ರಾಮಿರೆಡ್ಡಿ ಮತ್ತು ಇತರರಿಂದ ಜಾತಿ ತಾರತಮ್ಯ ಮತ್ತು ನಿಂದನೆಯನ್ನು ಎದುರಿಸಿದ್ದಾರೆ ಎಂದು ಆರೋಪಿಸಿದ್ದರು. ಅವರು ಅವರ ವಿರುದ್ಧ ಎಸ್ಸಿ/ಎಸ್ಟಿ ಕಾಯ್ದೆಯಡಿ ದೂರು ದಾಖಲಿಸಿದ್ದರು. ಪೊಲೀಸರು ಅದರ ಆಧಾರದ ಮೇಲೆ ಎಫ್’ಐಆರ್ ದಾಖಲಿಸಿದ್ದರು. ಆನಂತರ ರಾಮಿರೆಡ್ಡಿ ಪ್ರಕರಣವನ್ನು ರದ್ದುಗೊಳಿಸುವಂತೆ ಹೈಕೋರ್ಟ್ ಮೊರೆ ಹೋದರು.
ಆನಂದ್ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ ನಂತರ ತಮ್ಮ ಎಸ್ಸಿ ಸ್ಥಾನಮಾನವನ್ನು ಕಳೆದುಕೊಂಡಿದ್ದಾರೆ. ಆದ್ದರಿಂದ ಎಸ್ಸಿ, ಎಸ್ಟಿ ಕಾಯ್ದೆಯಡಿ ರಕ್ಷಣೆ ಪಡೆಯಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿ ಎನ್. ಹರಿನಾಥ್ ಅವರು ಎಫ್’ಐಆರ್ ಅನ್ನು ರದ್ದುಗೊಳಿಸಿದರು. ಅದರ ಹಿನ್ನೆಲೆಯಲ್ಲಿ ಆನಂದ್ ಸುಪ್ರೀಂ ಕೋರ್ಟ್’ಗೆ ಮೇಲ್ಮನವಿ ಸಲ್ಲಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















